ಶುಕ್ರವಾರ, ಫೆಬ್ರವರಿ 26, 2021
27 °C

ಆಸ್ಪತ್ರೆಗಳಲ್ಲಿ ಸೌಲಭ್ಯಗಳಿಲ್ಲದಿದ್ದರೆ ನಿರ್ದೇಶಕರೇ ಹೊಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಆಸ್ಪತ್ರೆಗಳಲ್ಲಿ ಸೌಲಭ್ಯಗಳಿಲ್ಲದಿದ್ದರೆ ನಿರ್ದೇಶಕರೇ ಹೊಣೆ

ಬೆಂಗಳೂರು: ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಸಹಾಯಕ ಪ್ರಾಧ್ಯಾಪಕರನ್ನು ರಾತ್ರಿ ಪಾಳಿಗೂ ನಿಯೋಜಿಸಬೇಕು ಎಂದು ವೈದ್ಯಕೀಯ ಶಿಕ್ಷಣ ಇಲಾಖೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಅಗತ್ಯ ಸೌಲಭ್ಯಗಳ ಕೊರತೆಯಾದರೆ ಕಾಲೇಜಿನ ನಿರ್ದೇಶಕರು ಮತ್ತು ವೈದ್ಯಕೀಯ ಸೂಪರಿಂಟೆಂಡೆಂಟ್ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಇಲಾಖೆ ಉಪ ಕಾರ್ಯದರ್ಶಿ ಚಂದ್ರಶೇಖರ್ ಸುತ್ತೋಲೆ ಹೊರಡಿಸಿದ್ದಾರೆ.

ಕಾಲೇಜಿನ ಎಲ್ಲ ಸಹಾಯಕ ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರನ್ನು ರಾತ್ರಿಪಾಳಿಗೂ ನಿಯೋಜಿಸಬೇಕು ಮತ್ತು ಈ ಕುರಿತ ದಾಖಲೆಗಳನ್ನು ನಿರ್ವಹಿಸಬೇಕು. ರಾತ್ರಿಪಾಳಿ ವೈದ್ಯರು ನಿಗದಿತ ಸಮಯಕ್ಕೆ ಕರ್ತವ್ಯಕ್ಕೆ ಹಾಜರಾಗಬೇಕು. ಸಮಯ ಪಾಲಿಸದ ವೈದ್ಯರ ವಿರುದ್ಧ ಕಾಲೇಜಿನ ನಿರ್ದೇಶಕರು ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ.

ನಿರ್ದೇಶಕರು ಮತ್ತು ವೈದ್ಯಕೀಯ ಸೂಪರಿಂಟೆಂಡೆಂಟ್ ಅವರು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಟ್ಟು ತೆರಳಬಾರದು. ಅವರ ಅಧೀನ ಸಿಬ್ಬಂದಿಯೂ ಸಹ ತಮ್ಮ ಅನುಮತಿ ಪಡೆಯದೆ ರಜೆ ಪಡೆಯುವಂತಿಲ್ಲ ಎಂಬುದನ್ನೂ ಸೂಚಿಸಬೇಕು. ವೈದ್ಯರು ಸಮೀಪದ ನಗರ, ಪಟ್ಟಣಗಳಲ್ಲಿ ಮನೆ ಮಾಡಿಕೊಂಡು ನಿತ್ಯ ಓಡಾಡುವಂತಿಲ್ಲ. ಆಸ್ಪತ್ರೆ ಅಕ್ಕಪಕ್ಕದಲ್ಲಿಯೇ ವಾಸಕ್ಕೆ ಸೌಲಭ್ಯ ಕಲ್ಪಿಸಬೇಕು ಎಂದೂ ನಿರ್ದೇಶನ ನೀಡಲಾಗಿದೆ.

ಸೌಲಭ್ಯಗಳಲ್ಲಿ ಕೊರತೆ ಇರಬಾರದು

ಆಸ್ಪತ್ರೆಯಲ್ಲಿ ಸ್ಟ್ರೆಚರ್, ಗಾಲಿಕುರ್ಚಿ ಸೇರಿದಂತೆ ಅಗತ್ಯ ಸೌಲಭ್ಯಗಳಿಗೆ ಕೊರತೆ ಇಲ್ಲದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಸೌಲಭ್ಯಗಳ ಕೊರತೆ ಇದ್ದರೆ ಕೂಡಲೇ ಸರ್ಕಾರದ ಗಮನಕ್ಕೆ ತರಬೇಕು. ರೋಗಿಗಳನ್ನು ವಾರ್ಡ್‌ನಿಂದ ವಾರ್ಡ್‌ಗೆ, ಪ್ರಯೋಗಾಲಯಗಳಿಗೆ ಕೊರೆದೊಯ್ಯುವಾಗ ಈ ಸಲಕರಣೆಗಳನ್ನು ಒದಗಿಸಬೇಕು.

ರಸ್ತೆ ಅಪಘಾತದಂತಹ ತುರ್ತು ಸಂದರ್ಭಗಳಲ್ಲಿ ಹೆಚ್ಚಿನ ಸಂಖ್ಯೆಯ ಗಾಯಾಳುಗಳು ಆಸ್ಪತ್ರೆಗೆ ಬಂದಾಗ ಚಿಕಿತ್ಸೆಗೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಬೇಕು. ತುರ್ತು ಚಿಕಿತ್ಸಾ ಕೇಂದ್ರದಲ್ಲಿ ಹೆಚ್ಚುವರಿ ಸಲಕರಣೆಗಳನ್ನು ಹೊಂದಿರಬೇಕು. ಇಂತಹ ಸಂದರ್ಭದಲ್ಲಿ ನಿರ್ದೇಶಕರು ಮತ್ತು ವೈದ್ಯಕೀಯ ಸೂಪರಿಂಟೆಂಡೆಂಟ್ ಸಹ ಆಸ್ಪತ್ರೆಗೆ ತೆರಳಿ ಅಗತ್ಯ ಏರ್ಪಾಡು ಮಾಡಬೇಕು ಎಂದು ಸೂಚಿಸಲಾಗಿದೆ.

ಆಸ್ಪತ್ರೆ ವೀಕ್ಷಣೆಗಾಗಿ ಗಣ್ಯ ವ್ಯಕ್ತಿಗಳು, ಸಚಿವರು, ಶಾಸಕರು, ಮಾಧ್ಯಮ ಪ್ರತಿನಿಧಿಗಳು ಭೇಟಿ ನೀಡಿದಾಗ ಅಲ್ಲಿನ ನಿರ್ದೇಶಕರು ಮತ್ತು ವೈದ್ಯಕೀಯ ಸೂಪರಿಂಟೆಂಡೆಂಟ್ ಮುಂದಾಳತ್ವ ವಹಿಸಿ ಅಗತ್ಯ ಮಾಹಿತಿಗಳನ್ನು ಒದಗಿಸಬೇಕು ಎಂದೂ ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.