ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹ

ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಖಂಡನೆ; ಜೆಡಿಎಸ್‌ ಕಾರ್ಯಕರ್ತರ ಪ್ರತಿಭಟನೆ
Last Updated 4 ಜನವರಿ 2018, 8:41 IST
ಅಕ್ಷರ ಗಾತ್ರ

ಮಡಿಕೇರಿ: ವಿಜಯಪುರದಲ್ಲಿ ಈಚೆಗೆ ನಡೆದ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ನಗರದಲ್ಲಿ ಬುಧವಾರ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ಆಗ್ರಹಿಸಿದರು.

ನಗರದ ಗಾಂಧಿ ಮೈದಾನದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಘಟನೆಯನ್ನು ಖಂಡಿಸಿ, ರಾಜ್ಯ ಸರ್ಕಾರದ ನಿರ್ಲಕ್ಷ್ಯ ಧೋರಣೆ ವಿರುದ್ಧ ಘೋಷಣೆ ಕೂಗಿದರು.

ಮಾಜಿ ಸಚಿವ ಜೀವಿಜಯ ಮಾತನಾಡಿ, ‘ವಿಜಯಪುರದಲ್ಲಿ ನಡೆದ ಘಟನೆಯು ಇಡೀ ಮನುಕುಲಕ್ಕೇ ಅಪಮಾನವಾಗಿದೆ. ಪ್ರಜ್ಞಾವಂತ ಸಮಾಜ ತಲೆತಗ್ಗಿಸುವ ವಿಚಾರ. ಹೆಣ್ಣು ಮಕ್ಕಳು ಬೀದಿಯಲ್ಲಿ ನಡೆಯಲು ಸಾಧ್ಯವಾಗದಂತಹ ಪರಿಸ್ಥಿತಿ ರಾಜ್ಯದಲ್ಲಿದೆ. ಪ್ರಕರಣದ ಆರೋಪಿಗಳ ವಿರುದ್ಧ ಸಮರ್ಪಕ ತನಿಖೆ ನಡೆಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಲಘುವಾಗಿ ಪರಿಗಣಿಸದೆ ಆರೋಪಿಗಳಿಗೆ ಗಲ್ಲು ಶಿಕ್ಷೆಯನ್ನೇ ವಿಧಿಸಬೇಕು’ ಎಂದು ಒತ್ತಾಯಿಸಿದರು.

ಮಹಿಳೆಯರು ಮತ್ತು ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾಣ ಕುರುಡು ರೀತಿ ವರ್ತಿಸುತ್ತಿವೆ. ಸರ್ಕಾರದ ನಿರ್ಲಕ್ಷ್ಯದಿಂದ ಇಂತಹ ಪ್ರಕರಣಗಳು ನಡೆಯುತ್ತಿವೆ ಎಂದು ಆಪಾದಿಸಿದರು.

ಜೆಡಿಎಸ್ ಜಿಲ್ಲಾ ಅಧ್ಯಕ್ಷ ಸಂಕೇತ್ ಪೂವಯ್ಯ ಮಾತನಾಡಿ, ಪ್ರಕರಣದ ಕೆಲವು ಆರೋಪಿಗಳನ್ನು ಬಂಧಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ವಿಚಾರಣೆಗೆ ಹಿರಿಯ ವಕೀಲರನ್ನು ನೇಮಿಸಿ ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ನಿಷ್ಕ್ರಿಯ ಗೃಹ ಸಚಿವರು ಕೂಡಲೇ ರಾಜೀನಾಮೆ ಸಲ್ಲಿಸಬೇಕು. ಸರ್ಕಾರದ ಮೇಲೆ ಜನರು ನಂಬಿಕೆ ಕಳೆದುಕೊಂಡಿದ್ದಾರೆ. ಇನ್ನು ಮೂರು ತಿಂಗಳಲ್ಲಿ ಈ ಕೆಟ್ಟ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ ಎಂದು ಆಕ್ರೋಶ ವ್ಯಕ್ತವಡಿಸಿದರು.

ಸಂವಿಧಾನವನ್ನು ಬದಲಾಯಿ ಸಬೇಕೆಂಬ ಹೇಳಿಕೆ ನೀಡುವ ಮೂಲಕ ಕೇಂದ್ರ ಸಚಿವ ಅನಂತ್‌ಕುಮಾರ್ ಹೆಗಡೆ ಅವರು ಡಾ.ಬಿ.ಆರ್. ಅಂಬೇಡ್ಕರ್‌ ಅವಮಾನ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಹೆಗಡೆ ರಾಜೀನಾಮೆ ಪಡೆಯಬೇಕು ಎಂದು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಾಧ್ಯಕ್ಷ ರಾಜಾರಾವ್ ಆಗ್ರಹಿಸಿದರು.

ಯುವಜನತಾದಳ ಜಿಲ್ಲಾ ಅಧ್ಯಕ್ಷ ವಿಶ್ವ, ಮುಖಂಡರಾದ ಮನ್ಸೂರ್ ಆಲಿ, ಭರತ್‌ಕುಮಾರ್, ಲೀಲಾ ಶೇಷಮ್ಮ, ಕೆ.ಎಂ. ಗಣೇಶ್, ಸುನಿಲ್, ವಿಜಯ್ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT