ಜಮಖಂಡಿ–ಕುಡಚಿ ಹೆದ್ದಾರಿ ದುರಸ್ತಿಗೆ ಆಗ್ರಹ

ರಬಕವಿ ಬನಹಟ್ಟಿ: ಇಲ್ಲಿನ ಜಮಖಂಡಿ–ಕುಡಚಿ ರಾಜ್ಯ ಹೆದ್ದಾರಿ ಸಂಪೂರ್ಣವಾಗಿ ಹದಗೆಟ್ಟಿದ್ದು, ದೂಳಿನಿಂದ ಆವೃತವಾಗಿದೆ. ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗಿದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಮನ ಹರಿಸಿ ರಸ್ತೆ ದುರಸ್ತಿಗೆ ಮುಂದಾಗುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.
ಇಲ್ಲಿನ ವೈಭವ ಟಾಕೀಸ್‌ನಿಂದ ಸತ್ಕಾರ ಕಾಂಪ್ಲೆಕ್ಸ್‌ವರೆಗಿನ ರಸ್ತೆ ಸಂಪೂರ್ಣ ಹಾಳಾಗಿದ್ದು, ಗುಂಡಿಗಳನ್ನು ಮುಚ್ಚಲು ಲೋಕೋಪಯೋಗಿ ಇಲಾಖೆ ಹಾಕಿದ್ದ ಸಿಮೆಂಟ್ ಮಿಶ್ರಿತ ಕಲ್ಲುಗಳು ಕಿತ್ತುಹೋಗಿವೆ. ಇದರಿಂದ ವಾಹನ ಸವಾರರು ತೊಂದರೆ ಪಡುವಂತಾಗಿದೆ.
ಈ ರಸ್ತೆ ಸಮೀಪದಲ್ಲಿಯೇ ಅನೇಕ ಶಾಲಾ–ಕಾಲೇಜುಗಳಿದ್ದು, ಬೃಹತ್ ಪ್ರಮಾಣದ ವಾಹನಗಳು ಸಂಚರಿಸಿದಾಗ ದೂಳು ಕೋಣೆಯನ್ನು ಪ್ರವೇಶಿಸುತ್ತದೆ. ಇದರಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದ್ದು, ಈ ಬಗ್ಗೆ ಸಂಬಂಧಪಟ್ಟವರಿಗೆ ಹಲವು ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರಾದ ಪ್ರಭಾಕರ ಮೊಳೆದ, ಕುಮಾರ ಕದಂ, ರಾಜು ಬಾಣಕಾರ ಬೇಸರ ವ್ಯಕ್ತಪಡಿಸಿದರು.
ರಸ್ತೆ ಅಭಿವೃದ್ಧಿಗೆ ₹ 1 ಕೋಟಿ ಬಿಡುಗಡೆಯಾಗಿದೆ. ಸದ್ಯದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತದೆ ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದರು. ಆದರೆ, ಇದುವರೆಗೆ ಕಾಮಗಾರಿ ಆರಂಭವಾಗಿಲ್ಲ.
ಇದರಿಂದ ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ಕೂಡಲೇ ರಸ್ತೆಯನ್ನು ರಪೇರಿ ಮಾಡಿ ದೂಳಿನಿಂದ ಮುಕ್ತಿ ಕೊಡಿಸುವಂತೆ ಸ್ಥಳೀಯರಾದ ಶೇಖರ ಹಕ್ಕಲದಡ್ಡಿ, ಪರಶುರಾಮ ಸಾಲ್ಗುಡೆ, ರಾಜು ಅಂಬಲಿ ಸೇರಿದಂತೆ ಅನೇಕರು ಒತ್ತಾಯಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.