ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಭವಿಷ್ಯಕ್ಕೆ ಉತ್ತಮ ಶಿಕ್ಷಣ ಕೊಡಿಸಿ: ಮೇಟಿ

Last Updated 16 ಅಕ್ಟೋಬರ್ 2017, 4:52 IST
ಅಕ್ಷರ ಗಾತ್ರ

ಬಾಗಲಕೋಟೆ: ‘ಪಾಲಕರು ತಮ್ಮ ಮಕ್ಕಳ ಭವಿಷ್ಯ ರೂಪಿಸಲು ಅವರಿಗೆ ಉತ್ತಮ ಶಿಕ್ಷಣವನ್ನು ಕೊಡಿಸಬೇಕು. ಇದರಿಂದ ಇಡೀ ಕುಟುಂಬ ಸಮಾಜದಲ್ಲಿ ಮುಂದುವರೆಯಲು ಸಾಧ್ಯ’ ಎಂದು ಶಾಸಕ ಎಚ್.ವೈ.ಮೇಟಿ ಅಭಿಪ್ರಾಯ ಪಟ್ಟರು.

ನವನಗರದ ಕಲಾಭವನದಲ್ಲಿ ಭಾನುವಾರ ಜಿಲ್ಲಾ ಹಾಲುಮತ ನೌಕರರ ಸಂಘದ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ನೂತನ ಕೆಎಎಸ್ ಅಧಿಕಾರಿಗಳಿಗೆ ಸನ್ಮಾನ ಹಾಗೂ ಶೈಕ್ಷಣಿಕ ದತ್ತು ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಹಾಲುಮತ ಸಮುದಾಯ ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಬೆಳೆಯಬೇಕು. ನಮ್ಮಲ್ಲಿನ ಸಣ್ಣಪುಟ್ಟ ಲೋಪದೋಷಗಳನ್ನು ಸರಿಪಡಿಸಿಕೊಂಡು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಇದರಿಂದ ಸಮುದಾಯಕ್ಕೆ ಉತ್ತಮ ಭವಿಷ್ಯ ನಿರ್ಮಾಣ ಮಾಡಲು ಸಾಧ್ಯ’ ಎಂದರು.

ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ಡಾ.ಎಚ್.ಡಿ.ಪಾಟೀಲ ಮಾತನಾಡಿ, ‘ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದರೆ ಸಾಲದು. ಜ್ಞಾನ ಸಂಪಾದನೆಯ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹೆಚ್ಚಿನ ಒತ್ತು ನೀಡಬೇಕು’ ಎಂದು ಸಲಹೆ ನೀಡಿದರು.

‘ಸಮಾಜದ ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಪ್ರೋತ್ಸಾಯಿಸುವ ಕೆಲಸ ಮಾಡುತ್ತಿರುವ ನೌಕರರ ಸಂಘದ ಕಾರ್ಯ ಶ್ಲಾಘನೀಯ. ಉನ್ನತ ಹುದ್ದೆಗಳಿಗೆ ಆಯ್ಕೆಯಾಗಿರುವ ಸಮುದಾಯದ ಅಧಿಕಾರಿಗಳ ಮೇಲೆ ಗುರುತರ ಜವಾಬ್ದಾರಿ ಇದ್ದು, ಸೇವಾ ಅವಧಿಯಲ್ಲಿ ಎಲ್ಲ ವರ್ಗದವರ ಹಿತ ಕಾಪಾಡಬೇಕು’ ಎಂದರು.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಸವರಾಜ ಗುರಿಕಾರ ಮಾತನಾಡಿ, ‘ಜಿಲ್ಲೆಯಲ್ಲಿ ಸಮುದಾಯದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸ್ಥಾಪಿಸಬೇಕು. ಇದರಿಂದ ಅನೇಕ ಬಡ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ನಮ್ಮ ಜನಪ್ರತಿನಿಧಿಗಳು ಸ್ಪಂದಿಸುತ್ತಾರೆ ಎನ್ನುವ ನಂಬಿಕೆ ಇದೆ’ ಎಂದರು.

ಜಿಲ್ಲಾ ಹಾಲುಮತದ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎನ್.ಬಿ.ಗೊರವಾರ ಮಾತನಾಡಿ, ‘ಸಮಾಜ ನಮಗೆ ಏನು ನೀಡಿದೆ ಎನ್ನುವುದಕ್ಕಿಂತ ನಮ್ಮಿಂದ ಸಮಾಜಕ್ಕೆ ಏನು ಕೊಡುಗೆ ನೀಡಿದ್ದೇವೆ ಎನ್ನುವುದನ್ನು ಪ್ರತಿಯೊಬ್ಬರು ಅರ್ಥಮಾಡಿಕೊಳ್ಳಬೇಕು’ ಎಂದರು.

‘ಸಮಾಜದ ಬಡ ಪ್ರತಿಭಾನ್ವಿತ ಅನಾಥ ವಿದ್ಯಾರ್ಥಿಗಳನ್ನು ದತ್ತು ಪಡೆದು ಅವರಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಲು ಸಂಘ ತೀರ್ಮಾನಿಸಿತ್ತು. ಈ ವರ್ಷ ಒಬ್ಬ ವಿದ್ಯಾರ್ಥಿಯನ್ನು ದತ್ತು ಪಡೆದು ಅವನ ಸಂಪೂರ್ಣ ವಿದ್ಯಾಭ್ಯಾಸದ ಖರ್ಚನ್ನು ಸಂಘದಿಂದ ಭರಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳನ್ನು ದತ್ತು ಪಡೆಯಲಾಗುವುದು. ಇದಕ್ಕೆ ಸಮಾಜದವರ ಸಹಾಯ ಅವಶ್ಯಕವಾಗಿದೆ’ ಎಂದರು.

ಸಂಘಕ್ಕೆ ಸರ್ಕಾರದಿಂದ ನಿವೇಶನ ಮಂಜೂರು ಮಾಡಿಸಿಕೊಡಬೇಕು. ಇದರಿಂದ ಸಮುದಾಯದ ಅಭಿವೃದ್ಧಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಶಾಸಕ ಮೇಟಿಗೆ ಮನವಿ ಮಾಡಿದರು.

ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು. ಮುಖಂಡ ರಾಜು ಚಿಮ್ಮನಕಟ್ಟಿ, ವಿಜಯಪುರ–ಬಾಗಲಕೋಟೆ ಹಾಲು ಒಕ್ಕೂಟದ ಅಧ್ಯಕ್ಷ ಸಂಗಣ್ಣ ಹಂಡಿ, ನಗರಸಭೆ ಅಧ್ಯಕ್ಷ ದ್ಯಾವಪ್ಪ ರಾಕುಂಪಿ, ಕಾಳಿದಾಸ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಎಸ್.ಎಸ್.ಪಾಟೀಲ, ನೌಕರರ ಸಂಘದ ಕಾರ್ಯಾಧ್ಯಕ್ಷ ಟಿ.ಎಲ್.ಗಂಗೂರ, ಪ್ರಧಾನ ಕಾರ್ಯದರ್ಶಿ ಎಸ್.ಎಚ್.ಘಂಟಿ, ಎಸ್.ಪಿ.ಬಗಲಿ, ಎಂ.ಬಿ.ಗುಡೂರು ಉಪಸ್ಥಿತರಿದ್ದರು.

ಸನ್ಮಾನ: ಕೆಎಎಸ್ ಪಾಸಾದ ಮೂರು ಜನರಿಗೆ ಮತ್ತು ಐಇಎಸ್ ಪಾಸಾದ ಒಬ್ಬರಿಗೆ ಸಂಘದಿಂದ ಸನ್ಮಾನಿಸಲಾಯಿತು. ಜೊತೆಗೆ ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಇದೇ ವೇಳೆ ಕಿರಣ ಮಂಟೂರ ಎಂಬ ವಿದ್ಯಾರ್ಥಿಯನ್ನು ಶೈಕ್ಷಣಿಕ ದತ್ತು ಸ್ವೀಕರಿಸಲಾಯಿತು.

ಹುನ್ನೂರು–ಜಮಖಂಡಿಯ ಡಾ.ಯಶವಂತ ಕೊಕ್ಕನವರ ಹಾಗೂ ಸಂಗಡಿಗರಿಂದ ಶೈಕ್ಷಣಿಕ ಮನರಂಜನೆ ಕಾರ್ಯಕ್ರಮ ಜರುಗಿತು. ಪವಿತ್ರಾ ಜಕ್ಕಪ್ಪನವರ ಹಾಗೂ ಗಣೇಶ ರಾಯಬಾಗಿ ಪ್ರಾರ್ಥಿಸಿದರು. ಚಂದ್ರಶೇಖರ ನುಗ್ಗಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT