ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒವೈಸಿ ಓಲೈಕೆಗೆ ಕಾಂಗ್ರೆಸ್‌ ಕಾರ್ಯತಂತ್ರ

Last Updated 13 ಡಿಸೆಂಬರ್ 2017, 20:24 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಂ ಮತಗಳ ವಿಭಜನೆ ತಪ್ಪಿಸಲು ಹೈದರಾಬಾದ್‌ ಸಂಸದ ಅಸಾದುದ್ದೀನ್ ಒವೈಸಿ ನೇತೃತ್ವದ ಅಖಿಲ ಭಾರತ ಮಜ್ಲೀಸ್‌ ಎ ಇತ್ತೆಹಾದುಲ್‌ ಮುಸ್ಲಿಮೀನ್‌ (ಎಐಎಂಐಎಂ)  ಜತೆ ಹೊಂದಾಣಿಕೆ ಅಥವಾ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್‌ ಚಿಂತನೆ ನಡೆಸಿದೆ.

ವಿಧಾನಸಭಾ ಚುನಾವಣೆಯಲ್ಲಿ ಮುಸ್ಲಿಂ ಮತಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಎಐಎಂಐಎಂ ಚಿಂತನೆ ನಡೆಸಿರುವುದು ಕಾಂಗ್ರೆಸ್‌ನಲ್ಲಿ ತಲ್ಲಣ ಉಂಟು ಮಾಡಿದೆ.

ಎಐಎಂಐಎಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದರೆ ಕಾಂಗ್ರೆಸ್‌ ಮತ ಬ್ಯಾಂಕ್‌ ಒಡೆದು ಹೋಗುತ್ತದೆ ಎಂಬ ಆತಂಕ ಕಾಂಗ್ರೆಸ್ ನಾಯಕರದು. ಅದಕ್ಕೆ ಉಳಿದಿರುವ ಮಾರ್ಗವೆಂದರೆ ಒವೈಸಿ ಜೊತೆ ಮೈತ್ರಿ ಅಥವಾ ಹೊಂದಾಣಿಕೆ ಎಂಬ ತೀರ್ಮಾನಕ್ಕೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸಂಬಂಧ ಒವೈಸಿ ಜತೆ ಮಾತುಕತೆ ನಡೆಸುವ ಜವಾಬ್ದಾರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜೆಡಿಎಸ್‌ ತೊರೆದು ಕಾಂಗ್ರೆಸ್‌ನತ್ತ ಮುಖ ಮಾಡಿರುವ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ  ವಹಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಜಮೀರ್‌ ತಮ್ಮನ್ನು ಸಂಪರ್ಕಿಸಲು ಯತ್ನಿಸಿರುವುದನ್ನು ಒವೈಸಿ ‘ಪ್ರಜಾವಾಣಿ’ಗೆ ಖಚಿತಪಡಿಸಿದ್ದಾರೆ. ಆದರೆ, ರಾಜ್ಯದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುವ ಅಥವಾ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಯಾವುದೇ ಅಭಿಪ್ರಾಯ ತಿಳಿಸಲು ಅವರು ನಿರಾಕರಿಸಿದರು.

‘ನನ್ನನ್ನು ಭೇಟಿ ಮಾಡಲು ಬಯಸುವುದಾಗಿ ಆಪ್ತರ ಮೂಲಕ ಜಮೀರ್‌ ಸಂದೇಶ ಕಳುಹಿಸಿದ್ದಾರೆ’ ಎಂದು ಒವೈಸಿ ತಿಳಿಸಿದರು.

‘ಕರ್ನಾಟಕದಲ್ಲಿ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸಬೇಕು ಎಂಬ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಉಸ್ಮಾನ್‌ ಘನಿ ಚುನಾವಣಾ ಕಾರ್ಯತಂತ್ರ ರೂಪಿಸುತ್ತಿದ್ದಾರೆ. ಸ್ಥಳೀಯ ನಾಯಕರ ಜೊತೆ ಚರ್ಚಿಸಿದ ಬಳಿಕ ಅಂತಿಮವಾಗಿ ನಿರ್ಧರಿಸಲಾಗುವುದು’ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

‘ಜಮೀರ್‌ ನನ್ನನ್ನು ಟೀಕಿಸುತ್ತಿದ್ದರು. ಅವರು ನಿಂದಿಸುತ್ತಿದ್ದ ವಿಡಿಯೊ ದೃಶ್ಯಾವಳಿಗಳನ್ನೂ ನಾನು ನೋಡಿದ್ದೇನೆ. ಈಗ ಅವರು ಕಾಂಗ್ರೆಸ್‌ನತ್ತ ಮುಖ ಮಾಡಿದ್ದಾರೆ. ಹೀಗಾಗಿ ಅವರಿಗೆ ನಾನು ಬೇಕಾಗಿದೆ’ ಎಂದಿರುವ ಒವೈಸಿ, ‘ಜಮೀರ್‌ ನನ್ನನ್ನು ಭೇಟಿ ಮಾಡಲು ಬಯಸಿರುವುದಾಗಿ ಸಂದೇಶ ತೆಗೆದುಕೊಂಡು ಬಂದವರಿಗೆ, ನನ್ನಿಂದ ಏನು ಆಗಬೇಕಾಗಿದೆ ಎಂಬುದನ್ನು ಮೊದಲು ತಿಳಿಸಲಿ ಎಂದು ಹೇಳಿ ಕಳುಹಿಸಿದ್ದೇನೆ’ ಎಂದರು.

‘ಕರ್ನಾಟಕದಲ್ಲಿ ಸಾರ್ವಜನಿಕ ಸಭೆಗಳಲ್ಲಿ ಮಾತನಾಡಲು ನನಗೆ ಅವಕಾಶ ನೀಡಲಿಲ್ಲ’ ಎಂದೂ ಅವರು ಕಾಂಗ್ರೆಸ್‌ ಸರ್ಕಾರವನ್ನು ಟೀಕಿಸಿದರು.

ಈ ಬಗ್ಗೆ ಜಮೀರ್‌ ಅವರಿಂದ ಪ್ರತಿಕ್ರಿಯೆ ಪಡೆಯಲು ’ಪ್ರಜಾವಾಣಿ’ ಯತ್ನಿಸಿದರೂ, ಅವರು ಸಂಪರ್ಕಕ್ಕೆ ಸಿಗಲಿಲ್ಲ.

2015 ರಲ್ಲಿ ನಡೆದ ಬಿಬಿಎಂಪಿ ಚುನಾವಣೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮುಸ್ಲಿಂ ಪ್ರಾಬಲ್ಯದ 29 ವಾರ್ಡ್‌ಗಳಲ್ಲಿ ಎಐಎಂಐಎಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಇತ್ತೀಚೆಗೆ ನಡೆದ ಉತ್ತರ ಪ್ರದೇಶದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ 78 ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಆ ಪಕ್ಷದ 29ರಲ್ಲಿ ಗೆಲುವು ಪಡೆದಿದೆ.

ಮುಸ್ಲಿಂ ಮತಗಳನ್ನು ಒಡೆಯುವ ಸಾಮರ್ಥ್ಯ ಹೊಂದಿರುವ ಎಸ್‌ಡಿಪಿಐನಂಥ ಸಣ್ಣ ಸಣ್ಣ ಪಕ್ಷ ಚುನಾವಣೆಯಲ್ಲಿ ಮುಳುವಾಗಬಹುದು ಎನ್ನುವುದು ಕಾಂಗ್ರೆಸ್‌ ನಾಯಕರ ಆತಂಕ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ 72 ಸ್ಥಾನಗಳನ್ನು ಗೆದ್ದಿರುವ ಎಸ್‌ಡಿಪಿಐ, ಬಿಬಿಎಂಪಿ ಚುನಾವಣೆಯಲ್ಲಿ ಶೇ 15ರಷ್ಟು ಮತಗಳನ್ನು ಪಡೆದಿದ್ದು, ಸಿದ್ದಾಪುರ ವಾರ್ಡ್‌ನಲ್ಲಿ ಗೆಲುವು ಸಾಧಿಸಿತ್ತು.

ಕೆಪಿಸಿಸಿಯಿಂದ 21ರಿಂದ ಪ್ರಚಾರ ಯಾತ್ರೆ: 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಗಳು ಸೋಲು ಕಂಡ ಕ್ಷೇತ್ರಗಳಲ್ಲಿ ಇದೇ 21ರಿಂದ ಪ್ರಚಾರ ಯಾತ್ರೆ ಹಮ್ಮಿಕೊಳ್ಳಲು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ನಿರ್ಧರಿಸಿದೆ.

21ರಂದು ಮುಳುಬಾಗಿಲು ಮತ್ತು ಕೆಜಿಎಫ್‌, 22ರಂದು ಕೋಲಾರ, ಮಾಲೂರು, 29ರಂದು ಚಿಂತಾಮಣಿ, ಶಿಡ್ಲಘಟ್ಟ, 30ರಂದು ದೇವನಹಳ್ಳಿ ವಿಧಾನಸಭಾ ಕ್ಷೇತ್ರಗಳಿಗೆ ಪ್ರವಾಸ ಮಾಡಲು ಕಾಂಗ್ರೆಸ್‌ ನಾಯಕರು ತೀರ್ಮಾನಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಯಾತ್ರೆಯ ನೇತೃತ್ವ ವಹಿಸಲಿದ್ದು, ಲೋಕಸಭೆಯಲ್ಲಿ ಕಾಂಗ್ರೆಸ್‌ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸದರಾದ ವೀರಪ್ಪ ಮೊಯಿಲಿ, ಕೆ.ಎಚ್‌. ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್‌ ಗುಂಡೂರಾವ್‌, ಎಸ್‌.ಆರ್‌. ಪಾಟೀಲ ಭಾಗವಹಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಯಾತ್ರೆಯ ಪೂರ್ವಭಾವಿ ಸಿದ್ಧತೆಗೆ ಗುರುವಾರ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಪ್ರಮುಖರ ಸಭೆ ನಡೆಯಲಿದೆ ಎಂದೂ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT