ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬುಡಕಟ್ಟು ಮಕ್ಕಳಿಗೆ ಶಿಕ್ಷಣ ಮರೀಚಿಕೆ

Last Updated 24 ಅಕ್ಟೋಬರ್ 2017, 8:59 IST
ಅಕ್ಷರ ಗಾತ್ರ

ಮೈಸೂರು: ‘ಗಿರಿಜನ ಆಶ್ರಮ ಶಾಲೆಯ ಮಕ್ಕಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಶಿಕ್ಷಕರಿಗೆ ತರಬೇತಿ ನೀಡುತ್ತಿರುವ ಮೊದಲ ರಾಜ್ಯ ಕರ್ನಾಟಕವಾಗಿದ್ದು, ಅದರಲ್ಲಿ ಯಶಸ್ಸು ಕಂಡಿದೆ’ ಎಂದು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕ ಟಿ.ಟಿ.ಬಸವನಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

ನಗರದಲ್ಲಿ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಏರ್ಪಡಿಸಿದ್ದ ಗಿರಿಜನ ಆಶ್ರಮ ಶಾಲೆಗಳಲ್ಲಿ ಇಂಗ್ಲಿಷ್‌, ಗಣಿತ, ವಿಜ್ಞಾನ ವಿಷಯಗಳನ್ನು ಬೋಧಿಸುತ್ತಿರುವ ಶಿಕ್ಷಕರ ಪುನರ್‌ಮನನ ತರಬೇತಿ ಕಾರ್ಯಕ್ರಮವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು.

ಬುಡಕಟ್ಟು ಸಮುದಾಯದ ಮಕ್ಕಳಿಗೆ ಶಿಕ್ಷಣ ಮರೀಚಿಕೆಯಾಗಿದ್ದು, ಉನ್ನತ ಶಿಕ್ಷಣ ಪಡೆಯುವಲ್ಲಿ ಬುಡಕಟ್ಟು ಜನಾಂಗದ ಮಕ್ಕಳು ಹಿಂದೆ ಬಿದ್ದಿದ್ದಾರೆ. ಏಳು, ಎಂಟನೇ ತರಗತಿ ಓದುತ್ತಿರುವಾಗಲೇ ಹೆಚ್ಚಿನವರು ಶಾಲೆ ತೊರೆಯುತ್ತಿದ್ದಾರೆ. ಅವರಿಗೆ ಶಿಕ್ಷಣವೇ ಸಮಸ್ಯೆಯಾಗಿ ಪರಿಣಮಿಸಿದೆ. ಶಿಕ್ಷಕರು ಅವರಲ್ಲಿ ಅರಿವು ಮೂಡಿಸಿ ಓದಿನಲ್ಲಿ ಆಸಕ್ತಿ ಮೂಡಿಸಬೇಕು ಎಂದು ಸಲಹೆ ನೀಡಿದರು.

ರಾಜ್ಯದಲ್ಲಿ 116 ಗಿರಿಜನ ಆಶ್ರಮ ಶಾಲೆಗಳಿದ್ದು, ಎಲ್ಲ ಶಾಲೆಗಳಿಗೂ ಪ್ರಯೋಗಾಲಯ ಕಿಟ್‌ ವಿತರಿಸಲಾಗಿದೆ. ಅವುಗಳನ್ನು ಸದುಪಯೋಗಪಡಿಸಿಕೊಂಡು ಗುಣಮಟ್ಟದ ಶಿಕ್ಷಣ ನೀಡಬೇಕು. ಪುನರ್‌ಮನನ ತರಬೇತಿಯ ಪ್ರಯೋಜನ ಪಡೆದು ಬೋಧನಾ ಸಾಮರ್ಥ್ಯ ಹೆಚ್ಚಿಸಿಕೊಳ್ಳಬೇಕು ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ನಿವೃತ್ತ ಹೆಚ್ಚುವರಿ ನಿರ್ದೇಶಕ ಕೆ.ಎಸ್‌.ಮೃತ್ಯುಂಜಯ ಮಾತನಾಡಿ, ಪಠ್ಯಕ್ರಮ ಹಾಗೂ ಬೋಧನಾ ಶೈಲಿಯಿಂದಾಗಿ ಗ್ರಾಮೀಣ ಮಕ್ಕಳಿಗೆ ಗಣಿತ, ವಿಜ್ಞಾನ, ಇಂಗ್ಲಿಷ್‌ ಕಠಿಣ ಎನಿಸುತ್ತಿದೆ. ಸರ್ಕಾರ ಜಾರಿಗೆ ತಂದಿರುವ ನಲಿ–ಕಲಿ ಯೋಜನೆಯನ್ನು ಸಮರ್ಪಕವಾಗಿ ಅಳವಡಿಸಿಕೊಂಡು, ಆಟದ ಮೂಲಕ ಬೋಧನೆ ಮಾಡುವುದರಿಂದ ಮಕ್ಕಳಿಗೆ ವಿಷಯ ಸುಲಭವಾಗಿ ಮನನವಾಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಶಿಕ್ಷಕರು ತರಗತಿಯಲ್ಲಿ ಪ್ರತಿ ವಿದ್ಯಾರ್ಥಿಯನ್ನೂ ಗಮನಿಸಬೇಕು. ಯಾವ ವಿದ್ಯಾರ್ಥಿಗೆ ಯಾವ ವಿಷಯದಲ್ಲಿ ಆಸಕ್ತಿ ಇದೆ. ಯಾವ ವಿಷಯ ಕಠಿಣವಾಗಿದೆ ಎನ್ನುವುದನ್ನು ಅರಿತು ಅವರಿಗೆ ಕಠಿಣ ಎನಿಸಿರುವ ವಿಷಯವನ್ನು ಸುಲಭವಾಗುವಂತೆ ಬೋಧಿಸಿ, ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆಯ ನಿವೃತ್ತ ಪ್ರಧಾನ ಕಾರ್ಯದರ್ಶಿ ಡಾ.ಇ.ವೆಂಕಯ್ಯ, ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಉಪ ನಿರ್ದೇಶಕಿ ಎಸ್‌. ಪ್ರತಿಭಾ ಇದ್ದರು. ಆರು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ವಿವಿಧ ಜಿಲ್ಲೆಗಳ 140 ಶಿಕ್ಷಕರು ಪಾಲ್ಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT