7

ಆರೋಪಿಗಳ ಬಂಧನಕ್ಕೆ ಎಬಿವಿಪಿ–ಎಸ್‌ಡಿಪಿಐ ಆಗ್ರಹ

Published:
Updated:

ಮಂಗಳೂರು: ವಿಜಯಪುರದಲ್ಲಿ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ ಎಬಿವಿಪಿ ಕಾರ್ಯಕರ್ತರು ನಗರದ ಬಂಟ್ಸ್‌ ಹಾಸ್ಟೆಲ್‌ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಘಟನೆಯ ಕುರಿತು ಪೊಲೀಸರಿಗೆ ದೂರು ನೀಡಲು ತೆರಳಿದಾಗ, ಅಲ್ಲಿರುವ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಳ್ಳಲು ನಿರಾಕರಿಸಿದ್ದಾರೆ. ನಂತರ ಬಾಲಕಿಯ ಪೋಷಕರು ಮತ್ತು ಸಂಬಂಧಿಕರು ಮೃತ ಬಾಲಕಿಯ ಶವವನ್ನು ಇಟ್ಟು ಅಹೋರಾತ್ರಿ ಸ್ಥಳದಲ್ಲಿಯೇ ಧರಣಿ ನಡೆಸಿದರೂ, ಯಾವೊಬ್ಬ ಅಧಿಕಾರಿಯೂ ಪೋಷಕರ ದೂರನ್ನು ದಾಖಲಿಸಿಕೊಂಡಿಲ್ಲ ಎಂದು ದೂರಿದರು.

ಮುಖ್ಯಮಂತ್ರಿ ಪ್ರವಾಸದ ನೆಪವೊಡ್ಡಿ ಇಡೀ ಪ್ರಕರಣವನ್ನು ಮುಚ್ಚಿ ಹಾಕಲು ವಿಜಯಪುರ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರಯತ್ನ ನಡೆಸುತ್ತಿದ್ದಾರೆ. ದೂರನ್ನು ದಾಖಲಿಸಿಕೊಳ್ಳದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗೆ ಒತ್ತಾಯಿಸಿದರು.

ಎಸ್‌ಡಿಪಿಐ: ಬಾಲಕಿಯ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ, ಗುರುವಾರ ಎಸ್‌ಡಿಪಿಐ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿರುವುದು ಹೇಯ ಕೃತ್ಯ. ದಲಿತ ಕುಟುಂಬಕ್ಕೆ ಸೇರಿದ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಈ ಘಟನೆಯಿಂದ ರಾಜ್ಯ ತಲೆ ತಗ್ಗಿಸುವಂತಾಗಿದೆ ಎಂದು ಹೇಳಿದರು.

ಕೂಡಲೇ ಎಲ್ಲ ಆರೋಪಿಗಳನ್ನು ಬಂಧಿಸಬೇಕು. ಆರೋಪಿಗಳು ಎಷ್ಟೇ ಪ್ರಭಾವಿತರಾಗಿದ್ದರೂ, ಅವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ದಲಿತ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry