ಗುರುವಾರ , ಮಾರ್ಚ್ 4, 2021
30 °C

ಮುಚ್ಚಿದ ಖಾಸಗಿ ಆಸ್ಪತ್ರೆ: ರೋಗಿಗಳ ಪರದಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಚ್ಚಿದ ಖಾಸಗಿ ಆಸ್ಪತ್ರೆ: ರೋಗಿಗಳ ಪರದಾಟ

ಗದಗ: ರಾಜ್ಯ ಸರ್ಕಾರ, ಖಾಸಗಿ ಆಸ್ಪತ್ರೆಗಳ ನಿಯಂತ್ರಣ ತಿದ್ದುಪಡಿ ಮಸೂದೆ ವಿರೋಧಿಸಿ, ಸೋಮವಾರ ಜಿಲ್ಲೆಯ 70ಕ್ಕೂ ಹೆಚ್ಚು ಖಾಸಗಿ ಆಸ್ಪತ್ರೆಗಳ ವೈದ್ಯರು ತಮ್ಮ ವೈದ್ಯಕೀಯ ಸೇವೆ ಸ್ಥಗಿತಗೊಳಿಸಿ, ಬೆಳಗಾವಿ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ರೋಗಿಗಳು ತೀವ್ರ ತೊಂದರೆ ಅನುಭವಿಸಿದರು.

ಖಾಸಗಿ ಆಸ್ಪತ್ರೆಗಳ ಹೊರ ರೋಗಿಗಳ ವಿಭಾಗದ ಸೇವೆಯಲ್ಲಿ ವ್ಯತ್ಯಯ ಉಂಟಾಯಿತು. ಸೇವೆ ಸ್ಥಗಿತದ ಮಾಹಿತಿ ಇಲ್ಲದೆ ಗ್ರಾಮೀಣ ಪ್ರದೇಶಗಳಿಂದ ನಗರಕ್ಕೆ ಬಂದಿದ್ದ ರೋಗಿಗಳು ಸಕಾಲದಲ್ಲಿ ಚಿಕಿತ್ಸೆ ಲಭಿಸದೆ ಪರದಾಡಿದರು. ಖಾಸಗಿ ಸ್ಕ್ಯಾನಿಂಗ್‌, ರಕ್ತನಿಧಿ, ಎಕ್ಸ್‌ರೇ, ರಕ್ತ ಪರೀಕ್ಷೆ ಕೇಂದ್ರಗಳು ಸ್ಥಗಿತಗೊಂಡಿದ್ದವು. ರೋಗಿಗಳು ಖಾಸಗಿ ಆಸ್ಪತ್ರೆಗಳ ಆವರಣಕ್ಕೆ ಬಂದು, ಮರಳಿ ಹೋಗುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.

ಆಸ್ಪತ್ರೆಗಳ ಬಾಗಿಲಿಗೆ ’ಬೆಳಗಾವಿ ಚಲೋ ಹಿನ್ನೆಲೆಯಲ್ಲಿ ಸೇವೆ ಸ್ಥಗಿತಗೊಳಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕು’ ಎಂಬ ಪತ್ರವನ್ನು ಅಂಟಿಸಲಾಗಿತ್ತು. ತುರ್ತು ವೈದ್ಯಕೀಯ ಸೇವೆಯ ಅಗತ್ಯ ಇದ್ದವರು, ಜಿಲ್ಲಾ ಕೇಂದ್ರದಿಂದ 5 ಕಿ.ಮೀ ದೂರದಲ್ಲಿರುವ ಜಿಲ್ಲಾ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡರು.

ಖಾಸಗಿ ಆಸ್ಪತ್ರೆಯಲ್ಲಿ ಸೇವೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಸೋಮವಾರ ಬೆಳಿಗ್ಗೆಯಿಂದಲೇ ರೋಗಿಗಳ ದಟ್ಟಣೆ ಕಂಡುಬಂತು. ‘ಪ್ರತಿ ದಿನ ಸರಾಸರಿ 500 ಜನರು ಹೊರ ರೋಗಿಗಳಾಗಿ ಚಿಕಿತ್ಸೆ ಪಡೆಯುತ್ತಾರೆ. ಸೋಮವಾರ ಈ ಸಂಖ್ಯೆ 700 ದಾಟಿದೆ’ ಎಂದು ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಹೇಳಿದರು.

ಆರೋಗ್ಯ ಸೇವೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸರ್ಕಾರಿ ಆಸ್ಪತ್ರೆ ವೈದ್ಯರಿಗೆ ಜಿಲ್ಲಾಡಳಿತ ಸೂಚನೆ ನೀಡಿತ್ತು. ಜಿಲ್ಲೆಯಲ್ಲಿ ಔಷಧ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸಿದವು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭಿಸದ ಕಾರಣ, ಕೆಲವರು ನೆಗಡಿ, ಕೆಮ್ಮು, ಜ್ವರ ಮತ್ತಿತರ ಸಾಮಾನ್ಯ ರೋಗಗಳಿಗೆ, ಔಷಧ ಮಳಿಗೆಗಳಲ್ಲಿ ಮಾತ್ರೆಗಳನ್ನು ತೆಗೆದುಕೊಂಡು ಹೋಗುತ್ತಿದ್ದ ದೃಶ್ಯ ಕಂಡುಬಂತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.