ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 30ರಷ್ಟು ಪರಿಹಾರಕ್ಕೆ ಒತ್ತಾಯಿಸಿ ಪ್ರತಿಭಟನೆ

ವೇತನ ತಾರತಮ್ಯಕ್ಕೆ ಸರ್ಕಾರಿ ನೌಕರರ ಖಂಡನೆ
Last Updated 28 ಅಕ್ಟೋಬರ್ 2017, 19:33 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದ ಸರ್ಕಾರಿ ನೌಕರರಿಗೆ ಶೇ 30ರಷ್ಟು ಮಧ್ಯಂತರ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿ ಅಖಿಲ ಕರ್ನಾಟಕ ಸರ್ಕಾರಿ ನೌಕರರ ಒಕ್ಕೂಟದ ಸದಸ್ಯರು ನಗರದಲ್ಲಿ ಶನಿವಾರ ರಾಜ್ಯಮಟ್ಟದ ಪ್ರತಿಭಟನಾ ಸಭೆ ನಡೆಸಿದರು.

ಆನಂದರಾವ್ ವೃತ್ತದ ಗಾಂಧಿ ಪುತ್ಥಳಿ ಎದುರು ಸೇರಿದ್ದ ಪ್ರತಿಭಟನಾಕಾರರು, ರಾಜ್ಯ ಸರ್ಕಾರದ ವೇತನ ವಿತರಣೆ ನೀತಿಯನ್ನು ಖಂಡಿಸಿದರು.

ಒಕ್ಕೂಟದ ಅಧ್ಯಕ್ಷ ಮಹದೇವಯ್ಯ ಮಠಪತಿ ಮಾತನಾಡಿ, ‘ನೌಕರರ ವೇತನ ಸೌಲಭ್ಯಗಳ ಪರಿಷ್ಕರಣೆಗಾಗಿ 6ನೇ ವೇತನ ಆಯೋಗವನ್ನು ರಚಿಸಿದ್ದ ಸರ್ಕಾರ, 4 ತಿಂಗಳಿನಲ್ಲಿ ವರದಿ ನೀಡುವಂತೆ ಸೂಚಿಸಿತ್ತು. ಆದರೆ, ಆಯೋಗವು ಹಲವು ಕಾರಣ ನೀಡಿ ಕಾಲಾವಧಿ ವಿಸ್ತರಣೆ ಮಾಡಿಕೊಂಡಿದೆ. ಇದರಿಂದ ನೌಕರರಿಗೆ ಸಿಗಬೇಕಾಗಿದ್ದ ವೇತನ ಮತ್ತು ಇತರೆ ಭತ್ಯೆಗಳು ಸಕಾಲಕ್ಕೆ ಸಿಗುತ್ತಿಲ್ಲ’ ಎಂದು ಹೇಳಿದರು.

‘ಶೇ 30ರಷ್ಟು ಮಧ್ಯಂತರ ಪರಿಹಾರಕ್ಕೆ ಶಿಫಾರಸು ಮಾಡುವಂತೆ ಆಗ್ರಹಿಸಿ ಆಯೋಗದ ಸದಸ್ಯರಿಗೆ ಮನವಿ ಸಲ್ಲಿಸಿದ್ದೇವೆ. ಅದಕ್ಕೆ ಸಕಾರಾತ್ಮಕ ಸ್ಪಂದನೆ ದೊರಕಿಲ್ಲ. ಸರ್ಕಾರವೇ ನಮ್ಮ ಬೇಡಿಕೆ ಈಡೇರಿಕೆಗೆ ಕ್ರಮ ಕೈಗೊಳ್ಳಬೇಕು. 2017ರ ಜನವರಿಯಿಂದಲೇ ಮಧ್ಯಂತರ ಪರಿಹಾರ ಮಂಜೂರು ಮಾಡಬೇಕು’ ಎಂದು ಒತ್ತಾಯಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಎಸ್. ಜೈಕುಮಾರ್ ಮಾತನಾಡಿ, ‘ರಾಜ್ಯ ಸರ್ಕಾರವು ನೌಕರರ ಬೇಡಿಕೆಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ‘ವಿಧಾನಸೌಧ ಚಲೋ’ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಸಿದರು.

‘ದೇಶದ ಬೇರೆ ರಾಜ್ಯಗಳು ಪ್ರತಿ ವರ್ಷ ಬಜೆಟ್‌ನಲ್ಲಿ ಶೇ 30 ರಷ್ಟು ಭಾಗವನ್ನು ಸರ್ಕಾರಿ ನೌಕರರ ವೇತನಕ್ಕಾಗಿ ಮೀಸಲಿಡುತ್ತವೆ. ಆದರೆ, ಕರ್ನಾಟಕದಲ್ಲಿ ಅದರ ಪ್ರಮಾಣ ಶೇ 18 ರಷ್ಟು ಮಾತ್ರವಿದೆ’ ಎಂದು ರಾಜ್ಯ ಸರ್ಕಾರಿ ಚಾಲಕರ ಸಂಘದ ಗೌರವ ಅಧ್ಯಕ್ಷ ವೇಣುಗೋಪಾಲ ಅವರು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT