ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಂದ್ರ– ರಾಜ್ಯಕ್ಕೆ ಹೈಕೋರ್ಟ್ ನೋಟಿಸ್‌

Last Updated 27 ಅಕ್ಟೋಬರ್ 2017, 20:29 IST
ಅಕ್ಷರ ಗಾತ್ರ

ಬೆಂಗಳೂರು: ಪೂರ್ವ ಪ್ರಾಥಮಿಕ ಹಂತದಿಂದ 10ನೇ ತರಗತಿವರೆಗಿನ ಖಾಸಗಿ ಅನುದಾನ ರಹಿತ ಶಾಲೆಗಳು ಹೊಂದಿರಬೇಕಾದ ಮೂಲಸೌಕರ್ಯಗಳ ಕುರಿತ ಅಧಿಸೂಚನೆ ಪ್ರಶ್ನಿಸಿರುವ ರಿಟ್‌ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಕುರಿತಂತೆ ಬೆಂಗಳೂರಿನ ‘ಕರ್ನಾಟಕ ಅನುದಾನರಹಿತ ಶಾಲಾ ಆಡಳಿತ ಮಂಡಳಿಗಳ ಸಂಘ’ ಮತ್ತು ‘ಧಾರವಾಡದ ಬಾಲಾಜಿ ಎಜುಕೇಷನ್ ಸೊಸೈಟಿ’ ಸೇರಿದಂತೆ ಒಟ್ಟು ಐದು ಶಿಕ್ಷಣ ಸಂಸ್ಥೆಗಳು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಬಿ.ವಿ.ನಾಗರತ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಬೆಂಗಳೂರು ನಗರ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ನೋಟಿಸ್ ಜಾರಿಗೊಳಿಸಲು ನ್ಯಾಯಪೀಠ ಆದೇಶಿಸಿದೆ.

ಅರ್ಜಿದಾರರ ಆಕ್ಷೇಪಣೆ ಏನು?:

ಅರ್ಜಿದಾರರ ವಕೀಲ ಕೆ.ವಿ.ಧನಂಜಯ, ‘ಕರ್ನಾಟಕ ಶಿಕ್ಷಣ ಕಾಯ್ದೆ–1983ಕ್ಕೆ ತಿದ್ದುಪಡಿ ತರುವ ಮೂಲಕ ರಾಜ್ಯ ಸರ್ಕಾರ 2014ರ ನವೆಂಬರ್ 11ರಂದು ಅಧಿಸೂಚನೆ ಹೊರಡಿಸಿತ್ತು. ಸರ್ಕಾರ ಈ ಅಧಿಸೂಚನೆ ಹೊರಡಿಸುವ ಮುನ್ನ ಸಾರ್ವಜನಿಕರ ಆಕ್ಷೇಪಣೆ ಆಲಿಸಿಲ್ಲ. ಆದ್ದರಿಂದ ಈ ಆದೇಶವನ್ನು ರದ್ದುಪಡಿಸಬೇಕು’ ಎಂದು ಕೋರಿದರು.

‘ಹೊಸ ಅಧಿಸೂಚನೆ ಅನ್ವಯ ಗ್ರಾಮೀಣ ಪ್ರದೇಶದ ಶಾಲೆಗಳು ಎರಡು ಎಕರೆ ಜಾಗ, ಪುರಸಭೆ ಮತ್ತು ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿನ ಶಾಲೆಗಳು ಒಂದೂವರೆ ಎಕರೆ ಹಾಗೂ ಬೆಂಗಳೂರು ಸೇರಿದಂತೆ ಪಾಲಿಕೆ ವ್ಯಾಪ್ತಿಯ ಶಾಲೆಗಳು ಒಂದು ಎಕರೆ ಜಮೀನು ಹೊಂದಬೇಕು ಎಂದು ಹೇಳಿತ್ತು. ಇದಕ್ಕೆ 2015ರಲ್ಲಿ ಕೊಂಚ ಮಾರ್ಪಾಡು ಮಾಡಿ, ಇದರ ಅನುಷ್ಠಾನ ಕಡ್ಡಾಯ ಎಂದು ಆದೇಶಿಸಿದೆ. ಆದರೆ, ಇದು ಕಾನೂನಿಗೆ ವಿರೋಧವಾಗಿದೆ’ ಎಂದರು.

‘ಈ ಆದೇಶದಿಂದಾಗಿ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಾದ್ಯಂತ 800 ಹೊಸ ಶಾಲೆಗಳ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಅಂತೆಯೇ ಈಗಿರುವ ಶಾಲೆಗಳನ್ನು ಮೇಲ್ದರ್ಜೆಗೆ ಏರಿಸಲು ಸಾಧ್ಯವಾಗುತ್ತಿಲ್ಲ’ ಎಂದೂ ಆಕ್ಷೇಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT