ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜಿಲ್ಲೆಯಲ್ಲಿ ಪೋಕ್ಸೊ ಪ್ರಕರಣಗಳ ಸಂಖ್ಯೆ ಹೆಚ್ಚಳ’

Last Updated 17 ಅಕ್ಟೋಬರ್ 2017, 9:18 IST
ಅಕ್ಷರ ಗಾತ್ರ

ಉಡುಪಿ: ಮಕ್ಕಳ ಹಕ್ಕುಗಳು ಯಾವುದೇ ಕಾರಣಕ್ಕೂ ಉಲ್ಲಂಘನೆ ಆಗದಂತೆ ಸಂಬಂಧಿಸಿದ ಅಧಿಕಾರಿಗಳು ಮತ್ತು ಪೋಷಕರು ಕಾಳಜಿ ವಹಿಸಬೇಕು ಎಂದು ಕ್ರೀಡೆ ಮತ್ತು ಯುವ ಸಬಲೀಕರಣ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಂಯುಕ್ತವಾಗಿ ಜಿಲ್ಲಾ ಪಂಚಾಯಿತಿ ಮತ್ತು ಗ್ರಾಮ ನೋಡಲ್ ಅಧಿಕಾರಿಗಳಿಗೆ ಮಕ್ಕಳ ಹಕ್ಕು ಮತ್ತು ರಕ್ಷಣೆ, ಗ್ರಾಮ ಸಭೆ, ಪೋಕ್ಸೊ ಮತ್ತು ಬಾಲನ್ಯಾಯ ಕಾಯ್ದೆ ಕುರಿತು ಸೋಮವಾರ ಆಯೋಜಿಸಿದ್ದ ಒಂದು ದಿನದ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಹಕ್ಕುಗಳ ಉಲ್ಲಂಘನೆಯಾದಾಗ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತವಾಗಿ ದೂರನ್ನು ದಾಖಲು ಮಾಡಬೇಕು. ಅವರ ಹಕ್ಕುಗಳ ರಕ್ಷಣೆಗೆ ಇರುವ ಕಾನೂನುಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು ಎಂದು ಹೇಳಿದರು.

ಆಸ್ಟ್ರೇಲಿಯಾ, ಜಪಾನ್‌ನಲ್ಲಿ ಮಕ್ಕಳ ಸಂಖ್ಯೆ ಬಹಳ ಕಡಿಮೆ ಇದೆ. ಭಾರತ ವಿಶ್ವದಲ್ಲಿಯೇ ಅತ್ಯಂತ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಹೊಂದಿರುವ ದೇಶವಾಗಿದೆ. ಮುಂದಿನ ದಿನದಲ್ಲಿ ಈ ಮಕ್ಕಳು ಕೇವಲ ನಮ್ಮ ದೇಶದ ಆಸ್ತಿಯಲ್ಲ ಪ್ರಪಂಚದ ಆಸ್ತಿಯಾಗಲಿದ್ದಾರೆ. ಇವರೆಲ್ಲರ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಮಕ್ಕಳ ಗ್ರಾಮಸಭೆ ಕಡ್ಡಾಯವಾಗಿ ನಡೆಯಬೇಕು ಎಂದು ಹೇಳಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಸದಸ್ಯೆ ವನಿತಾ ತೊರವಿ, ಬೇರೆ ಜಿಲ್ಲೆಗೆ ಹೋಲಿಕೆ ಮಾಡಿದಾಗ ಉಡುಪಿ ಜಿಲ್ಲೆಯಲ್ಲಿ ಪೋಕ್ಸೊ ಪ್ರಕರಣಗಳ ಸಂಖ್ಯೆ ಬಹಳ ಕಡಿಮೆ ಇತ್ತು. ಆದರೆ ಇತ್ತೀಚಿನ ದಿನದಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳು ಉಲ್ಲಂಘನೆಯಾಗುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಂಜೀವ ಎಂ. ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿದೇರ್ಶಕಿ ಗ್ರೇಸಿ ಗೊನ್ಸಾಲ್ವಿಸ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT