ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತೃಪೂರ್ಣ: ಮಲೆನಾಡಿನಲ್ಲಿ ಮೊಬೈಲ್ ಸೇವೆ

Last Updated 2 ಡಿಸೆಂಬರ್ 2017, 8:53 IST
ಅಕ್ಷರ ಗಾತ್ರ

ನರಸಿಂಹರಾಜಪುರ: ಮಾತೃಪೂರ್ಣ ಯೋಜನೆಯನ್ನು ಮಲೆನಾಡಿನ ಭಾಗದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ಸಂಚಾರಿ ಸೇವೆ ಒದಗಿಸಲು ಜಿಲ್ಲಾಧಿಕಾರಿಗೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಮಲೆನಾಡು ಹಾಗೂ ಗುಡ್ಡಗಾಡು ಪ್ರದೇಶಗಳಲ್ಲಿರುವ ಗರ್ಭಿಣಿಯರ ಮತ್ತು ಬಾಣಂತಿಯರ ಕಷ್ಟ ಗಮನಕ್ಕೆ ಬಂದಿದೆ. ಹೀಗಾಗಿ, ಅವರಿಗೆ ಪೌಷ್ಟಿಕ ಆಹಾರವನ್ನು ಅವರ ಮನೆಗೆ ತಲುಪಿಸುವ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಮಲೆನಾಡು ಭಾಗದಲ್ಲಿ ಯೋಜನೆಯ ಯಶಸ್ವಿಗೆ 5 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಸಭೆ ಕರೆದು ಚರ್ಚಿಸಲಾಗಿದೆ ಎಂದರು.

ನರಸಿಂಹರಾಜಪುರ ಪಟ್ಟಣದ ವ್ಯಾಪ್ತಿಯಲ್ಲಿ ರಸ್ತೆ ವಿಸ್ತರಣೆಯ ಬಗ್ಗೆ ಚರ್ಚಿಸಲಾಗಿದೆ. ಪಟ್ಟಣದ ವ್ಯಾಪ್ತಿಯಲ್ಲಿ ಪರಿಹಾರ ನೀಡಿ ರಸ್ತೆ ವಿಸ್ತರಣೆ ಮಾಡಬೇಕೆಂಬುದರ ಬಗ್ಗೆ ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಶ್ರೀನಿವಾಸ್ ಮನವಿ ಸಲ್ಲಿಸಿದ್ದಾರೆ. ಈ ಬಗ್ಗೆ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಅವರೊಂದಿಗೆ ಚರ್ಚಿಸಲಾಗಿದ್ದು, ಪಟ್ಟಣ ಪಂಚಾಯಿತಿಯಾಗಿರುವುದರಿಂದ ಯಾವ ಅನುದಾನದಲ್ಲಿ ಹಣ ಬಿಡುಗಡೆ ಮಾಡಬೇಕೆಂದು ಚರ್ಚಿಸಿ ತೀರ್ಮಾನಿಸಲಾಗುವುದು’ ಎಂದರು.

ತಾಲ್ಲೂಕಿನ ಲಿಂಗಾಪುರ ಗ್ರಾಮದ ವ್ಯಾಪ್ತಿಯಲ್ಲಿ ₹1 ಕೋಟಿ ವೆಚ್ಚದಲ್ಲಿ ಕೈಗಾರಿಕಾ ವಸಾಹತು ಪ್ರದೇಶ ನಿರ್ಮಾಣವಾಗಿದ್ದರೂ ಅರಣ್ಯ ಇಲಾಖೆ ತಮಗೆ ಸೇರಿದ ಜಾಗವೆಂದು ತಕರಾರು ತೆಗೆದಿರುವುದರಿಂದ ಉದ್ಘಾಟನೆಯಾಗಿಲ್ಲ ಎಂದು ಗಮನ ಸೆಳೆದಾಗ, ಸಮಸ್ಯೆಯನ್ನು ಶೀಘ್ರ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.

ಬಗರ್ ಹುಕುಂ ಸಮಿತಿಯ ಸಭೆಯ ನಿಯಮಿತವಾಗಿ ನಡೆಯದೆ ಫಲಾನುಭವಿಗಳಿಗೆ ಹಕ್ಕುಪತ್ರ ದೊರೆಯಲು ವಿಳಂಬವಾಗುತ್ತಿರುವ ಬಗ್ಗೆ ಗಮನ ಸೆಳೆದಾಗ, ನಿಗದಿತ ಅವಧಿಯಲ್ಲಿ ಸಭೆ ನಡೆಸಿ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಆದೇಶ ನೀಡಿದರು.

ರಬ್ಬರ್ ಬೆಲೆ ಕುಸಿತವಾಗುತ್ತಿರುವುದರಿಂದ ಬೆಳೆಗಾರರು ಸಂಕಷ್ಟದಲ್ಲಿದ್ದಾರೆ ಎಂದಾಗ, ‘ಕೇಂದ್ರ ಸರ್ಕಾರ ಈ ಸಮಸ್ಯೆಗೆ ಪರಿಹಾರ ಒದಗಿಸಬೇಕು. ಕೇಂದ್ರ ಸರ್ಕಾರ ರಾಜ್ಯಗಳಿಂದ ತೆರಿಗೆ ವಸೂಲಿಮಾಡುತ್ತದೆ. ಆಮದು ರಫ್ತು ಸುಂಕಗಳನ್ನು ನೀಡುವುದಿಲ್ಲ. ಹಣಕಾಸು ಆಯೋಗದ ಶಿಫಾರಸಿನಂತೆ ಶೇ 42ರಷ್ಟು ಅನುದಾನ ಮಾತ್ರ ನೀಡುತ್ತದೆ. ಕೇಂದ್ರ ಹಣಕಾಸು ಆಯೋಗದ ಶಿಫಾರಸಿನ ಷೇರನ್ನು ನೀಡುತ್ತಿದೆ ಹೊರತು, ಅನುದಾನ ನೀಡುತ್ತಿಲ್ಲ ಎಂದರು.

ಬಿಜೆಪಿಯವರು ರಾಜ್ಯ ಸರ್ಕಾರ ಸಾಲ ಮನ್ನಾ ಮಾಡುವವರೆಗೆ ಮಾತನಾಡುತ್ತಿದ್ದರು. ಸಾಲ ಮನ್ನಾ ಮಾಡಿದ ಮೇಲೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಸಾಲ ಮನ್ನಾ ಮಾಡಿಸುವ ಬಗ್ಗೆ ಮಾತನಾಡುವುದನ್ನೆ ನಿಲ್ಲಿಸಿದ್ದಾರೆ ಎಂದು ಲೇವಡಿ ಮಾಡಿದರು. ತರೀಕೆರೆ ಶಾಸಕ ಶ್ರೀನಿವಾಸ್, ಕಾಂಗ್ರೆಸ್ ಮುಖಂಡ ಟಿ.ಡಿ.ರಾಜೇಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT