ಸೋಮವಾರ, ಸೆಪ್ಟೆಂಬರ್ 16, 2019
22 °C

ಕೇಂದ್ರ ಸಚಿವ ಅನಂತಕುಮಾರ್ ಹೇಳಿಕೆಗೆ ಸಚಿವ ಸೇಠ್ ಖಂಡನೆ

Published:
Updated:

ತುಮಕೂರು: ‘ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ತಮ್ಮ ಹೆಸರು ನಮೂದಿಸುವುದು ಬೇಡ ಎಂದು ಕೇಂದ್ರ ಸಚಿವ ಅನಂತಕುಮಾರ್ ಹೆಗಡೆ ಅವರು ಅಧಿಕಾರಿಗಳಿಗೆ ಸೂಚಿಸಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿದ ಅಪಚಾರ’ ಎಂದು ಶಿಕ್ಷಣ ಸಚಿವ ತನ್ವೀರ್ ಸೇಠ್ ಹೇಳಿದರು.

ಶನಿವಾರ ನಗರದಲ್ಲಿ ನಡೆದ ಮುತವಲ್ಲಿಗಳ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಸುದಿಗಾರರೊಂದಿಗೆ ಮಾತನಾಡಿ, ‘ಶಿಷ್ಟಾಚಾರದ ಪ್ರಕಾರ ಎಲ್ಲ ಚುನಾಯಿತ ಪ್ರತಿನಿಧಿಗಳ ಹೆಸರು ಹಾಕಲಾಗುತ್ತದೆ. ತಮ್ಮ ಹೆಸರು ಬೇಡ ಎಂದು ಸಂಸದರು ಹೇಳಿರುವುದು ಖಂಡನೀಯ’ ಎಂದು ಹೇಳಿದರು.

‘ರಾಜ್ಯದಲ್ಲಿ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮಗಳನ್ನು ಶಿಸ್ತುಬದ್ಧವಾಗಿ ಆಯೋಜಿಸಲಾಗುತ್ತದೆ. ಬಿಜೆಪಿಯವರು ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ವಿರೋಧಿಸಿ ಜನಾಂಗಗಳ ಬೇರೆ ಬೇರೆ ಮಾಡುವ ಕ್ರಮ ಸರಿಯಲ್ಲ. ಇದಕ್ಕೆ ಜನರು ಕಿವಿಗೊಡಬಾರದು. ಅಭಿವೃದ್ಧಿ ವಿಷಯಗಳ ಮೇಲೆ ರಾಜಕಾರಣ ಮಾಡಬೇಕು’ ಎಂದು ತಿಳಿಸಿದರು.

ಪರೀಕ್ಷಾ ಅಕ್ರಮ ತಡೆಗೆ ಕ್ರಮ: ‘ಪರೀಕ್ಷಾ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಕೃತ್ಯ ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕ ಪಡುವ ಅವಶ್ಯಕತೆ ಇಲ್ಲ’ ಎಂದು ಹೇಳಿದರು.

‘ಹಿಂದೆ ನಡೆದ ಪರೀಕ್ಷಾ ಅಕ್ರಮ ಪ್ರಕರಣಗಳಲ್ಲಿ ಶಿಕ್ಷೆಗೊಳಗಾಗಿದ್ದವರು ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಕಳೆದ ವರ್ಷ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಇವರನ್ನು ಬಂಧಿಸಲಾಗಿತ್ತು. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಸರ್ಕಾರ ಇಂತಹ ಕ್ರಮ ಕೈಗೊಳ್ಳಲಿದೆ’ ಎಂದು ತಿಳಿಸಿದರು.

Post Comments (+)