ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ಮುಕ್ತ ಜನಸ್ನೇಹಿ ಆಡಳಿತಕ್ಕೆ ಒತ್ತು

Last Updated 13 ಅಕ್ಟೋಬರ್ 2017, 7:43 IST
ಅಕ್ಷರ ಗಾತ್ರ

ಕೋಲಾರ: ‘ಜನಸ್ನೇಹಿ ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಒತ್ತು ನೀಡುತ್ತೇನೆ’ ಎಂದು ನೂತನ ಜಿಲ್ಲಾಧಿಕಾರಿ ಜಿ.ಸತ್ಯವತಿ ತಿಳಿಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಅಧಿಕಾರ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ಬರದಿಂದ ಬಸವಳಿದಿದ್ದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಕೆಲವೆಡೆ ಮನೆಗಳು ಕುಸಿದು ಅನಾಹುತವಾಗಿದೆ. ಮತ್ತೆ ಕೆಲ ಗ್ರಾಮಗಳಲ್ಲಿ ಬೆಳೆಗಳಿಗೆ ಹಾನಿಯಾಗಿದೆ ಎಂದರು.

‘ಬಂಗಾರಪೇಟೆ ಪಟ್ಟಣದಲ್ಲಿ ಮನೆಗಳಿಗೆ ಮಳೆ ನೀರು ನುಗ್ಗಿದ್ದರಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುತ್ತೇನೆ. ರಾಜಕಾಲುವೆಗಳಿಗೆ ಸಂಪರ್ಕವಿರುವ ಪೋಷಕ ಕಾಲುವೆಗಳು ಒತ್ತುವರಿ ಆಗಿರುವುದರಿಂದ ಅನಾಹುತ ಸಂಭವಿಸುತ್ತಿವೆ. ಸದ್ಯದಲ್ಲೇ ಕಂದಾಯ ಅಧಿಕಾರಿಗಳ ಸಭೆ ಕರೆದು ಒತ್ತುವರಿ ಬಗ್ಗೆ ಮಾಹಿತಿ ಪಡೆದು ರಾಜಕಾಲುವೆ ಮತ್ತು ಪೋಷಕ ಕಾಲುವೆಗಳ ಸರ್ವೆ ಮಾಡುವಂತೆ ಸೂಚಿಸುತ್ತೇನೆ’ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮತ್ತು ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಯ ಕೆರೆಗಳ ಪೈಕಿ ಸಾಕಷ್ಟು ಕೆರೆಗಳು ಕೋಡಿ ಹರಿದಿವೆ. ಬೆಳೆ ನಷ್ಟದ ಬಗ್ಗೆ ಕೃಷಿ, ತೋಟಗಾರಿಕೆ ಮತ್ತು ಕಂದಾಯ ಅಧಿಕಾರಿಗಳಿಂದ ಸಮೀಕ್ಷೆ ಮಾಡಿಸಿ ಸೂಕ್ತ ಪರಿಹಾರಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಚಿಕ್ಕಮಗಳೂರಿನಲ್ಲಿ ಜಿಲ್ಲಾಧಿಕಾರಿ ಯಾಗಿದ್ದಾಗ ಜಿಲ್ಲಾ ಪಂಚಾಯಿತಿ ಅಧ್ಯಕ್ಷರು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ನಗರಸಭೆ ಅಧ್ಯಕ್ಷರು, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು ಸಹ ಮಹಿಳೆಯರೇ ಆಗಿದ್ದರು. ಎಲ್ಲರ ಸಹಕಾರದಿಂದ ಉತ್ತಮ ಆಡಳಿತ ನಡೆಸಲು ಸಾಧ್ಯವಾಯಿತು. ಇಲ್ಲಿಯೂ ಅದೇ ರೀತಿ ಉತ್ತಮ ಆಡಳಿತ ನಡೆಸಲು ಇಷ್ಟಸುವುದಾಗಿ ತಿಳಿಸಿದರು.

ಸಮಸ್ಯೆಗಳಿಗೆ ಪರಿಹಾರ: ಜನ ಸಂಪರ್ಕ ಸಭೆಗಳನ್ನು ನಡೆಸಿದಾಗ ಸಾರ್ವಜನಿಕರ ಸಮಸ್ಯೆ ಏನೆಂದು ಗೊತ್ತಾಗುತ್ತದೆ. ತಾಲ್ಲೂಕು ಮಟ್ಟದ ಅಧಿಕಾರಿಗಳಿಂದ ಕೆಲಸ ಆಗದಿದ್ದಾಗ ಜನ ಜಿಲ್ಲಾ ಧಿಕಾರಿ ಕಚೇರಿಗೆ ಬರುತ್ತಾರೆ. ತಾಲ್ಲೂಕು ಮಟ್ಟದಲ್ಲಿ ಜನಸಂಪರ್ಕ ಸಭೆ ನಡೆಸಿ, ಸ್ಥಳೀಯವಾಗಿ ಜನರ ಸಮಸ್ಯೆ ಪರಿಹರಿಸಲು
ಪ್ರಾಮಾಣಿಕ ಪ್ರಯತ್ನ ಮಾಡ ಲಾಗುವುದು ಎಂದು ಎಂದು ಭರವಸೆ ನೀಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT