ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖರೀದಿ ಕೇಂದ್ರ ತೆರೆಯಲು ಆಗ್ರಹ

Last Updated 12 ಡಿಸೆಂಬರ್ 2017, 13:00 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕೃಷಿ ಉತ್ಪನ್ನಗಳ ಬೆಲೆ ಪರಿಷ್ಕರಿಸಬೇಕು. ಸರ್ಕಾರವೇ ಖರೀದಿ ಕೇಂದ್ರ ತೆರೆದು ರೈತರಿಂದ ಕೃಷಿ ಉತ್ಪನ್ನಗಳನ್ನು ಖರೀದಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶುಕ್ರವಾರ ರೈತ ಸಂಘದ ಪದಾಧಿಕಾರಿಗಳು ಜಿಲ್ಲಾಡಳಿತದ ಭವನದ ಎದುರು ಪ್ರತಿಭಟನೆ ನಡೆಸಿದರು.

ಬಿ.ಬಿ.ರಸ್ತೆಯ ಶನಿ ಮಹಾತ್ಮಾ ದೇವಸ್ಥಾನದಿಂದ ಜಿಲ್ಲಾಡಳಿತ ಭವನದ ವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬೇಡಿಕೆ ಈಡೇರಿಸುವಂತೆ ಸರ್ಕಾರದ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಮಾತನಾಡಿ, ‘ಅನೇಕ ವರ್ಷಗಳ ಬರಗಾಲದ ನಂತರ ಈ ಬಾರಿ ರಾಜ್ಯದಲ್ಲಿ ಉತ್ತಮ ಮಳೆಯಾಗಿ ರೈತರಿಗೆ ಅಲ್ಪಸ್ವಲ್ಪ ಪ್ರಮಾಣದಲ್ಲಿ ಬೆಳೆ ಬಂದಿದೆ. ಆದರೆ ಇವತ್ತು ಮಾರುಕಟ್ಟೆಯಲ್ಲಿ ಭತ್ತ, ರಾಗಿ, ಜೋಳ, ಮೆಕ್ಕೆಜೋಳ, ತೊಗರಿ, ಕಡಲೆಕಾಯಿ ಸೇರಿದಂತೆ ಅನೇಕ ಬೆಳೆಗಳ ಬೆಲೆ ದಿಢೀರ್‌ ಕುಸಿತ ಕಂಡಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ಅವರು ಹೇಳಿದರು.

‘ಕೃಷಿ ಉತ್ಪನ್ನ ಉತ್ಪಾದನಾ ವೆಚ್ಚ ವರ್ಷದಿಂದ ವರ್ಷಕ್ಕೆ ಏರಿಕೆಯಾಗುತ್ತಿದೆ. ಬೆಲೆ ಮಾತ್ರ ಏರಿಕೆಯಾಗುತ್ತಿಲ್ಲ. ಹೀಗಾಗಿ ರೈತರು ಸಾಲದ ಸುಳಿಯಿಂದ ಹೊರಬರಲಾಗದ ಸ್ಥಿತಿ ನಿರ್ಮಾಣವಾಗುತ್ತಿದೆ. ಕಳೆದ ವರ್ಷ ಮೆಕ್ಕೆಜೋಳಕ್ಕೆ ಒಂದು ಕ್ವಿಂಟಾಲ್‌ಗೆ ₹1,600 ಬೆಲೆ ಸಿಕ್ಕಿತ್ತು. ಈ ಬಾರಿ ಅದು ₹1,000ಕ್ಕೆ ಇಳಿದಿದೆ. ಅದೇ ರೀತಿ ರಾಗಿ ₹ 3,500ರಿಂದ ₹ 1,600ಕ್ಕೆ ಕುಸಿದಿದೆ’ ಎಂದು ಹೇಳಿದರು.

‘ಸರ್ಕಾರ ಕೂಡಲೇ ಮಾರುಕಟ್ಟೆ ಮಧ್ಯಪ್ರವೇಶಿಸಿ ರೈತರ ಹಿತ ಕಾಯಲು ಮುಂದಾಗಬೇಕು. ತಕ್ಷಣವೇ ಕೃಷಿ ಉತ್ಪನ್ನಗಳ ಬೆಲೆ ಹೆಚ್ಚಳ ಮಾಡುವ ಜತೆಗೆ ಖರೀದಿ ಕೇಂದ್ರದ ಮೂಲಕ ಖರೀದಿಸಿ ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು. ಮಳೆ ಹೆಚ್ಚಾಗಿ ಮತ್ತು ಸೈನಿಕ ಹುಳುಗಳ ಬಾಧೆಯಿಂದ ಹಾನಿಗೊಂಡ ಬೆಳೆಗಳಿಗೆ ಬೆಳೆ ನಷ್ಟ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.

‘ಬಯಲು ಸೀಮೆಯ ಶಾಶ್ವತ ನೀರಾವರಿ ಯೋಜನೆಗೆ ಸಂಬಂಧಿಸಿದ ಎ.ಕೆ.ಬಜಾಜ್‌ ವರದಿ ತಕ್ಷಣ ಜಾರಿಗೊಳಿಸಬೇಕು. ಎತ್ತಿನಹೊಳೆ ಮತ್ತು ಸಂಸ್ಕರಿತ ನೀರಿನಿಂದ ಕೆರೆ ತುಂಬುವ ಏತ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಮುಗಿಸಬೇಕು. ಜಿಲ್ಲೆಯಲ್ಲಿ ದ್ರಾಕ್ಷಿ ಮಾರುಕಟ್ಟೆ, ದ್ರಾಕ್ಷಿ ಮತ್ತು ಗೋಡಂಬಿ ವೈನ್‌ ಪಾರ್ಕ್‌ ತೆರೆಯಬೇಕು’ ಎಂದು ಒತ್ತಾಯಿಸಿದರು.

‘ಕೆರೆ ಅಂಗಳದಲ್ಲಿರುವ ನೀಲಗಿರಿ ಮತ್ತು ಜಾಲಿ ಗಿಡಗಳನ್ನು ತೆರವುಗೊಳಿಸಲು ಕ್ರಮಕೈಗೊಳ್ಳಬೇಕು. ಕೆರೆಗಳ ಪೋಷಕ ಕಾಲುವೆಗಳ ಒತ್ತುವರಿ ತೆರವುಗೊಳಿಸಬೇಕು. ಕೆರೆ ಹೂಳು ತೆಗೆಸಲು ಮುಂದಾಗಬೇಕು’ ಎಂದು ಹೇಳಿದರು.

‘ಪ್ರತಿ ಗ್ರಾಮದಲ್ಲಿ ರೈತರಿಗೆ ಒಕ್ಕಣೆ ಕಣಗಳನ್ನು ನಿರ್ಮಿಸಬೇಕು. ಹುಲ್ಲು ಕತ್ತರಿಸುವ ಯಂತ್ರವನ್ನು ರಿಯಾಯಿತಿ ದರದಲ್ಲಿ ನೀಡಬೇಕು. ಬಾಕಿ ಇರುವ ಸಾಗುವಳಿ ಚೀಟಿ ನೀಡಲು ಕ್ರಮಕೈಗೊಳ್ಳಬೇಕು. ಜಿಲ್ಲಾ ಕೇಂದ್ರದಲ್ಲಿ ರೈತ ಸಭಾಂಗಣ ನಿರ್ಮಿಸಬೇಕು. ಎಪಿಎಂಸಿಗಳಲ್ಲಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಬೇಕು’ ಎಂದು ಆಗ್ರಹಿಸಿದರು.

ರೈತ ಸಂಘದ ಪದಾಧಿಕಾರಿಗಳಾದ ವಿ.ಕೆ.ಸತ್ಯನಾರಾಯಣ, ಮಂಡಿಕಲ್‌ ವೇಣು, ಎಂ. ರಾಮಾಂಜನಪ್ಪ, ಎಚ್‌.ಪಿ.ರಾಮನಾಥ್, ಅಮಿನ್ ಪಾಷಾ, ಲಕ್ಷ್ಮಣ ರೆಡ್ಡಿ ಪ್ರತಿಭಟನೆಯಲ್ಲಿದ್ದರು.

* * 

ರೈತರ ಮಕ್ಕಳು ನಗರಕ್ಕೆ ವಲಸೆ ಹೋಗುವುದನ್ನು ತಪ್ಪಿಸಲು ಗುಡಿ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡಬೇಕು. ರೇಷ್ಮೆ ಮತ್ತು ಜವಳಿ ಪಾರ್ಕ್‌ ಸ್ಥಾಪಿಸಬೇಕು.
ಭಕ್ತರಹಳ್ಳಿ ಬೈರೇಗೌಡ, ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ<

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT