7
ಜೆಡಿಎಸ್ ಪೂರ್ವಭಾವಿ ಸಭೆಯಲ್ಲಿ ಮುಖಂಡ ಜಿ.ಕೆ.ವೆಂಕಟಶಿವಾರೆಡ್ಡಿ ಸ್ಪಷ್ಟನೆ

ಎಚ್.ಡಿ.ಕೆ ಎತ್ತಿನಹೊಳೆ ಯೋಜನೆ ವಿರೋಧಿಸಿಲ್ಲ

Published:
Updated:

ಕೋಲಾರ: ‘ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಎತ್ತಿನಹೊಳೆ ಯೋಜನೆಯನ್ನು ರದ್ದುಪಡಿಸುತ್ತೇನೆ ಎಂದು ಎಲ್ಲೂ ಹೇಳಿಲ್ಲ. ಯೋಜನೆಯ ಅವ್ಯವಹಾರದಲ್ಲಿ ಭಾಗಿಯಾಗಿರುವವರು ಜೈಲಿಗೆ ಹೋಗುತ್ತಾರೆ ಎಂದು ಹೇಳಿದ್ದಾರೆ ಅಷ್ಟೆ’ ಎಂದು ಮಾಜಿ ಶಾಸಕ ಜಿ.ಕೆ.ವೆಂಕಟ ಶಿವಾರೆಡ್ಡಿ ಸ್ಪಷ್ಟಪಡಿಸಿದರು.

ನಗರದಲ್ಲಿ ಜನವರಿಯಲ್ಲಿ ನಡೆಯಲಿರುವ ಜೆಡಿಎಸ್ ಕಾರ್ಯಕರ್ತ ಸಮಾವೇಶ ಕುರಿತು ಶನಿವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಎಚ್.ಡಿ.ಕುಮಾರಸ್ವಾಮಿ ಜನರ ಸಮಸ್ಯೆಗಳಿಗೆ ಸ್ಪಂಧಿಸುತ್ತಾರೆ. ಜನರಿಗೆ ಅನ್ಯಾಯ ಮಾಡಲು ಹೋಗುವುದಿಲ್ಲ ಎಂದರು.

ಎತ್ತಿನಹೊಳೆ ಯೋಜನೆ ಬಗ್ಗೆ ಕುಮಾರಸ್ವಾಮಿ ಮಾತನಾಡಿರುವುದು ಒಂದು ತರ ಆದರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಚಿ, ಜನರ ಮುಂದೆ ಇನ್ನೊಂದು ತರ ಹೇಳಿಕೆ ನೀಡುತ್ತಿದ್ದಾರೆ. ಇದನ್ನು ಜನ ನಂಬುವುದಿಲ್ಲ ಎಂಬುದನ್ನು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎನ್ನುವುದು ಜನರ ಮನಸ್ಸಿನಲ್ಲಿದೆ. ಸಾಲಮನ್ನಾ ವಿಚಾರವನ್ನು ಮುಖ್ಯಮಂತ್ರಿಯವರು ಸುಮ್ಮನೆ ಪ್ರಸ್ತಾಪಿಸುತ್ತಿದ್ದಾರೆ. ಆದರೆ, ಅವರಿಂದ ಸಾಧ್ಯವಾಗುವುದಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿಯಾದರೆ 24 ಗಂಟೆಗಳಲ್ಲಿ ರೈತರ ಸಂಪೂರ್ಣ ಸಾಲಮನ್ನಾ ಮಾಡುವುದು ಖಚಿತ ಎಂದರು.

ಚುನಾವಣೆ ಸಮೀಪಿಸುತ್ತಿರುವ ಕಾರಣ ಕಾಂಗ್ರೆಸ್, ಬಿಜೆಪಿಯವರು ಸಮಾವೇಶಗಳು, ಪರಿವರ್ತನಾ ಯಾತ್ರೆಯನ್ನು ಕೈಗೊಂಡಿದ್ದಾರೆ. ಜನವರಿಯಲ್ಲಿ ಜೆಡಿಎಸ್ ವತಿಯಿಂದಲೂ ಸಮಾವೇಶ ನಡೆಸಲು ತೀರ್ಮಾನಿಸಿದ್ದು ಅಂದು, ಜಿಲ್ಲೆಯ ಎಲ್ಲ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸುವ ಸಾಧ್ಯತೆ ಇದೆ ಎಂದು

ತಿಳಿಸಿದರು.

ಮಹದಾಯಿ ಯೋಜನೆ ವಿಚಾರವಾಗಿ ಕಾಂಗ್ರೆಸ್ ಮತ್ತು ಬಿಜೆಪಿಯವರು ಯಾವ ರೀತಿ ನಡೆದುಕೊಳ್ಳುತ್ತಿದ್ದಾರೆ ಎನ್ನುವುದನ್ನು ಜನ ನೋಡುತ್ತಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಮಧ್ಯಸ್ಥಿಕೆ ವಹಿಸಿದರೆ ಸಮಸ್ಯೆ ಶಾಶ್ವತವಾಗಿ ಬಗೆಹರಿಯಲಿದೆ ಎಂದರು.

‘ಕೋಲಾರದಲ್ಲಿ ನಡೆಯುವ ಜೆಡಿಎಸ್ ಸಮಾವೇಶದ ದಿನಾಂದ ಸದ್ಯದಲ್ಲಿಯೇ ನಿಗಧಿಪಡಿಸಲಾಗುವುದು. ಸಮಾವೇಶಕ್ಕೆ ಕನಿಷ್ಠ ಒಂದು ಲಕ್ಷ ಮಂದಿಯನ್ನು ಸೇರಿಸಬೇಕು’ ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಕಾರ್ಯರ್ತರಿಗೆ ಸೂಚಿಸಿದರು.

ಜ.12ರಂದು ನಗರದ ಜೂನಿಯರ್ ಕಾಲೇಜು ಆವರಣದಲ್ಲಿ ಸಮಾವೇಶ ನಡೆಸಲು ತೀರ್ಮಾನಿಸಲಾಗಿತ್ತು. ಅಂದು ಹಬ್ಬ ಇರುವುದರಿಂದಾಗಿ ಸಮಾವೇಶ ಮುಂದೂಡಲಾಗಿದ್ದು, ಸದ್ಯದಲ್ಲಿಯೇ ದಿನಾಂಕ ನಿಗದಿಪಡಿಸಲಾಗುವುದು ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್.ನಂಜುಂಡಪ್ಪ, ಜೆಡಿಎಸ್ ಜಿಲ್ಲಾ ಉಸ್ತುವಾರಿ ಕೆ.ಬಿ.ಗೋಪಾಲಕೃಷ್ಣ, ಮಾಜಿ ಶಾಸಕ ಭಕ್ತವತ್ಸಲಂ, ಜೆಡಿಎಸ್ ಜಿಲ್ಲಾ ಘಟಕದ ಕಾಯಾಧ್ಯಕ್ಷ ಅನ್ವರ್‍ ಪಾಷಾ, ಉಪಾಧ್ಯಕ್ಷ ಚಂದ್ರಮೌಳಿ, ತಾಲ್ಲೂಕು ಘಟಕದ ಅಧ್ಯಕ್ಷ ಬಾಬು ಮೌನಿ ಮತ್ತಿತರರು ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry