ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿಜೆಪಿಯವರು ಮೀಸಲಾತಿ ವಿರೋಧಿಗಳು’: ಸಿದ್ದರಾಮಯ್ಯ

Last Updated 8 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಬಿಜೆಪಿಯವರು ಮೀಸಲಾತಿ ವಿರೋಧಿಗಳಾಗಿದ್ದು, ರಾಜ್ಯದಲ್ಲಿ ಮೀಸಲಾತಿ ಪ್ರಮಾಣವನ್ನು ಶೇ 50ರಿಂದ 70ಕ್ಕೆ  ಹೆಚ್ಚಿಸುವ ಸರ್ಕಾರದ ಉದ್ದೇಶವನ್ನು ಅನಗತ್ಯವಾಗಿ ಟೀಕಿಸುತ್ತಿದ್ದಾರೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.

ಸಮಾಜ ಕಲ್ಯಾಣ ಇಲಾಖೆ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ‘ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ’ದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಚಿಂತಿಸಿದೆ. ಆದರಿದು ಓಟಿಗಾಗಿ ನಡೆಸುತ್ತಿರುವ ರಾಜಕಾರಣ ಎಂದು ಬಿಜೆಪಿ ರಾಜ್ಯ ಘಟಕದ ಯಡಿಯೂರಪ್ಪ ಟೀಕಿಸಿದ್ದಾರೆ. ಅವರಿಗೆ ತಾಕತ್ತಿದ್ದರೆ ರಾಜ್ಯದಲ್ಲಿ ಅವರ ಪಕ್ಷ ಅಧಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣವನ್ನು ಶೇ 70ಕ್ಕೆ ಹೆಚ್ಚಿಸುವುದಾಗಿ ಘೋಷಿಸಲಿ’ ಎಂದು ಮುಖ್ಯಮಂತ್ರಿ ಸವಾಲು ಹಾಕಿದರು.

‘ಕೆಲವರು ನಿಮ್ಮ ಸಮುದಾಯವನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಾರೆ. ಅದಕ್ಕೆ ಮರುಗಳಾಗಬಾರದು. ನೀವು ನಮ್ಮ ಜೊತೆ ಇರಿ, ನಾವು ನಿಮ್ಮ ಜೊತೆ ಇರುತ್ತೇವೆ. ಭೋವಿ ಸಮಾಜವನ್ನು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಬೆಳೆಸುವುದು ನಮ್ಮ ಜವಾಬ್ದಾರಿ’ ಎಂದು ಸಿದ್ದರಾಮಯ್ಯ ಹೇಳಿದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭೋವಿ ಸಮಾಜದ ಐವರಿಗೆ ಟಿಕೆಟ್ ನೀಡಲಾಗಿತ್ತು. ಈ ಬಾರಿ ಇನ್ನೂ ಹೆಚ್ಚಿನ ಟಿಕೆಟ್ ನೀಡಲು ಪ್ರಯತ್ನಿಸಲಾಗುವುದು. ಮುಂದಿನ ಬಜೆಟ್‌ನಲ್ಲಿ ಭೋವಿ ಗುರುಪೀಠಕ್ಕೂ ಅನುದಾನ ನೀಡಲಾಗುವುದು, ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಸದಸ್ಯ ಹುದ್ದೆ ಖಾಲಿಯಾದಾಗ ಈ ಸಮುದಾಯದವರನ್ನೇ ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.

ಭೋವಿ ಅಭಿವೃದ್ಧಿ ನಿಗಮ ರಚಿಸುವುದಾಗಿ 2015ರಲ್ಲಿ ಭರವಸೆ ನೀಡಲಾಗಿತ್ತು. ಜಾತಿಗೊಂದು ನಿಗಮ ಅಗತ್ಯವೇ ಎಂದು ಕೆಲವರು ಅಡ್ಡಿಪಡಿಸಿದರೂ, ಈ ಜನಾಂಗದ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸುವಲ್ಲಿ ಬದ್ಧತೆ ತೋರಿಸಲಾಗಿದೆ. ವಿವಿಧ ಕಾರ್ಯಚಟುವಟಿಕೆಗಳಿಗಾಗಿ ಮೊದಲ ವರ್ಷ ₹ 50 ಕೋಟಿ ಅನುದಾನ ಮೀಸಲಿಡಲಾಗಿದೆ. ಮುಂದಿನ ಬಜೆಟ್‌ನಲ್ಲಿ ಇನ್ನೂ ಹೆಚ್ಚಿನ ಹಣ ಒದಗಿಸಲಾಗುವುದು ಎಂದರು.

ವಿಧಾನಸೌಧ ಕಟ್ಟಿದ್ದು ಭೋವಿಗಳು: ‘ವಿಧಾನಸೌಧ ಕಟ್ಟಿದ್ದು ಭೋವಿಗಳು. ಅವರು ಗಟ್ಟಿಯಾಗಿ ಅಡಿಪಾಯ ಹಾಕಿ, ಅದಕ್ಕೆ ಬೇಕಾದ ಕಲ್ಲು ಒಡೆದು, ಹೊತ್ತಿದ್ದರಿಂದಲೇ ಭವ್ಯ ಕಟ್ಟಡ ನಿರ್ಮಿಸುವುದಕ್ಕೆ ಸಾಧ್ಯವಾಯಿತು’ ಎಂದು ಸಮಾಜ ಕಲ್ಯಾಣ ಸಚಿವ ಎಚ್. ಆಂಜನೇಯ ಹೇಳಿದರು.

ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿ.ವಿ. ಸೀತಾರಾಮು, ‘ಸಮುದಾಯದ ಅಭಿವೃದ್ಧಿಗಾಗಿ ನಿಗಮ ಈಗಾಗಲೇ ಅನೇಕ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಮುಂದಿನ ಬಜೆಟ್‌ನಲ್ಲಿ ಇನ್ನೂ ಹೆಚ್ಚಿನ ಅನುದಾನ ಒದಗಿಸಬೇಕು. ವಿಧಾನಸಭೆ, ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಈ ಸಮುದಾಯದವರಿಗೆ ಹೆಚ್ಚಿನ ಟಿಕೆಟ್‌ ನೀಡಬೇಕು’ ಎಂದು ಮನವಿ ಮಾಡಿದರು.

ಶಾಸಕ ಶಿವರಾಜ ತಂಗಡಗಿ ಮಾತನಾಡಿ, ‘ಭೋವಿಗಳ ಮೂಲ ಕಸುಬು ಕಲ್ಲು ಒಡೆಯುವುದು. ಆದರೆ, ಅನೇಕ ಕಡೆ ಕಲ್ಲು ಗಣಿಗಾರಿಕೆಗೆ ಅವಕಾಶ ಸಿಗುತ್ತಿಲ್ಲ. ಕೇವಲ ಮನೆ ಕಟ್ಟುವ ಉದ್ದೇಶದಿಂದ ಈ ವರ್ಗದವರು ಕಲ್ಲು ಒಡೆಯುವುದಕ್ಕಾಗಿ ಅನುಮತಿ ಕೇಳಿದರೆ ಅದಕ್ಕೆ ಕೂಡಲೇ ಅವಕಾಶ ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶ ಮಾಡಬೇಕು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT