ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ವರ್ಷ 2,000 ಶಾಲೆ ಮೇಲ್ದರ್ಜೆಗೆ

ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರ ಸಮಾವೇಶದಲ್ಲಿ ಶಿಕ್ಷಣ ಸಚಿವ ತನ್ವೀರ್ ಸೇಠ್ ‌ಭರವಸೆ
Last Updated 30 ಅಕ್ಟೋಬರ್ 2017, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಂದಿನ ಶೈಕ್ಷಣಿಕ ವರ್ಷದಲ್ಲಿ ಆಯ್ದ 2,000 ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳನ್ನು ಮೇಲ್ದರ್ಜೆಗೆ ಏರಿಸುತ್ತೇವೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ತನ್ವೀರ್‌ ಸೇಠ್‌ ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ, ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾ ಯೂನಿವರ್ಸಿಟಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಹಾಗೂ ರಾಜ್ಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗಳ (ಎಸ್‌ಡಿಎಂಸಿ) ಸಹಯೋಗದಲ್ಲಿ ನಗರದಲ್ಲಿ ಸೋಮವಾರ ಆಯೋಜಿಸಿದ್ದ ‘ಎಸ್‌ಡಿಎಂಸಿ ಸದಸ್ಯರ ರಾಜ್ಯ ಮಟ್ಟದ ಸಮಾವೇಶ’ದಲ್ಲಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳ ದಾಖಲಾತಿ ಮತ್ತು ‌ಮೂಲಸೌಕರ್ಯಗಳಿಗೆ ಅನುಗುಣವಾಗಿ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ, ಪ್ರೌಢ ಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಮೇಲ್ದರ್ಜೆಗೆ ಏರಿಸುತ್ತೇವೆ. ರಾಜ್ಯದಲ್ಲಿನ 23 ಸಾವಿರ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ 8ನೇ ತರಗತಿ ಇಲ್ಲ. ತೀರಾ ಅಗತ್ಯ ಇರುವಲ್ಲಿ 8ನೇ ತರಗತಿಯನ್ನು ಸೇರ್ಪಡೆ ಮಾಡುತ್ತೇವೆ’ ಎಂದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್‌.ಜಿ.ಸಿದ್ಧರಾಮಯ್ಯ, ‘ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗಳ ಮೇಲ್ವಿಚಾರಣೆಯನ್ನು ಸರಿಯಾಗಿ ನಿರ್ವಹಿಸುತ್ತಿಲ್ಲ. ಹಾಗಾಗಿ ಸರ್ಕಾರಿ ಶಾಲೆಗಳು ಹಿಂದುಳಿದಿವೆ. ಖಾಸಗಿಯವರು ಪರವಾನಗಿ ಇಲ್ಲದೆಯೇ ವಸತಿಶಾಲೆಗಳನ್ನು ನಡೆಸುತ್ತಿದ್ದಾರೆ. ವಿದ್ಯಾರ್ಥಿಗಳಿಂದ ದಂಡ ಸಂಗ್ರಹಿಸುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ಆರ್‌ಟಿಇ ಕಾಯ್ದೆಯಿಂದ ಖಾಸಗಿ ಶಾಲೆಗಳಿಗೆ ಅನುದಾನ ಸಿಗುತ್ತದೆಯೇ ಹೊರತು ಎಲ್ಲರಿಗೂ ಶಿಕ್ಷಣ ಸಿಗುವುದಿಲ್ಲ. ಆ ಕಾಯ್ದೆ ರದ್ದುಪಡಿಸಬೇಕು. ಎಲ್ಲರಿಗೂ ಉಚಿತ ಶಿಕ್ಷಣ ಸಿಗುವಂತೆ ಮಾಡಲು ಕಾನೂನು ತಿದ್ದುಪಡಿ ಮಾಡಬೇಕು. ರಾಜ್ಯದಲ್ಲಿನ ಎಲ್ಲ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕಲಿಸಬೇಕು’ ಎಂದು ಅವರು ಒತ್ತಾಯಿಸಿದರು.

ಶಿಕ್ಷಣ ತಜ್ಞ ವಿ.ಪಿ.ನಿರಂಜನಾರಾಧ್ಯ, ‘ಶಿಕ್ಷಣ ಹಕ್ಕು ಕಾಯ್ದೆಯ 12(1)ಸಿ ಕಲಂ ಶಿಕ್ಷಣ ವ್ಯವಸ್ಥೆಯ ಖಾಸಗೀಕರಣಕ್ಕೆ ಅವಕಾಶ ಕಲ್ಪಿಸುತ್ತಿದೆ. ಇದನ್ನು ಕೈಬಿಡಬೇಕು. 10 ವರ್ಷಗಳಲ್ಲಿ ರಾಜ್ಯದಲ್ಲಿ 3,426 ಖಾಸಗಿ ಶಾಲೆಗಳನ್ನು ತೆರೆಯಲಾಗಿದ್ದು, 10 ಲಕ್ಷ ಮಕ್ಕಳು ಆ ಶಾಲೆಗಳಿಗೆ ದಾಖಲಾಗಿದ್ದಾರೆ’ ಎಂದು ತಿಳಿಸಿದರು.

ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಸ್‌.ರಾಜೇಂದ್ರ ಬಾಬು, ‘ದೇಶದಲ್ಲಿ ಬಡತನ ಇರುವವರೆಗೂ ಸರ್ಕಾರಿ ಶಾಲೆಗಳು ಇರಬೇಕು’ ಎಂದರು.

* ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ನಿಧಿಯೊಂದನ್ನು ಸ್ಥಾಪಿಸುತ್ತೇವೆ. ಇದಕ್ಕಾಗಿ ಸಿಎಸ್‌ಆರ್‌ ಅಡಿ ದೇಣಿಗೆ ಪಡೆಯುತ್ತೇವೆ.

-ತನ್ವೀರ್‌ ಸೇಠ್‌, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT