ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸದ ಪ್ರತಾಪ್ ಬಂಧನ ವಿರೋಧಿಸಿ ಬಿಜೆಪಿ ಪ್ರತಿಭಟನೆ

Last Updated 5 ಡಿಸೆಂಬರ್ 2017, 8:34 IST
ಅಕ್ಷರ ಗಾತ್ರ

ಚಿತ್ರದುರ್ಗ: ಹುಣಸೂರಿನಲ್ಲಿ ಹನುಮ ಜಯಂತಿಗೆ ತೆರಳುತ್ತಿದ್ದ ಹನುಮ ಮಾಲಾಧಾರಿಗಳ ಮೇಲೆ ಲಾಠಿ ಪ್ರಹಾರ ಮಾಡಿ, ಸಂಸದ ಪ್ರತಾಪ ಸಿಂಹ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಸೋಮವಾರ ನಗರದಲ್ಲಿ ಪ್ರತಿಭಟಿಸಿದರು.

ಒನಕೆ ಓಬವ್ವ ವೃತ್ತದಲ್ಲಿ ಸಮಾವೇಶಗೊಂಡ ಕಾರ್ಯಕರ್ತರು, ಪೊಲೀಸ್ ಇಲಾಖೆ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕೃತಿ ದಹಿಸಿ, ನಂತರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

‘ಸಮಾಜಘಾತುಕ ಶಕ್ತಿಗಳ ಬಗ್ಗೆ ಮೃದು ಧೋರಣೆ ತಾಳುವ ರಾಜ್ಯ ಸರ್ಕಾರ, ಹನುಮ ಮಾಲಾಧಾರಿಗಳ ವಿರುದ್ಧ ಲಾಠಿಪ್ರಹಾರ ಮಾಡಿದೆ. ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಸಂಸದ ಪ್ರತಾಪ ಸಿಂಹ ಅವರನ್ನು ತಡೆಯುವ ಸಂವಿಧಾನಾತ್ಮಕ ಹಕ್ಕುಗಳನ್ನು ದಮನ ಮಾಡಿದ್ದಾರೆ’ ಎಂದು ಪ್ರತಿಭಟನಾಕಾರರು ದೂರಿದರು.

‘ಹಿಂದೂ ಕಾರ್ಯಕರ್ತರ ಹತ್ಯೆಯಲ್ಲಿ ಕೈವಾಡವಿರುವ ದುಷ್ಕರ್ಮಿಗಳನ್ನು ಬಂಧಿಸುವ ಸಾಮರ್ಥ್ಯವಿಲ್ಲದ ರಾಜ್ಯ ಸರ್ಕಾರ, ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಅಮಾಯಕ ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗುತ್ತಿದೆ. ಇದು ಖಂಡನೀಯ’ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ್, ಗ್ರಾಮಾಂತರ ಪ್ರಧಾನ ಕಾರ್ಯದರ್ಶಿ ಜೆ.ಸಿ.ಸಗರ್, ಯುವ ಮೋರ್ಚಾ ಮುಖಂಡರಾದ ಭರತ್, ಶಂಭು, ದಗ್ಗೆ ಶಿವಪ್ರಕಾಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT