ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಸ್ಕಾಂ ಕಚೇರಿಗೆ ಜೆಡಿಎಸ್‌ ಕಾರ್ಯಕರ್ತರ ಮುತ್ತಿಗೆ

ವಿದ್ಯುತ್‌ ಸಂಪರ್ಕ ಕಲ್ಪಿಸಲು ವಿಳಂಬ: ಆರೋಪ
Last Updated 12 ಅಕ್ಟೋಬರ್ 2017, 10:51 IST
ಅಕ್ಷರ ಗಾತ್ರ

ಕೋಲಾರ: ಬೆಸ್ಕಾಂ ಅಧಿಕಾರಿಗಳು ರಾಜಕೀಯ ಕಾರಣಕ್ಕೆ ತಾಲ್ಲೂಕಿನ ಸಿಂಗೊಂಡಹಳ್ಳಿಯಲ್ಲಿ ಕುಡಿಯುವ ನೀರಿನ ಕೊಳವೆ ಬಾವಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ನಗರದಲ್ಲಿ ಗುರುವಾರ ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಧರಣಿ ನಡೆಸಿದರು.

‘ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಕೊಳವೆ ಬಾವಿಯಲ್ಲಿ ನೀರು ಲಭ್ಯವಿದ್ದರೂ ವಿದ್ಯುತ್‌ ಸಂಪರ್ಕ ಕಲ್ಪಿಸಲು ಬೆಸ್ಕಾಂ ಅಧಿಕಾರಿಗಳು ಮೀನಾಮೇಷ ಎಣಿಸುತ್ತಿದ್ದಾರೆ. ಅಧಿಕಾರಿಗಳಿಗೆ ಜನರ ಸಮಸ್ಯೆಯ ಅರಿವಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ಬಿ.ಗೋಪಾಲಕೃಷ್ಣ ಮಾತನಾಡಿ, ‘ಗ್ರಾಮದ ಕುಡಿಯುವ ನೀರಿನ ಕೊಳವೆ ಬಾವಿಗೆ ನಿರಂತರ ಜ್ಯೋತಿಯಡಿ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಿಯಾಯೋಜನೆ ಸಿದ್ಧಪಡಿಸಿರುವ ಅಧಿಕಾರಿಗಳು ಈಗಾಗಲೇ 12 ಕಂಬಗಳಿಗೆ ಪ್ರಸ್ತಾವ ಸಲ್ಲಿಸಿದ್ದರು. ಆದರೆ, ಶಾಸಕ ವರ್ತೂರು ಪ್ರಕಾಶ್‌ ಅವರ ಬೆಂಬಲಿಗ ರಾಮಪ್ಪ ಎಂಬುವರು ತಮ್ಮ ಜಮೀನಿನ ಮಧ್ಯೆ ವಿದ್ಯುತ್ ತಂತಿ ಹಾದು ಹೋಗಬಾರದೆಂದು ತಕರಾರು ತೆಗೆದಿದ್ದಾರೆ’ ಎಂದು ಆರೋಪಿಸಿದರು.

‘ವಿದ್ಯುತ್‌ ತಂತಿ ಹಾದು ಹೋಗುವ ಮಾರ್ಗದಲ್ಲಿರುವ ಇತರೆ ಆರು ಜಮೀನುಗಳ ಮಾಲೀಕರು ಗ್ರಾಮದ ಹಿತದೃಷ್ಟಿಯಿಂದ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಆದರೆ, ರಾಮಪ್ಪ ಅವರ ಒತ್ತಡಕ್ಕೆ ಮಣಿದಿರುವ ಅಧಿಕಾರಿಗಳು ಬೇರೆ ಮಾರ್ಗದಲ್ಲಿ ವಿದ್ಯುತ್‌ ತಂತಿ ಅಳವಡಿಸಲು ಮುಂದಾಗಿದ್ದಾರೆ. ಇದಕ್ಕಾಗಿ ಹೆಚ್ಚುವರಿ ಕಂಬಗಳಿಗೆ ಪ್ರಸ್ತಾವ ಸಲ್ಲಿಸಿದ್ದಾರೆ. ಇದರಿಂದ ವಿದ್ಯುತ್‌ ಕಾಮಗಾರಿ ವಿಳಂಬವಾಗಿದೆ’ ಎಂದು ದೂರಿದರು.

‘ಹೊಸ ಮಾರ್ಗದಲ್ಲಿ 12 ಕಂಬಗಳ ಬದಲಿಗೆ 35 ಕಂಬಗಳನ್ನು ಅಳವಡಿಸಬೇಕಿದೆ. ಜತೆಗೆ ಆ ಮಾರ್ಗದಲ್ಲಿ ವಿದ್ಯುತ್‌ ತಂತಿ ಅಳವಡಿಕೆಗಾಗಿ ಎರಡು ಹುಣಸೆ ಮರಗಳನ್ನು ಕಡಿಯಬೇಕಿದೆ. ಇದರಿಂದ 15ಕ್ಕೂ ಹೆಚ್ಚು ರೈತರಿಗೆ ತೊಂದರೆಯಾಗಲಿದೆ’ ಎಂದು ಕೋಚಿಮುಲ್ ನಿರ್ದೇಶಕ ರಾಮಕೃಷ್ಣೇಗೌಡ ಹೇಳಿದರು.

ಪ್ರಕರಣ ದಾಖಲಿಸಿ: ‘ಈ ಮೊದಲು ನಿರ್ಧಾರವಾದ ಮಾರ್ಗದಲ್ಲೇ ಕಂಬಗಳನ್ನು ಹಾಕಿ ಕೊಳವೆ ಬಾವಿಗೆ ಶೀಘ್ರವೇ ವಿದ್ಯುತ್‌ ಸಂಪರ್ಕ ಕಲ್ಪಿಸಬೇಕು. ರಾಮಪ್ಪ ಕಾಮಗಾರಿಗೆ ಅಡ್ಡಿಪಡಿಸಿದರೆ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸುತ್ತೇವೆ’ ಎಂದು ಧರಣಿನಿರತರು ಎಚ್ಚರಿಕೆ ನೀಡಿದರು.

ಜೆಡಿಎಸ್ ರಾಜ್ಯ ಘಟಕದ ಕಾರ್ಯದರ್ಶಿ ದಯಾನಂದ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅನ್ವರ್ ಪಾಷಾ, ಡಿಸಿಸಿ ಬ್ಯಾಂಕ್ ನಿರ್ದೇಶಕ ಸೋಮಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷೆ ರಾಜೇಶ್ವರಿ, ವಕೀಲ ಲೋಕೇಶ್‌ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT