ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪೌರಕಾರ್ಮಿಕರನ್ನು ಮುಖ್ಯವಾಹಿನಿಗೆ ತರಬೇಕು’

Last Updated 30 ಡಿಸೆಂಬರ್ 2017, 8:42 IST
ಅಕ್ಷರ ಗಾತ್ರ

ಗದಗ: ‘ಪೌರಕಾರ್ಮಿಕರನ್ನು ಸಮಾಜದ ಮುಖ್ಯವಾಹಿನಿಗೆ ತರಬೇಕು. ಶುಚಿತ್ವ ಕೆಲಸಗಳಲ್ಲಿ ತೊಡಗಿಸಿಕೊಂಡಿರುವ ಸಫಾಯಿ ಕರ್ಮಚಾರಿಗಳ ಜೀವನಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು’ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ಹೇಳಿದರು. ಇಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಹಾಗೂ ಸಫಾಯಿ ಕರ್ಮಚಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

‘ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ, ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾತಿಗೆ ಅವಕಾಶ ಕಲ್ಪಿಸಬೇಕು. ಈ ಸಮುದಾಯದವರು ಸಮೃದ್ಧ ಜೀವನ ನಡೆಸಲು ಸಂಬಂಧಪಟ್ಟ ಇಲಾಖೆಗಳು ಪೂರಕ ಕಾರ್ಯಗಳನ್ನು ಕೈಗೊಳ್ಳಬೇಕು’ ಎಂದರು.

‘ಗದಗ ಜಿಲ್ಲೆಯಲ್ಲಿ ಮ್ಯಾನುವಲ್ ಸ್ಕಾವೇಂಜರ್‌ಗಳನ್ನು ಗುರುತಿಸಿ, ಅಂತಹವರ ಪಟ್ಟಿ ಮಾಡಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ದೊರೆಯುವ ಯೋಜನೆಗಳ ಅಡಿಯಲ್ಲಿ ಅವರಿಗೆ ಸೌಲಭ್ಯಗಳನ್ನು ಒದಗಿಸಬೇಕು. ಜತೆಗೆ ಸಾಲ ಸೌಲಭ್ಯ ಹಾಗೂ ಪರ್ಯಾಯ ಉದ್ಯೋಗ ಕೈಗೊಳ್ಳಲು ಮಾರ್ಗದರ್ಶನ ನೀಡಬೇಕು. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಫಾಯಿ ಕರ್ಮಚಾರಿಗಳಿಗೆ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಕಾರ್ಯಾಗಾರದಲ್ಲಿ ಆಯಾ ಯೋಜನೆಗಳ ಕುರಿತು ಕರಪತ್ರ ವಿತರಿಸಿ, ಮಾಹಿತಿ ನೀಡುವುದು ಅವಶ್ಯವಾಗಿದೆ’ ಎಂದು ಹೇಳಿದರು.

‘ಪೌರಕಾರ್ಮಿಕರಿಗೆ ಮಾಸ್ಕ್, ಕೈಗವಸು, ಗಮ್‌ ಬೂಟ್, ಪೊರಕೆ ಸೇರಿ ವಿವಿಧ ಪರಿಕರಗಳನ್ನು ಕಡ್ಡಾಯವಾಗಿ ಒದಗಿಸಬೇಕು. ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಬೇಕು. ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳ ಸಮೀಕ್ಷೆಯನ್ನು ಮಾಡಬೇಕು. ಅಗತ್ಯ ಬಿದ್ದಲ್ಲಿ ಪರೋಕ್ಷವಾಗಿ ಪರಿಶೀಲನೆ ನಡೆಸಿ, ವಾಸ್ತವ ಸಮೀಕ್ಷೆಯ ವರದಿ ಸಲ್ಲಿಸಬೇಕು. ಪೌರ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಶಿಷ್ಯವೇತನ ಸೌಲಭ್ಯ ನೀಡಬೇಕು. ಪ್ರಧಾನಮಂತ್ರಿ ಆರೋಗ್ಯ ವಿಮಾ ಯೋಜನೆಯನ್ನು ಪೌರಕಾರ್ಮಿಕರು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ತಿಳಿಸಿದರು.

ಮ್ಯಾನ್‌ಹೋಲ್ ಸ್ವಚ್ಛಗೊಳಿಸಲು ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರಗಳ ಬಳಕೆ, ಪೌರಕಾರ್ಮಿಕರ ಸುರಕ್ಷತೆಗಾಗಿ ವಿವಿಧ ಪರಿಕರಗಳ ವಿತರಣೆ, ಗೃಹ ಭಾಗ್ಯ ಯೋಜನೆ, ಕನಿಷ್ಠ ವೇತನ ಪಾವತಿ ಸೇರಿ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು.

ಜಿಲ್ಲಾಧಿಕಾರಿ ಮನೋಜ್ ಜೈನ್, ಹೆಚ್ಚುವರಿ ಜಿಲ್ಲಾಧಿಕಾರಿ ರಮೇಶ ದೇಸಾಯಿ, ನಗರಸಭೆ ಪೌರಾಯುಕ್ತ ಮನ್ಸೂರ್ ಅಲಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಖಾಜಾ ಹುಸೇನ್ ಮುಧೋಳ, ಪುರಸಭೆ, ಪಟ್ಟಣ ಪಂಚಾಯ್ತಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT