ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಗಲಭೆಗಳಿಗೆ ಸಂಘ ಪರಿವಾರವೇ ಕಾರಣ’

Last Updated 12 ಡಿಸೆಂಬರ್ 2017, 19:30 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಕುಮಟಾ ಮತ್ತು ಹೊನ್ನಾವರಗಳಲ್ಲಿ ಇತ್ತೀಚೆಗೆ ನಡೆದಿರುವ ಗಲಭೆಗಳಿಗೆ ಸಂಘ ಪರಿವಾರವೇ ಕಾರಣ ಎಂದು ಆರೋಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮತಗಳನ್ನು ಸೆಳೆಯುವುದಕ್ಕಾಗಿ ಬಿಜೆಪಿ ಗಲಭೆಗಳನ್ನು ಸೃಷ್ಟಿಸುತ್ತಿದೆ ಎಂದು ದೂರಿದರು.

ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಹುಲ್ ಗಾಂಧಿ ಅವರನ್ನು ಮಂಗಳವಾರ ಸಂಜೆ ಭೇಟಿ ಮಾಡಿ ಅಭಿನಂದಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಇತ್ತೀಚೆಗೆ ನಡೆದಿರುವ ಬೆಳವಣಿಗೆಗಳಿಗೆ ಬಿಜೆಪಿಯೇ ನೇರ ಹೊಣೆ ಎಂದು ಕಿಡಿಕಾರಿದರು.

‘ಪರೇಶ್ ಮೇಸ್ತ ಸಾವಿನ ಪ್ರಕರಣಕ್ಕೆ ಸಂಬಂಧಿಸಿದ ಮರಣೋತ್ತರ ಪರೀಕ್ಷೆಯ ವರದಿ ಬರುವುದಕ್ಕೆ ಮೊದಲೇ ಆತನ ಕೊಲೆಗೆ ಮುಸ್ಲಿಮರೇ ಕಾರಣ ಎಂದು ಬಿಜೆಪಿ ಮುಖಂಡರು ಹೇಳುತ್ತಿರುವುದು ಅವರ ಉದ್ದೇಶವನ್ನು ಸ್ಪಷ್ಟಪಡಿಸಿದೆ’ ಎಂದು ಅವರು ಹೇಳಿದರು.

ಗುಜರಾತ್‌ ವಿಧಾನಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಗೆಲುವು ದೊರೆಯಲಿದೆ. ಆದರೆ, ಅಲ್ಲಿನ ಫಲಿತಾಂಶವು ರಾಜ್ಯ ವಿಧಾನಸಭೆ ಚುನಾವಣೆಯ ಮೇಲೆ ಯಾವುದೇ ರೀತಿಯ ಪರಿಣಾಮ ಉಂಟು ಮಾಡುವುದಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ರಾಹುಲ್‌ಗೆ ಆಹ್ವಾನ: ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ರಾಹುಲ್‌ ಗಾಂಧಿ ಅವರನ್ನು ರಾಜ್ಯಕ್ಕೆ ಆಹ್ವಾನಿಸಲಾಗಿದೆ. ಗುಜರಾತ್‌ ಚುನಾವಣೆಯ ಫಲಿತಾಂಶ ಪ್ರಕಟವಾದ ನಂತರ ಅವರ ಪ್ರವಾಸ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಕಾಂಗ್ರೆಸ್‌ ಬಗ್ಗೆ ಆಸಕ್ತಿ ತಾಳಿರುವ ಜೆಡಿಎಸ್‌ ಶಾಸಕರ ಪಕ್ಷಸೇರ್ಪಡೆ ಕುರಿತು ವರಿಷ್ಠರ ಒಪ್ಪಿಗೆ ದೊರೆತಿದ್ದು, ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಕಾರ್ಯಕ್ರಮ ಏರ್ಪಡಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

ಸಚಿವರಾದ ಎಚ್‌.ಸಿ. ಮಹದೇವಪ್ಪ, ಕೆ.ಜೆ. ಜಾರ್ಜ್‌, ಜೆಡಿಎಸ್‌ ಶಾಸಕರಾದ ಚೆಲುವರಾಯ ಸ್ವಾಮಿ, ಜಮೀರ್‌ ಅಹಮದ್‌ ಈ ಸಂದರ್ಭ ಹಾಜರಿದ್ದರು.

‘ಗಲಭೆ ಹಿಂದೆ ಬಿಜೆಪಿ ನಾಯಕರು’
ಬೆಂಗಳೂರು:
ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿಯ ಬೆರಳೆಣಿಕೆಯಷ್ಟು ನಾಯಕರು ವಾಮಮಾರ್ಗ ಅನುಸರಿಸುತ್ತಿದ್ದಾರೆ ಎಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ದೂರಿದರು.

ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಗಲಭೆಯ ಹಿಂದೆ ಐದಾರು ಬಿಜೆಪಿ ಮುಖಂಡರಿದ್ದಾರೆ. ಬೇರೆ ಜಿಲ್ಲೆಗಳಿಂದ ಬಂದವರು ಗಲಭೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಆರೋಪಿಸಿದರು.

‘ಶೋಭಾ ಕರಂದ್ಲಾಜೆ ಸೇರಿ ಬಿಜೆಪಿ ನಾಯಕರು ಜನರ ದಾರಿ ತಪ್ಪಿಸುತ್ತಿದ್ದಾರೆ. ಆ ಕಾರಣಕ್ಕೆ ಪೊಲೀಸ್ ಅಧಿಕಾರಿಗಳು ವಿಧಿ ವಿಜ್ಞಾನ ವರದಿ ತರಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಯ ಸಂಪೂರ್ಣ ವರದಿ ಬರಲು ಇನ್ನೂ ಕನಿಷ್ಠ 15 ದಿನ ಬೇಕು. ಬಳಿಕ ಸಾವಿಗೆ ನಿಖರ ಕಾರಣ ಗೊತ್ತಾಗಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT