ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೇವಾ ಭದ್ರತೆ, ಮೂಲ ಸೌಲಭ್ಯಕ್ಕೆ ಒತ್ತಾಯ

Last Updated 24 ನವೆಂಬರ್ 2017, 6:39 IST
ಅಕ್ಷರ ಗಾತ್ರ

ಚಾಮರಾಜನಗರ: ಗುತ್ತಿಗೆ ಹೆಸರಿನಲ್ಲಿ ದಿನಗೂಲಿ ನೌಕರರ ಮೇಲೆ ನಡೆಯುತ್ತಿರುವ ಶೋಷಣೆ ತಪ್ಪಿಸಬೇಕು ಹಾಗೂ ಸೇವಾ ಭದ್ರತೆ, ಮೂಲ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ನಗರದಲ್ಲಿ ಬುಧವಾರ ಅರಣ್ಯ ಇಲಾಖೆಯ ದಿನಗೂಲಿ ನೌಕರರ ಸಂಘದ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಯಿತು.

ಚಾಮರಾಜೇಶ್ವರ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಆರಂಭಿಸಿದ ನೌಕರರು ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿಗೆ ತೆರಳಿ ಘೋಷಣೆ ಕೂಗಿದರು. ಅರಣ್ಯ ಇಲಾಖೆಯಲ್ಲಿ ಕೆಲಸ ಮಾಡುವ ದಿನಗೂಲಿ ನೌಕರರನ್ನು ಮೂರನೇ ದರ್ಜೆಯಲ್ಲಿ ಕಾಣಲಾಗುತ್ತಿದ್ದು, ನೌಕರಿ ಉಳಿಸಿಕೊಳ್ಳಲು ಹರಸಾಹಸ ಪಡುವಂತಾಗಿದೆ. ಪ್ರತಿದಿನ ಭಯದಿಂದ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ದೂರಿದರು.

ಕೇಂದ್ರದ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರು ಅ. 31ರಂದು ಹೊರಡಿಸಿದ ಸುತ್ತೋಲೆಯಲ್ಲಿ ದಿನಗೂಲಿ ಹಾಗೂ ಪಿಸಿಪಿ ಪದ್ಧತಿಯನ್ನು ರದ್ದುಪಡಿಸಿ ಎಲ್ಲ ನೌಕರರನ್ನು ಹೊರಗುತ್ತಿಗೆ ಮೂಲಕ ನೇಮಿಸಬೇಕು ಎಂದು ತಿಳಿಸಿದ್ದಾರೆ. ಈ ಸುತ್ತೋಲೆ ವಿರೋಧಿಸಿ ಅರಣ್ಯ ಸಚಿವರು, ಸರ್ಕಾರದ ಕಾರ್ಯದರ್ಶಿ ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ವಿಜಯ್‌ಲಾಲ್‌ ಮೀನಾ ಅವರು ಮನವಿ ಪತ್ರ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು, ‘ನಮ್ಮ ವ್ಯಾಪ್ತಿಯಲ್ಲಿ ನೀಡಲಾಗುವ ಎಲ್ಲ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗುವುದು. ಸರ್ಕಾರದಿಂದ ಆಗಬೇಕಿದ್ದರೆ ಮೇಲಧಿಕಾರಿಗಳಿಗೆ ತಿಳಿಸಲಾಗುವುದು’ ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಎ.ಎಂ. ನಾಗರಾಜು, ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್‌, ಕೊಳ್ಳೇಗಾಲ ಕಾವೇರಿ ವನ್ಯಜೀವಿ ವಿಭಾಗದ ಹುಚ್ಚಯ್ಯ, ಬಂಡೀಪುರ ವಿಭಾಗದ ಬಾಲಚಂದ್ರ, ಕಾರ್ಯದರ್ಶಿ ರಾಜಶೇಖರ್‌ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT