ಸದಾಶಿವ ವರದಿ ಜಾರಿಗಾಗಿ ಪ್ರತಿಭಟನೆ

ಸೋಮವಾರ, ಮೇ 27, 2019
34 °C

ಸದಾಶಿವ ವರದಿ ಜಾರಿಗಾಗಿ ಪ್ರತಿಭಟನೆ

Published:
Updated:

ರಾಯಚೂರು: ಮುಂಬರುವ ಬೆಳಗಾವಿ ಅಧಿವೇಶನದಲ್ಲಿ ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಮಂಡಿಸಿ ಅಂಗೀಕರಿಸಬೇಕು ಎಂದು ಒತ್ತಾಯಿಸಿ ಅಕ್ಟೋಬರ್‌ 25 ರಂದು ರಾಜ್ಯದಾದ್ಯಂತ ರ‍್ಯಾಲಿ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಎನ್.ಮೂರ್ತಿ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ವರ್ಗೀಕರಣಕ್ಕಾಗಿ ನ್ಯಾ.ಎ.ಜೆ.ಸದಾಶಿವ ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಿ ಆರು ವರ್ಷಗಳಾಗಿವೆ. ಇಂದಿಗೂ ವರದಿಯನ್ನು ಬಹಿರಂಗ ಪಡಿಸಿಲ್ಲ. ಮುಂಬರುವ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ವರದಿಯನ್ನು ಮಂಡಿಸಿ ಅಂಗೀಕರಿಸದಿದ್ದರೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿ ಅನುಷ್ಠಾನಗೊಳಿಸಲು ಮೀನಾ ಮೇಷ ಎಣಿಸುತ್ತಿದ್ದಾರೆ. ಮುಖ್ಯಮಂತ್ರಿಗಳು ರಾಜಕೀಯ ಒತ್ತಡಕ್ಕೆ ಮಣಿದಿದ್ದಾರೆ. ಪರಿಶಿಷ್ಟರ ಮೀಸಲಾತಿಯನ್ನು ಶೇ 18 ರಿಂದ 25ಕ್ಕೆ ಹೆಚ್ಚಿಸಲು ಕೂಡಲೇ ಕ್ರಮ ವಹಿಸಬೇಕು ಎಂದು ಹೇಳಿದರು.

ಪರಿಶಿಷ್ಟ ಜಾತಿಯಲ್ಲಿ 101 ಉಪ ಜಾತಿಗಳಿವೆ. ಈ ಸಮುದಾಯಕ್ಕೆ ಸಿಗಬೇಕಾದ ಸೌಲಭ್ಯಗಳನ್ನು ಸಮಾನವಾಗಿ ಹಂಚಿಕೆ ಮಾಡುವುದು ಸರ್ಕಾರದ ಆದ್ಯ ಕರ್ತವ್ಯ. ಈ ವಿಷಯದಲ್ಲಿ ಸರ್ಕಾರವು ಹಿಂದೇಟು ಹಾಕುತ್ತಿರುವುದು ವಿಷಾದನೀಯ.

ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ರಾಜ್ಯದ ವಿವಿಧ ದಲಿತಪರ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ನಾಲ್ಕು ಬಾರಿ ಮನವಿ ಸಲ್ಲಿಸಲಾಗಿದೆ. ಆದರೆ ಬೇಡಿಕೆಯನ್ನು ಮೂಲೆ ಗುಂಪು ಮಾಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಂಸದ ಮಲ್ಲಿಕಾರ್ಜುನ ಖರ್ಗೆ, ಸಚಿವ ಎಚ್.ಎಸ್. ಮಹದೇವಪ್ಪ, ಶಾಸಕರಾದ ಮಾನಪ್ಪ ವಜ್ಜಲ್, ನರೇಂದ್ರಸ್ವಾಮಿ, ಅರವಿಂದ ಲಿಂಬಾವಳಿ ಹಾಗೂ ಪರಮೇಶ್ವರ ಸೇರಿ ಇತರೆ ಮುಖಂಡರು ಈ ವರದಿಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ದಲಿತರೇ ದಲಿತರನ್ನು ಮುಗಿಸಲು ಕುಮ್ಮಕ್ಕು ನೀಡುತ್ತಿರುವುದು ಕಂಡು ಬರುತ್ತಿದೆ ಎಂದು ಟೀಕಿಸಿದರು.

ಪರಿಶಿಷ್ಟರ ಅಭಿವೃದ್ಧಿಗೆ ಮೀಸಲಿಟ್ಟ ಎಸ್‌ಸಿಪಿ, ಟಿಎಸ್‌ಪಿ ಅನುದಾನವನ್ನು ದುರ್ಬಳಕೆ ಮಾಡಲಾಗಿದೆ. ಮೆಟ್ರೋ, ರಸ್ತೆ ಹಾಗೂ ಅಣೆಕಟ್ಟು ನಿರ್ಮಾಣ ಸೇರಿದಂತೆ ಇನ್ನಿತರ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಳಕೆ ಮಾಡಲಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಸವರಾಜ ಸಾಸಲಮರ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry