5
X

'ಪ್ರಜಾವಾಣಿ'ಯ ಜಾಲತಾಣವನ್ನು ಹೆಚ್ಚು ಓದುಗ ಸ್ನೇಹಿಯಾಗಿಸುವ ಉದ್ದೇಶದಿಂದ ಹೊಸ ವಿನ್ಯಾಸವನ್ನು ರೂಪಿಸಲಾಗಿದೆ.
ಈ ವಿನ್ಯಾಸದ ಕುರಿತ ನಿಮ್ಮ ಅಭಿಪ್ರಾಯಗಳನ್ನು ಇಲ್ಲಿರುವ ಲಿಂಕ್ ಕ್ಲಿಕ್ಕಿಸುವ ಮೂಲಕ ನಮಗೆ ತಿಳಿಸಬಹುದು

webfeedback@prajavani.co.in

ಕಾಮಾಂಧರನ್ನು ಗಲ್ಲಿಗೇರಿಸಿ

Published:
Updated:
ಕಾಮಾಂಧರನ್ನು ಗಲ್ಲಿಗೇರಿಸಿ

ಚಿಕ್ಕಬಳ್ಳಾಪುರ: ವಿಜಯಪುರದಲ್ಲಿ ದಲಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ, ಹತ್ಯೆಗೈದ ಪ್ರಕರಣ ಖಂಡಿಸಿ ನಗರದಲ್ಲಿ ಗುರುವಾರ ವಿವಿಧ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ದಲಿತ ಸಂಘರ್ಷ ಸಮಿತಿ, ಕರ್ನಾಟಕ ರಕ್ಷಣಾ ವೇದಿಕೆ, ಕರ್ನಾಟಕ ಅಂಗವಿಕಲರ ಸಂಘದ ಪದಾಧಿಕಾರಿಗಳು ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ತಾಲ್ಲೂಕು ಕಚೇರಿ ವರೆಗೆ ಮೆರವಣಿಗೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಸಿ.ರಾಜಾಕಾಂತ್, ‘ಈ ಹೇಯ ಕೃತ್ಯ ಮಾನವೀಯ ಮೌಲ್ಯಗಳನ್ನು ಹೊಂದಿರುವ ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ‘ಬೇಟಿ ಬಚಾವೋ, ಬೇಟಿ ಪಡಾವೋ’ (ಹೆಣ್ಣು ಮಗುವನ್ನು ಉಳಿಸಿ, ಹೆಣ್ಣು ಮಗುವನ್ನು ಓದಿಸಿ) ಎಂದು ಘೋಷಣೆ ಮಾಡುವವರೇ ಅದಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ’ ಎಂದು ಆರೋಪಿಸಿದರು.

‘ಆರ್‌ಎಸ್‌ಎಸ್‌, ವಿಶ್ವ ಹಿಂದೂ ಪರಿಷತ್, ಬಿಜೆಪಿ ಅವರು ಯಾರಾದರೂ ಸತ್ತರೆ ಇಡೀ ದೇಶ ಅವರ ಪರವಾಗಿ ಮಾತನಾಡುತ್ತದೆ. ಆದರೆ ಏನೂ ದಿಕ್ಕಿಲ್ಲದ ಬಡವರ ಅತ್ಯಾಚಾರ, ಕೊಲೆ, ಹತ್ಯೆಯಾದಾಗ ಅವರ ಪರವಾಗಿ ಬಿಜೆಪಿ, ಆರ್‌ಎಸ್‌ಎಸ್‌ ಅವರು ಏಕೆ ಮಾತನಾಡುವುದಿಲ್ಲ? ಮುಖ್ಯಮಂತ್ರಿ ವಿದ್ಯಾರ್ಥಿನಿ ಕುಟುಂಬಕ್ಕೆ ಸಾಂತ್ವನ ಹೇಳಿದರೆ ಸಾಲದು, ರಾಜ್ಯದ ಮೂಲೆ ಮೂಲೆಯಲ್ಲಿರುವ ದಿಕ್ಕಿಲ್ಲದ ಸಮುದಾಯಗಳಿಗೆ ರಕ್ಷಣೆ ಸಿಗಬೇಕು’ ಎಂದು ಆಗ್ರಹಿಸಿದರು.

‘ವಿಚಾರವಾದಿಗಳಾದ ಎಂ.ಎಂ.ಕಲಬುರ್ಗಿ, ಗೌರಿ ಲಂಕೇಶ್‌ ಅವರ ಹಂತಕರನ್ನು ಈವರೆಗೆ ಪತ್ತೆ ಮಾಡಿಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟು ಹೋಗಿದೆ. ಅದು ಪಾರದರ್ಶಕವಾಗಿದ್ದರೆ ಇಂತಹ ಘಟನೆಗಳು ನಡೆಯುತ್ತಿರಲಿಲ್ಲ. ದೊಡ್ಡ ನಗರಗಳಲ್ಲಿಯೇ ಚಿಂತಕರನ್ನು ಗುಂಡಿಕ್ಕಿ ಕೊಂದವರನ್ನು ಪತ್ತೆ ಮಾಡದ ಪೊಲೀಸರಿಂದ ಅಮಾಯಕ ಕುಟುಂಬಕ್ಕೆ ನ್ಯಾಯ ಕೊಡಿಸಲು ಸಾಧ್ಯವೆ’ ಎಂದು ಪ್ರಶ್ನಿಸಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಸಂಚಾಲಕ ಬಿ.ವಿ.ಆನಂದ್ ಮಾತನಾಡಿ, ‘ವಿಜಯಪುರದ ಪ್ರಕರಣ ರಾಜ್ಯದ ಕಾನೂನು ಸುವ್ಯವಸ್ಥೆಯ ಅಣಕದಂತಿದೆ. ವಿದ್ಯಾರ್ಥಿಗಳಿಗೆ ರಕ್ಷಣೆ ನೀಡಲು ಸಾಧ್ಯವಾಗದ ಸರ್ಕಾರ ಇನ್ನು ಯಾರಿಗೆ ರಕ್ಷಣೆ ನೀಡುತ್ತದೆ? ದೇಶವನ್ನೇ ಬೆಚ್ಚಿ ಬೀಳಿಸಿದ್ದ ನಿರ್ಭಯಾ ಪ್ರಕರಣ ಮರೆಯುವ ಮುನ್ನವೇ ನಡೆದ ಈ ಪೈಶಾಚಿಕ ಕೃತ್ಯವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿಲ್ಲ’ ಎಂದು ಆರೋಪಿಸಿದರು.

‘ವೈದ್ಯಕೀಯ ವರದಿ ಬರುವ ಮುನ್ನವೇ ಅತ್ಯಾಚಾರ ನಡೆದಿದೆ ಎಂದು ಹೇಳಲಾಗದು ಎಂದು ಹೇಳಿಕೆ ನೀಡಿದ್ದ ಗೃಹ ಸಚಿವರು ಇದೀಗ ಉತ್ತರಿಸಬೇಕಿದೆ. ರಾಜ್ಯದಲ್ಲಿ ಯಾರಿಗೂ ರಕ್ಷಣೆ ಇಲ್ಲದಂತಾಗಿದೆ. ವಿದ್ಯಾರ್ಥಿನಿ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಜತೆಗೆ ಹೀನಕೃತ್ಯ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.

ಸಾಮಾಜಿಕ ಹೋರಾಟಗಾರ್ತಿ ಉಷಾ ಕಿರಣ್ ಮಾತನಾಡಿ, ‘ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ನಡೆಸಿದ ಎಲ್ಲಾ ದುರುಳರನ್ನು ಬಂಧಿಸಿ ಜೈಲಿಗಟ್ಟಬೇಕು. ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವ ಮೂಲಕ ರಾಜ್ಯದಲ್ಲಿ ಇಂತಹ ಘಟನೆ ಮರುಕಳುಹಿಸದಂತೆ ನೋಡಿಕೊಳ್ಳುವುದು ಸರ್ಕಾರ ಜವಾಬ್ದಾರಿ’ ಎಂದು ಹೇಳಿದರು. ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಅಗಲಗುರ್ಕಿ ಚಲಪತಿ, ಮುಖಂಡ ಪುರುಷೋತ್ತಮ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆರೋಪಿಗಳ ಬಂಧನಕ್ಕೆ ಆಗ್ರಹ

ಚಿಕ್ಕಬಳ್ಳಾಪುರ: ವಿಜಯಪುರದಲ್ಲಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ವಿದ್ಯಾರ್ಥಿನಿಗೆ ಗುರುವಾರ ನಗರದ ಸರ್‌.ಎಂ.ವಿಶ್ವೇಶ್ವರಯ್ಯ ಪದವಿ ಪೂರ್ವ ಕಾಲೇಜಿನಲ್ಲಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಯುಐ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಮೌನಾಚರಣೆ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎನ್‌ಎಸ್‌ಯುಐ ರಾಜ್ಯ ಸಂಚಾಲಕ ಕುಂದಲಗುರ್ಕಿ ಮುನಿಂದ್ರ, ‘ವಿಜಯಪುರದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಪ್ರಕರಣ ದೇಶವೇ ಬೆಚ್ಚಿ ಬೀಳಿಸುವಂತದ್ದು. ಹೆಣ್ಣು ಮಕ್ಕಳಿಗೆ ರಕ್ಷಣೆ ಕೊಡಬೇಕಾದ ಸರ್ಕಾರಗಳು ಇದನ್ನು ಗಂಭೀರವಾಗಿ ಚಿಂತಿಸುತ್ತಿಲ್ಲ. ಭಯದ ವಾತಾವರಣದಲ್ಲಿ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

‘ರಾಜ್ಯದಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯಗಳು, ಅತ್ಯಾಚಾರಗಳು, ಕೋಮು ಗಲಭೆಗಳು ಹೆಚ್ಚುತ್ತಿರುವುದು ಜನಸಾಮಾನ್ಯರಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದೆ. ಕೂಡಲೇ ರಾಜ್ಯ ಸರ್ಕಾರ ಎಚ್ಚೆತ್ತು ವಿಜಯಪುರದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳನ್ನು ಬಂಧಿಸಿ, ಕಠಿಣ ಶಿಕ್ಷೆ ವಿಧಿಸಬೇಕು. ಜತೆಗೆ ಬಾಲಕಿಯ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಬೇಕು’ ಎಂದು ಒತ್ತಾಯಿಸಿದರು. ಕಾಲೇಜಿನ ಪ್ರಾಂಶುಪಾಲ ರವಿಕುಮಾರ್‌, ಮುಖಂಡರಾದ ಈಶ್ವರಪ್ಪ, ಮಂಜುನಾಥ್‌, ಮಂಜುಳಾ, ನವ್ಯ, ನಾಗವೇಣಿ, ವೆಂಕಟೇಶ್‌ ಇದ್ದರು.

ಗೌರಿಬಿದನೂರು: ವಿಜಯಪುರದಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಘಟನೆಯನ್ನು ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಗುರುವಾರ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎಬಿವಿಪಿ ಜಿಲ್ಲಾ ಘಟಕದ ಸಂಚಾಲಕ ಚರಣ್ ರೆಡ್ಡಿ, ‘ರಾಜ್ಯದಲ್ಲಿ ನಿರಂತರವಾಗಿ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿದ್ದರೂ ಸರ್ಕಾರ ಕಠಿಣ ಕ್ರಮ ಕೈಗೊಂಡು ಅವುಗಳನ್ನು ತಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ. ವಿಜಯಪುರದ ಘಟನೆ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರ. ಈ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ, ಆರೋಪಿಗಳಿಗೆ ಶಿಕ್ಷೆಯಾಗುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ವಿದ್ಯಾರ್ಥಿನಿಯನ್ನು ಹತ್ಯೆ ಮಾಡಿದ ಆರೋಪಿಗಳು ಎಷ್ಟೇ ಪ್ರಬಲರಾದರೂ ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೆ ಆರೋಪಿಗಳನ್ನು ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕು. ಮೃತ ಬಾಲಕಿಯ ಪೋಷಕರು ಹಾಗೂ ಸಾರ್ವಜನಿಕರು 12 ಗಂಟೆ ನಿರಂತರ ಹೋರಾಟ ನಡೆಸಿದ ಮೇಲೆ ಪೋಲಿಸರು ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಈ ಬೆಳವಣಿಗೆ ನೋಡಿದರೆ ಈ ಪ್ರಕರಣವನ್ನು ಮುಚ್ಚುಹಾಕುವ ಪ್ರಯತ್ನ ಸ್ಪಷ್ಟವಾಗಿ ಕಂಡುಬರುತ್ತಿದೆ. ಸಮಗ್ರ ತನಿಖೆ ನಡೆಯಬೇಕು’ ಎಂದು ಒತ್ತಾಯಿಸಿದರು.

ಉಪ ತಹಶೀಲ್ದಾರ್ ಅರುಂಧತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ನರೇಂದ್ರ, ಸುರೇಶ್, ಮಾರುತಿ, ಮಧು, ಸುಂತ್, ವೆಂಕಟೇಶ್ ಭಾಗವಹಿಸಿದ್ದರು.

* * 

ವಿದ್ಯಾರ್ಥಿನಿಯ ಹತ್ಯೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಕೃತ್ಯದಲ್ಲಿ ಭಾಗಿಯಾದವರನ್ನು ಪತ್ತೆ ಮಾಡಿ ಗಲ್ಲು ಶಿಕ್ಷೆ ವಿಧಿಸಬೇಕು.

ಕೆ.ಸಿ.ರಾಜಾಕಾಂತ್, ಜಿಲ್ಲಾ ಪಂಚಾಯಿತಿ ಸದಸ್ಯ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry