ಸೋಮವಾರ, ಮಾರ್ಚ್ 1, 2021
31 °C

ಮಣಿಪಾಲ ಆಸ್ಪತ್ರೆ ದುರ್ಬಳಕೆ: ಈಶ್ವರಪ್ಪ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಣಿಪಾಲ ಆಸ್ಪತ್ರೆ ದುರ್ಬಳಕೆ: ಈಶ್ವರಪ್ಪ ಆರೋಪ

ಶಿವಮೊಗ್ಗ: ಹೊನ್ನಾವರದ ಪರೇಶ್ ಮೇಸ್ತ ದೇಹದ ಮೇಲೆ ಹಲ್ಲೆಯ ಕುರುಹುಗಳಿಲ್ಲ ಎಂದು ಮರಣೋತ್ತರ ಪರೀಕ್ಷೆಯ ವರದಿ ಹೇಳಿದೆ. ಆ ಮೂಲಕ ಮಣಿಪಾಲ್‌ ಆಸ್ಪತ್ರೆಯನ್ನೂ ರಾಜ್ಯ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.

‘ಹೊನ್ನಾವರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಿ ಕಾರ್ಯಕ್ರಮ ನಿಮಿತ್ತ ಭೇಟಿ ನೀಡಿದ ದಿನವೇ ಪರೇಶ ಮೇಸ್ತ ಅವರ ಕೊಲೆ ನಡೆದಿತ್ತು. ಆದರೆ, ಪ್ರಕರಣ ಮುಚ್ಚಿಟ್ಟು ಮುಖ್ಯಮಂತ್ರಿ ಕಾರ್ಯಕ್ರಮ ಮುಗಿಸಿದ್ದರು. ಹೊನ್ನಾವರ ಬಿಟ್ಟು ಹೋದ ನಂತರ ಈ ವಿಷಯ ಬಹಿರಂಗಗೊಳಿಸಿದ್ದರು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಮೇಲೆ ಪ್ರಮಾಣ ಮಾಡಲಿ’ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಸವಾಲು ಹಾಕಿದರು.

ಕೆಲವರಿಗೆ ಹಿಂದೂಗಳ ವಿರುದ್ಧ ಮಾತನಾಡುವುದು ಫ್ಯಾಷನ್ ಆಗಿದೆ. ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಸಿದ್ದರಾಮಯ್ಯ ಅವರ ಜತೆ ಸೇರಿ ಸುಳ್ಳುಗಳ ಸರದಾರರಾಗಿದ್ದಾರೆ ಎಂದು ಕುಟುಕಿದರು.

ಐಜಿಪಿ ಹೇಮಂತ್ ನಿಂಬಾಳ್ಕರ್ ಅವರ ಪತ್ನಿಗೆ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಪಡೆಯುವ ಪ್ರಯತ್ನ ನಡೆದಿದೆ. ಹಾಗಾಗಿ ಅವರು ಸರ್ಕಾರದ ಏಜೆಂಟರಂತೆ ವರ್ತಿಸುತ್ತಿದ್ದಾರೆ ಎಂದು ದೂರಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಸುಳ್ಳಿನ ಸರದಾರ. ಹಿಂದೂ ಯುವಕರ ಶವದ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ಅದನ್ನು ಬಿಜೆಪಿ ಮೇಲೆ ಹೊರಿಸುತ್ತಿದ್ದಾರೆ’ ಎಂದು ಆರೋಪಿಸಿದರು.

ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ನಂತರ ಹಲವು ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ. ಆರೋಪಿಗಳನ್ನು ಬಂಧಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪರೇಶ್ ಹತ್ಯೆ ಖಂಡಿಸಿ ಡಿ.18ರಂದು ಹೊನ್ನಾವರದಲ್ಲಿ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅಷ್ಟರ ಒಳಗೆ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ಬಂಧನ, ಲಾಠಿಚಾರ್ಜ್‌ಗೂ ಬಗ್ಗದೇ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.