7

ಅಧಿಕಾರಿಗಳ ವೈಫಲ್ಯ, ಅಭಿವೃದ್ಧಿ ಕುಂಠಿತ

Published:
Updated:

ಚಿಕ್ಕಬಳ್ಳಾಪುರ: ‘ಚಿಕ್ಕಬಳ್ಳಾಪುರ ಜಿಲ್ಲೆಯಾಗಿ 10 ವರ್ಷ ಕಳೆದರೂ ಜಿಲ್ಲಾಡಳಿತ ಮತ್ತು ನಗರಸಭೆ ಅಧಿಕಾರಿಗಳ ವೈಫಲ್ಯದಿಂದ ತಾಲ್ಲೂಕಿನಲ್ಲಿ ಅಭಿವೃದ್ಧಿ ಕಾರ್ಯಗಳು ಸರಿಯಾಗಿ ಅನುಷ್ಠಾನಗೊಳ್ಳುತ್ತಿಲ್ಲ’ ಎಂದು ಮಾನವ ಹಕ್ಕುಗಳ ಜಾಗೃತಿ ಸಮಿತಿಯ ನಗರ ಘಟಕದ ಅಧ್ಯಕ್ಷ ಕೆ.ಎನ್‌.ಸುಧಾಕರ್‌ ಆರೋಪಿಸಿದರು.

ಸೋಮವಾರ ಸುದ್ದಿಗೋಷ್ಠಿ ಮಾತನಾಡಿ, ‘ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ರಸ್ತೆ ಬದಿ ವ್ಯಾಪಾರದಿಂದಾಗಿ ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಎಲ್ಲೆಂದರಲ್ಲಿ ಕಸದ ರಾಶಿ ಗಬ್ಬೆದ್ದು ನಾರುತ್ತಿವೆ' ಎಂದು ತಿಳಿಸಿದರು.

‘ಕೆಲವು ಪ್ರದೇಶಗಳಲ್ಲಿ ಇಂದಿಗೂ ಚರಂಡಿಗಳ ನಿರ್ಮಿಸಿಲ್ಲ. ಒಳ ಚರಂಡಿ ಮಾರ್ಗವಂತೂ ದುರ್ನಾತ ಬೀರುತ್ತಿದೆ. ಈ ಬಗ್ಗೆ ನಗರಸಭೆ ಅಧಿಕಾರಿಗಳಿಗೆ ಅನೇಕ ಬಾರಿ ಮನವಿ ಸಲ್ಲಿಸಿದರೂ ಈವರೆಗೂ ಸಮರ್ಪಕ ಉತ್ತರ ಸಿಕ್ಕಿಲ್ಲ’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ ಜಿಲ್ಲಾ ಆಸ್ಪತ್ರೆ ಕೇವಲ ಹೆಸರಿಗಷ್ಟೇ ಇದೆ. ವೈದ್ಯರ ಮತ್ತು ಸಿಬ್ಬಂದಿ ಕೊರತೆಯಿಂದಾಗಿ ಸಾರ್ವಜನಿಕರು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ. ವೈದ್ಯರು ಸಮರ್ಪಕವಾಗಿ ಸಾರ್ವಜನಿಕರಿಗೆ ಚಿಕಿತ್ಸೆ ನೀಡುತ್ತಿಲ್ಲ. ಈ ಬಗ್ಗೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ವಿಜಯಶಂಕರ್‌ ವಿಚಾರಿಸಿದರೆ ಬರೀ ಹಾರಿಕೆ ಉತ್ತರ ನೀಡುತ್ತಾರೆ. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದರೂ ಏನೂ ಪ್ರಯೋಜನವಾಗಿಲ್ಲ’ ಎಂದು ದೂರಿದರು.

‘ನಗರದ ಮುಖ್ಯರಸ್ತೆಗಳಲ್ಲಿ ವಾಹನ ನಿಲುಗಡೆ ಜಾಗದ ಸಮಸ್ಯೆಯಿಂದ ವಾಹನ ಮತ್ತು ಸಂಚಾರ ದಟ್ಟಣೆ ಹೆಚ್ಚುತ್ತಿದೆ. ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಇಷ್ಟಾದರೂ ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ಮುಂದಾಗುತ್ತಿಲ್ಲ. ಕೂಡಲೇ ಜಿಲ್ಲಾಡಳಿತ ವಾಹನ ನಿಲುಗಡೆಗೆ ಸೂಕ್ತ ಜಾಗ ಒದಗಿಸುವ ಕೆಲಸಕ್ಕೆ ಮುಂದಾಗಬೇಕು’ ಎಂದು ಆಗ್ರಹಿಸಿದರು.

‘ಗಂಗಮ್ಮ ಗುಡಿ ರಸ್ತೆ, ಬಜಾರ್‌ ರಸ್ತೆಯಲ್ಲಿರುವ ಅಂಗಡಿಗಳ ಮಾಲೀಕರು ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡು ನಾಗರಿಕರಿಗೆ ತೊಂದರೆ ನೀಡುತ್ತಿದ್ದಾರೆ. ಈ ರಸ್ತೆಯಲ್ಲಿ ಪಾದಚಾರಿ ಮಾರ್ಗ ವ್ಯವಸ್ಥಿತವಾಗಿರುವಂತೆ ನೋಡಿಕೊಳ್ಳಬೇಕು. ಪಾದಚಾರಿಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು’ ಎಂದು ಒತ್ತಾಯಿಸಿದರು.

ಸಮಿತಿಯ ನಗರ ಘಟಕದ ಉಪಾಧ್ಯಕ್ಷ ಅನಂತರಾಮ್‌, ಸಂಘಟನಾ ಕಾರ್ಯದರ್ಶಿ ರವಿ, ಪ್ರಧಾನ ಕಾರ್ಯದರ್ಶಿ ನರಸಿಂಹಮೂರ್ತಿ, ಮುಖಂಡ ನಯಾಜ್‌ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry