ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ ಖರೀದಿ ಹಗರಣ ತನಿಖೆಯಾಗಲಿ: ಬಿಎಸ್‌ವೈ ಸವಾಲು

ಶೋಭಾ ಕರಂದ್ಲಾಜೆ ವಿರುದ್ಧ ದುರುದ್ದೇಶದ ಆರೋಪ
Last Updated 28 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ‘ಶೋಭಾ ಕರಂದ್ಲಾಜೆ ಇಂಧನ ಸಚಿವೆಯಾಗಿದ್ದಾಗ ವಿದ್ಯುತ್‌ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬುದು ದುರುದ್ದೇಶದ ಆರೋಪ. ಈ ಕುರಿತು ಬೇಕಾದರೆ ಸಿಬಿಐ ಅಥವಾ ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ಮಾಡಿಸಲಿ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಶನಿವಾರ ಇಲ್ಲಿ ಸವಾಲು ಹಾಕಿದರು.

ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾಂಗ್ರೆಸ್‌ ಅಧಿಕಾರಕ್ಕೆ ಬಂದು ನಾಲ್ಕೂವರೆ ವರ್ಷ ಆಗಿದೆ. ಇಷ್ಟು ದಿನ ಸುಮ್ಮನಿದ್ದವರು ಇದೀಗ ತಮ್ಮ ಹಗರಣಗಳನ್ನು ಮುಚ್ಚಿಕೊಳ್ಳಲು ಸುಳ್ಳು ಆರೋಪ ಮಾಡುತ್ತಿದ್ದಾರೆ’ ಎಂದು ಟೀಕಿಸಿದರು.

‘ಶೋಭಾ ಇಂಧನ ಸಚಿವೆಯಾಗಿದ್ದಾಗ 25 ವರ್ಷಗಳ ಅವಧಿಗೆ ವಿದ್ಯುತ್‌ ಖರೀದಿಸುವ ಪ್ರಸ್ತಾವ ಅವರ ಮುಂದೆ ಬಂದಿತ್ತು. ಆದರೆ, ಸರ್ಕಾರವೇ ವಿದ್ಯುತ್‌ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುತ್ತಿರುವಾಗ ಇಷ್ಟು ದೀರ್ಘ ಅವಧಿಗೆ ವಿದ್ಯುತ್‌ ಖರೀದಿ ಮಾಡಿದರೆ ಸರ್ಕಾರಕ್ಕೆ ನಷ್ಟವಾಗುತ್ತದೆ ಎಂಬ ಕಾರಣಕ್ಕೆ ಈ ಪ್ರಸ್ತಾವವನ್ನು ಕೈಬಿಟ್ಟು, ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿ ವಿದ್ಯುತ್‌ ಖರೀದಿ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ನಡೆಸಲಾಗಿತ್ತು’ ಎಂದು ಅವರು ಸಮರ್ಥಿಸಿಕೊಂಡರು.

ಶೀಘ್ರ ಪರಿಹಾರ: ‘ಮಹದಾಯಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಗೋವಾ ಮುಖ್ಯಮಂತ್ರಿ ಮನೋಹರ ಪರಿಕ್ಕರ್‌ ಅವರ ಮನವೊಲಿಸಿ ರಾಜ್ಯಕ್ಕೆ 7.5 ಟಿಎಂಸಿ ಅಡಿ ನೀರು ಬಿಡಿಸಲು ಕ್ರಮಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.

ರಾಜೀನಾಮೆಗೆ ಆಗ್ರಹ: ‘ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಸಚಿವ ಕೆ.ಜೆ.ಜಾರ್ಜ್‌ ಮೊದಲ ಆರೋಪಿಯಾಗಿರುವುದರಿಂದ ನಿಷ್ಪಕ್ಷಪಾತ ತನಿಖೆ ದೃಷ್ಟಿಯಿಂದ ತಕ್ಷಣ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಅವರು ಆಗ್ರಹಿಸಿದರು.

‘ಸುಪ್ರೀಂಕೋರ್ಟ್‌ ಸೂಚನೆ ಮೇರೆಗೆ ಸಿಬಿಐ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರೂ ಜಾರ್ಜ್‌ ಅವರ ರಾಜೀನಾಮೆ ತೆಗೆದುಕೊಳ್ಳುವುದಿಲ್ಲ ಎನ್ನುವ ಮೂಲಕ ಮುಖ್ಯಮಂತ್ರಿ ಹಾಗೂ ಕೆಲವು ಸಚಿವರು ಈ ನೆಲದ ಕಾನೂನನ್ನು ಧಿಕ್ಕರಿಸಿದ್ದಾರೆ. ಇದು ಖಂಡನೀಯ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT