7

ರಾಜ್ಯ ಸರ್ಕಾರದ ನಿರ್ಲಕ್ಷ್ಯ; ದೌರ್ಜನ್ಯ ಹೆಚ್ಚಳ

Published:
Updated:

ಆಲೂರು: ರಾಜ್ಯದಾದ್ಯಂತ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ಪ್ರತಿ ದಿನ ಹೆಚ್ಚಾಗುತ್ತಿವೆ. ಇದಕ್ಕೆ ರಾಜ್ಯ ಸರ್ಕಾರ ಹಾಗೂ ಪೊಲೀಸ್‌ ಇಲಾಖೆ ಅದಕ್ಷತೆಯೇ ಕಾರಣ ಎಂದು ಬಿಜೆಪಿ ಹಾಗೂ ದಲಿತ ಸಂಘರ್ಷ ಸಮಿತಿ ಮುಖಂಡರು ಆರೋಪಿಸಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ ನಡೆಸಿ ಜಾಥಾ ನಡೆಸಿದ ಬಿಜೆಪಿ ಕಾರ್ಯಕರ್ತರು, ತಾಲ್ಲೂಕು ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು, ಆರೋಪಿಗಳನ್ನು ಶೀಘ್ರವೇ ಬಂಧಿಸುವಂತೆ ತಹಶೀಲ್ದಾರ್ ಶ್ರೀಧರ್ ಮೂರ್ತಿ ಅವರಿಗೆ ಮನವಿ ಸಲ್ಲಿಸಿದರು.

ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ವಿಜಯಪುರ ಜಿಲ್ಲೆಯಲ್ಲಿ ದಲಿತ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಅವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಲೈಂಗಿಕ ಕಿರುಕುಳ ಹಾಗೂ ಅತ್ಯಾಚಾರದಲ್ಲಿ ಮರಣ ಹೊಂದಿದ ಸಂತ್ರಸ್ತರ ಕುಟುಂಬಗಳಿಗೆ ಕನಿಷ್ಠ ₹ 1 ಕೋಟಿ ಪರಿಹಾರ ಹಾಗೂ ಕುಟುಂಬದ ಒಬ್ಬರಿಗೆ ಸರ್ಕಾರಿ ಉದ್ಯೋಗವನ್ನು ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಪ್ರಜಾಪ್ರಭುತ್ವ ರಾಷ್ಟ್ರದಲ್ಲಿಯೇ ದಲಿತರಿಗೆ, ಹಿಂದುಳಿದವರಿಗೆ, ಮಹಿಳೆಯರಿಗೆ ರಕ್ಷಣೆ ಸರಿಯಾಗಿ ಸಿಗುತ್ತಿಲ್ಲ. ಇದರಿಂದ ಭಯಭೀತರಾಗಿರುವ ಹಳ್ಳಿಗಾಡಿನ ವಿದ್ಯಾರ್ಥಿನಿಯರು ಶಾಲಾ ಕಾಲೇಜುಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ. ಮೂರು ದಿನಗಳೇ ಕಳೆದಿದ್ದರೂ ಆರೋಪಿಗಳನ್ನು ಬಂಧಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ದೂರಿದರು.

ಬಿಜೆಪಿ ಮುಖಂಡರಾದ ಮುನಿಕೃಷ್ಣ, ಮುರಳಿ ಮೋಹನ್, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಲೊಕೇಶ್, ಬಾಲಲೋಚನಾ, ಶಶಿಧರ್, ಹೇಮಂತ್ ಕುಮಾರ್, ಲೊಕೇಶ್, ಧರ್ಮರಾಜ್, ದಲಿತ ಸಂಘರ್ಷ ಸಮಿತಿ ಮುಖಂಡರಾದ ನಾಗರಾಜ್ ಹೆತ್ತೂರು, ಅರಸಪ್ಪ, ಚಿಕ್ಕಣ್ಣ, ಮಧು, ನಟರಾಜು, ಕಬೀರ್ ಅಹಮ್ಮದ್ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry