ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತೀರ್ಥೋದ್ಭವ: ಅಗತ್ಯ ಸಿದ್ಧತೆಗೆ ಸೂಚನೆ

Last Updated 8 ಅಕ್ಟೋಬರ್ 2017, 8:53 IST
ಅಕ್ಷರ ಗಾತ್ರ

ಮಡಿಕೇರಿ: ತಾಲ್ಲೂಕಿನ ತಲಕಾವೇರಿಯಲ್ಲಿ ಇದೇ 17ರಂದು ‘ಕಾವೇರಿ ತೀರ್ಥೋದ್ಭವ’ ನಡೆಯಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜನಪ್ರತಿನಿಧಿಗಳು ಅಧಿಕಾರಿಗಗಳಿಗೆ ಸೂಚನೆ ನೀಡಿದರು. ಭಾಗಮಂಡಲ ತ್ರಿವೇಣಿ ಸಂಗಮದ ಬಳಿಯ ಸಭಾಂಗಣದಲ್ಲಿ ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಶಾಸಕ ಕೆ.ಜಿ. ಬೋಪಯ್ಯ ಮಾತನಾಡಿ, ‘ಅಂದು ಮಧ್ಯಾಹ್ನ 12.33ಕ್ಕೆ ತೀರ್ಥೋದ್ಭವ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಸೂಕ್ತ ಬಂದೋಬಸ್ತ್‌ ಕೈಗೊಳ್ಳಬೇಕು. ಅಗತ್ಯ ಬಸ್‌ ಸೌಕರ್ಯವನ್ನೂ ಮಾಡಬೇಕು ಎಂದು ಸೂಚಿಸಿದರು.

ಮಡಿಕೇರಿಯಿಂದ ತಲಕಾವೇರಿವರೆಗೆ ಗುಂಡಿ ಬಿದ್ದಿರುವ ರಸ್ತೆಯನ್ನು ಡಾಂಬರೀಕರಣ ಮಾಡಬೇಕು. ಕಾಡು ಕಡಿಯುವುದು, ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಬೇಕು. ಜಾತ್ರೆಗೆ ಬರುವ ವಾಹನಗಳಿಗೆ ನಿಲುಗಡೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಪೊಲೀಸ್‌ ಇಲಾಖೆಗೆ ಸೂಚಿಸಿದರು.

ದೂರದ ಊರುಗಳಿಂದ ಬರುವ ಭಕ್ತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಪರಿಸರ ಶುಚಿತ್ವಕ್ಕೆ ಆದ್ಯತೆ ನೀಡಬೇಕು. ಆ ನಿಟ್ಟಿನಲ್ಲಿ ತಾತ್ಕಾಲಿಕ ಶೌಚಾಲಯ ನಿರ್ಮಿಸಬೇಕು, ಕುಡಿಯುವ ನೀರು ವ್ಯವಸ್ಥೆ, ಅಂಬುಲೆನ್ಸ್‌ ಸೌಲಭ್ಯ ಕಲ್ಪಿಸುವತ್ತ ಗಮನ ಹರಿಸುವಂತೆ ಶಾಸಕರು ಸಲಹೆ ಮಾಡಿದರು.

ತುಲಾ ಸಂಕ್ರಮಣ ಜಾತ್ರಾ ಮಹೋತ್ಸವದಲ್ಲಿ ಅಡಚಣೆ ಇಲ್ಲದೆ ಸುವ್ಯವಸ್ಥಿತವಾಗಿ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕಿದೆ ಎಂದು ಕೆ.ಜಿ.ಬೋಪಯ್ಯ ಅವರು ಮನವಿ ಮಾಡಿದರು.

ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಮಾತನಾಡಿ, ಲೋಕೋಪಯೋಗಿ ಇಲಾಖೆಯ ಕಾರ್ಯ ಚಟುವಟಿಕೆಗಳು ಉತ್ತಮವಾಗಿಲ್ಲ. ಒಂದು ವರ್ಷದಿಂದ ಜಿಲ್ಲೆಯ ನಾನಾ ಕಡೆಗಳಲ್ಲಿ ಗುಂಡಿ ಬಿದ್ದಿರುವ ರಸ್ತೆಗಳನ್ನು ಸರಿಪಡಿಸುವಂತೆ ಹೇಳುತ್ತಾ ಬಂದರೂ ಕಿವಿಗೊಡುತ್ತಿಲ್ಲ ಎಂದು ಅಸಮಾಧಾನ ಹೊರಹಾಕಿದರು.

ವಿಧಾನ ಪರಿಷತ್ ಸದಸ್ಯೆ ಸುನಿಲ್ ಸುಬ್ರಮಣಿ, ಪವಿತ್ರ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು. ಸುಗಮ ರಸ್ತೆ, ವಿದ್ಯುತ್ ಸಂಪರ್ಕ ಮತ್ತಿತರ ಬಗ್ಗೆ ವಿಶೇಷ ಗಮನ ಹರಿಸಬೇಕಿದೆ ಎಂದು ಅವರು ಸಲಹೆ ಮಾಡಿದರು.

ಕಾಂಗ್ರೆಸ್‌ ಮುಖಂಡ ಬಿದ್ದಾಟಂಡ ಎಸ್. ತಮ್ಮಯ್ಯ ಮಾತನಾಡಿ, ಮಡಿಕೇರಿ– -ಭಾಗಮಂಡಲ ರಸ್ತೆ ಮಾರ್ಗದ ತಾವೂರು ಬಳಿ ಸೇತುವೆ ಕುಸಿದು ಸುಮಾರು ವರ್ಷ ಕಳೆದರೂ ಸಹ ಸೇತುವೆ ಸರಿಪಡಿಸಿರುವುದಿಲ್ಲ ಎಂದು ದೂರಿದರು.

ಹೊಸೂರು ರಮೇಶ್ ಜೋಯಪ್ಪ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ತಲಕಾವೇರಿ, ಭಾಗಮಂಡಲಕ್ಕೆ ಪ್ರತೀ ವಾರದ ಅಂತ್ಯದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ವಾಹನ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಆದ್ದರಿಂದ ವಾಹನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ತರಬೇಕು ಎಂದು ಅವರು ಮನವಿ ಮಾಡಿದರು.

ಕುದುಕುಳಿ ಜೆ. ಭರತ್, ಮುಖ್ಯ ಅರ್ಚಕರಾದ ನಾರಾಯಣಾಚಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಎಂ. ಸತೀಶ್ ಕುಮಾರ್ , ತಕ್ಕ ಮುಖ್ಯಸ್ಥರಾದ ಕೋಡಿ ಮೋಟಯ್ಯ, ಜಿ.ಪಂ. ಸದಸ್ಯರಾದ ಕವಿತಾ ಪ್ರಭಾಕರ್, ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್‌, ಉಪ ವಿಭಾಗಾಧಿಕಾರಿ ಡಾ.ನಂಜುಂಡೇಗೌಡ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT