ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಸಿ, ಎಸ್‌ಟಿ ಕಲ್ಯಾಣಕ್ಕೆ ₹ 1 ಲಕ್ಷ ಕೋಟಿ

Last Updated 15 ಅಕ್ಟೋಬರ್ 2017, 6:30 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜನರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ ₹ 1 ಲಕ್ಷ ಕೋಟಿಗೂ ಹೆಚ್ಚು ಹಣ ಮೀಸಲಿಟ್ಟಿದೆ. ಅನುದಾನ ಆರ್ಥಿಕ ವರ್ಷದಲ್ಲಿ ಬಳಕೆಯಾಗದಿದ್ದರೆ ಬಾಕಿ ಹಣವನ್ನು ಮುಂದಿನ ವರ್ಷ ಬಳಕೆ ಮಾಡಲು ಅವಕಾಶ ಕಲ್ಪಿಸಿ ಕಾನೂನು ರೂಪಿಸಿದೆ’ ಎಂದು ಶಾಸಕ ಡಾ.ಕೆ.ಸುಧಾಕರ್ ಹೇಳಿದರು.

ಅಂಬೇಡ್ಕರ್‌ ಅಭಿವೃದ್ಧಿ ನಿಗಮದಿಂದ ನಗರದ ಪಿಎಲ್‌ಡಿ ಬ್ಯಾಂಕ್‌ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಗಂಗಾ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಪಂಪ್‌, ಮೋಟರ್‌ ಸಾಮಗ್ರಿ ವಿತರಣೆ ಹಾಗೂ ವಿವಿಧ ಯೋಜನೆಗಳ ಸಹಾಯಧನದ ಮಂಜೂರಾತಿ ಆದೇಶ ಪತ್ರಗಳ ವಿತರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

’ಪರಿಶಿಷ್ಟರ ಏಳಿಗೆಯೇ ನಮ್ಮ ಗುರಿ. ಪ್ರತಿ ಜಾತಿಗೂ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಆರ್ಥಿಕ, ಶೈಕ್ಷಣಿಕ, ಉದ್ಯೋಗಕ್ಕೆ ಒತ್ತು ನೀಡಲಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವ ಉದ್ದೇಶದಿಂದ ಗುತ್ತಿಗೆ ಕಾಮಗಾರಿಗಳಲ್ಲಿ ಶೇ 25 ರಷ್ಟು ಅವಕಾಶ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತ್ಯತೀತ ಆಡಳಿತ ನೀಡುತ್ತಿದ್ದಾರೆ. ಕಾಂಗ್ರೆಸ್‌ ಪಕ್ಷ ಚುನಾವಣೆಗೂ ಮುನ್ನ ನೀಡಿದ್ದ 165 ಭರವಸೆಗಳಲ್ಲಿ 155 ಭರವಸೆಗಳನ್ನು ಈಡೇರಿಸಲಾಗಿದೆ’ ಎಂದರು.

‘ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಐದು ವರ್ಷದ ಆಡಳಿತದಲ್ಲಿ ಸಮಾಜ ಕಲ್ಯಾಣ ಇಲಾಖೆ ಕೇವಲ ₹ 35 ಸಾವಿರ ಕೋಟಿ ಖರ್ಚು ಮಾಡಿದೆ. ಯಡಿಯೂರಪ್ಪ ಅವರು ಪರಿಶಿಷ್ಟ ಜಾತಿ, ದಲಿತರ ಅಭಿವೃದ್ಧಿ ಕಡೆಗಣಿಸಿದ್ದರು. ಚುನಾವಣೆ ಸಮೀಪಿಸುತ್ತಿದ್ದಂತೆ ದಲಿತರ ಮನೆಯಲ್ಲಿ ಊಟ ಮಾಡಲು ಹೊರಟಿದ್ದಾರೆ. ಕೇಂದ್ರ ಸರ್ಕಾರ ಕೂಡ ಅಲ್ಪಸಂಖ್ಯಾತರ ಅಭಿವೃದ್ಧಿ ಕಡೆಗಣಿಸಿದೆ’ ಎಂದು ಆರೋಪಿಸಿದರು.

ರಾಜ್ಯ ಖಾದಿ ಮತ್ತು ಗ್ರಾಮದ್ಯೋಗ ಮಂಡಳಿ ಅಧ್ಯಕ್ಷ ಯಲುವಹಳ್ಳಿ ಎನ್‌.ರಮೇಶ್‌ ಮಾತನಾಡಿ, ‘ಪರಿಶಿಷ್ಟ ಜಾತಿ, ಪಂಗಡದವರ ಆರ್ಥಿಕ ಸ್ವಾವಲಂಬನೆಗಾಗಿ ಸರ್ಕಾರ ಗಂಗಾ ಕಲ್ಯಾಣ ಯೋಜನೆ ಜಾರಿ ಮಾಡಿದೆ. ಪಂಪು, ಮೋಟಾರ್‌ ಸಾಮಗ್ರಿಗಳನ್ನು ಫಲಾನುಭವಿಗಳು ಮಾರಾಟ ಮಾಡಬಾರದು’ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸ್ವಯಂ ಉದ್ಯೋಗ ಯೋಜನೆ, ಉದ್ಯಮ ಶೀಲತೆ ಅಭಿವೃದ್ಧಿ ಯೋಜನೆ, ಕಿರು ಸಾಲ ಯೋಜನೆಗಳ ಫಲಾನುಭವಿಗಳಿಗೆ ಆದೇಶ ಪತ್ರ ವಿತರಿಸಲಾಯಿತು.
ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಸ್.ಎಂ.ಮುನಿಯಪ್ಪ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮರುಳುಕುಂಟೆ ಕೃಷ್ಣ ಮೂರ್ತಿ, ಎಪಿಎಂಸಿ ಅಧ್ಯಕ್ಷ ಎಚ್‌.ವಿ. ಗೋವಿಂದ ಸ್ವಾಮಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಬಿ.ಎಂ.ರಾಮಸ್ವಾಮಿ, ಸದಸ್ಯರಾದ ತಿರುಮಳಪ್ಪ, ನಾರಾಯಣಪ್ಪ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ನಾಗೇಶ್‌, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆನಂದ್‌, ರಾಜಶೇಖರ್‌, ಮುಖಂಡ ರಾದ ಶ್ರೀನಿವಾಸ್‌, ಪ್ರಕಾಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT