ಗುರುವಾರ , ಫೆಬ್ರವರಿ 25, 2021
24 °C

ಖಾಸಗಿ ಆಸ್ಪತ್ರೆಗಳ ಸೇವೆ ಸ್ಥಗಿತ ಇಂದಿನಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಖಾಸಗಿ ಆಸ್ಪತ್ರೆಗಳ ಸೇವೆ ಸ್ಥಗಿತ ಇಂದಿನಿಂದ

ಧಾರವಾಡ/ಹುಬ್ಬಳ್ಳಿ: ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆ ತಿದ್ದುಪಡಿಯನ್ನು ವಿರೋಧಿಸಿ ಎರಡು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಯನ್ನು ತೀವ್ರಗೊಳಿಸಲು ಭಾರತೀಯ ವೈದ್ಯಕೀಯ ಸಂಘ ಹುಬ್ಬಳ್ಳಿ ಮತ್ತು ಧಾರವಾಡ ಘಟಕ ನಿರ್ಧರಿಸಿವೆ.

‘ಬುಧವಾರ (ನ 15) ಬೆಳಿಗ್ಗೆ 8ರಿಂದ ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ತುರ್ತು ಸೇವೆ ಸೇರಿದಂತೆ ಎಲ್ಲ ಆರೋಗ್ಯ ಸೇವೆಯನ್ನು ಸಂಪೂರ್ಣ ಸ್ಥಗಿತಗೊಳಿಸಲು ತೀರ್ಮಾನಿಸಲಾಗಿದೆ’ ಎಂದು ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಉಪಾಧ್ಯಕ್ಷರಾದ ಡಾ. ವಿ.ಬಿ.ನಿಟಾಲಿ ಮತ್ತು ಡಾ. ಶಿವಕುಮಾರ ಕುಂಬಾರ ‘ಪ್ರಜಾವಾಣಿ’ಗೆ ತಿಳಿಸಿದರು.

‘ವೈದ್ಯಕೀಯ ಸೇವೆಯನ್ನು ಸ್ಥಗಿತಗೊಳಿಸುವ ಕುರಿತಂತೆ ಮಂಗಳವಾರ ರಾತ್ರಿ ಧಾರವಾಡ ಮತ್ತು ಹುಬ್ಬಳ್ಳಿಯಲ್ಲಿ ತುರ್ತು ಸಾಮಾನ್ಯ ಸಭೆ ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ’ ಎಂದು ಹೇಳಿದರು.

‘ನಮ್ಮ ಬೇಡಿಕೆಗೆ ರಾಜ್ಯ ಸರ್ಕಾರ ಸ್ಪಂದಿಸದೇ ಇರುವುದರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ಅನಿವಾರ್ಯವಾಗಿದೆ. ಬೆಳಗಾವಿಯಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹದಲ್ಲಿ ಜಿಲ್ಲೆಯ ವೈದ್ಯರು ಪ್ರತಿದಿನ ಪಾಲ್ಗೊಳ್ಳಲು ನಿರ್ಧಾರ ತೆಗೆದುಕೊಳ್ಳಲಾಗಿದೆ’ ಎಂದರು.

‘ಕೆಪಿಎಂಇ ಕಾಯ್ದೆ ವೈದ್ಯರಿಗೆ ಮಾರಕವಾಗಲಿದೆ. ಈ ಕುರಿತಂತೆ ಸರ್ಕಾರದೊಂದಿಗೆ ಹಲವು ಸುತ್ತಿನ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಅನಿವಾರ್ಯವಾಗಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ’ ಎಂದು ತಿಳಿಸಿದರು.

‘ಹುಬ್ಬಳ್ಳಿ–ಧಾರವಾಡ ಅವಳಿ ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ಖಾಸಗಿ ಆಸ್ಪತ್ರೆಗಳು ತಮ್ಮ ಎಲ್ಲಾ ಸೇವೆಗಳನ್ನು ಮಂಗಳವಾರ ಮಧ್ಯರಾತ್ರಿಯಿಂದಲೇ ಬಂದ್ ಮಾಡಿವೆ. ಆಸ್ಪತ್ರೆಗೆ ಬರುವ ರೋಗಿಗಳಿಗೆ ತುರ್ತು ಸೇವೆಗಾಗಿ ಜಿಲ್ಲಾ ಆಸ್ಪತ್ರೆ, ಹುಬ್ಬಳ್ಳಿಯ ಕಿಮ್ಸ್‌ ಹಾಗೂ ಸತ್ತೂರಿನ ಎಸ್‌ಡಿಎಂ(ಹೊರ ರೋಗಿ ವಿಭಾಗ ಕಾರ್ಯನಿರ್ವಹಿಸುವುದಿಲ್ಲ)ಗೆ ತೆರಳುವಂತೆ ಮನವಿ ಮಾಡಲಾಗಿದೆ. ಬುಧವಾರದಿಂದ ಯಾವುದೇ ಹೊರರೋಗಿ ಚಿಕಿತ್ಸೆ ಲಭ್ಯವಿರುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ:

‘ಖಾಸಗಿ ಆಸ್ಪತ್ರೆಗಳ ವೈದ್ಯರು ಪ್ರತಿಭಟನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಕಿಮ್ಸ್‌ಗೆ ಬರುವ ರೋಗಿಗಳಿಗೆ ತೊಂದರೆಯಾಗದಂತೆ, ಅಗತ್ಯ ಔಷಧೋಪಚಾರ ಒದಗಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಕಿಮ್ಸ್‌ ನಿರ್ದೇಶಕ ದತ್ತಾತ್ರೇಯ ಬಂಟ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ಈ ಸಂಬಂಧ ಮಂಗಳವಾರ ಎಲ್ಲ ವಿಭಾಗಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗದ್ದು, ಯಾವೊಬ್ಬ ವೈದ್ಯ ಸಿಬ್ಬಂದಿಯೂ ರಜೆ ಮೇಲೆ ತೆರಳದಂತೆ ಸೂಚಿಸಲಾಗಿದೆ’ ಎಂದರು.

‘ಈಗಾಗಲೇ ಕಿಮ್ಸ್‌ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಒಳರೋಗಿಗಳಲ್ಲಿ ಗುಣಮುಖರಾದವರನ್ನು ತಕ್ಷಣ ಬಿಡುಗಡೆಗೊಳಿಸಿ ಮನೆಗೆ ಕಳುಹಿಸುವಂತೆ ಹಾಗೂ ಚಿಕಿತ್ಸೆ ಅಗತ್ಯವಿರುವವರನ್ನು ಮಾತ್ರ ಒಳರೋಗಿಗಳನ್ನಾಗಿ ದಾಖಲಿಸಿಕೊಳ್ಳುವಂತೆ ತಿಳಿಸಲಾಗಿದೆ. ತುರ್ತು ಅಗತ್ಯಗಳಿಗಾಗಿ ಬೆಡ್‌ಗಳನ್ನು ಕಾಯ್ದಿರಿಸಿಕೊಳ್ಳಲಾಗಿದೆ’ ಎಂದು ಹೇಳಿದರು.

ಮಂಗಳವಾರ ನಿರಾತಂಕ: ಬಹುತೇಕ ಖಾಸಗಿ ಆಸ್ಪತ್ರೆಗಳು ಮಂಗಳವಾರ ಬಾಗಿಲು ತೆರೆದು, ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಿದ್ದವು. ಹೀಗಾಗಿ ನಗರದ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಯಾವುದೇ ರೀತಿಯ ತೊಂದರೆಯಾಗಿರಲಿಲ್ಲ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.