ಬುಧವಾರ, ಜೂಲೈ 8, 2020
29 °C
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಪತ್ರ ರವಾನಿಸಿದ ದಲಿತ ಸಂಘರ್ಷ ಸಮಿತಿ

ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಒತ್ತಾಯ

ಬೀದರ್: ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಒತ್ತಾಯಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ)ಯ ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಅಂಬೇಡ್ಕರ್ ವೃತ್ತದಿಂದ ಮೆರ ವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಬಂದು ಮುಖ್ಯಮಂತ್ರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.

ಸರ್ಕಾರಿ ಶಾಲೆಗಳ ಸುಧಾರಣೆ ಅಗತ್ಯವಿದ್ದು, ಪ್ರೊ. ಎಸ್.ಜಿ. ಸಿದ್ದರಾಮಯ್ಯ ಅಧ್ಯಕ್ಷತೆಯ ಸರ್ಕಾರಿ ಶಾಲೆ ಸಬಲೀಕರಣ ಸಮಿತಿ ವರದಿಯನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಸಮಿತಿಯ ಶಿಫಾರಸುಗಳನ್ನು ಅನುಷ್ಠಾನಗೊಳಿಸಬೇಕು. ಸಾವಿತ್ರಿ ಬಾಯಿ ಫುಲೆ ಜನ್ಮದಿನವನ್ನು ಸರ್ಕಾರಿ ಶಾಲೆಗಳಲ್ಲಿ ಆಚರಿಸಲು ಆದೇಶಿಸ ಬೇಕು. ಸಾವಿತ್ರಿಬಾಯಿ ಜೀವನ ಹಾಗೂ ಸಾಧನೆಯನ್ನು ಪಠ್ಯಕ್ರಮದಲ್ಲಿ ಅಳವಡಿಸಬೇಕು. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ 3 ರಿಂದ 6 ವರ್ಷದ ಮಕ್ಕಳಿಗಾಗಿ ಪೂರ್ವ ಪ್ರಾಥಮಿಕ ಶಾಲೆ ಆರಂಭಿಸಬೇಕು. ಹೊಸ ಶಿಕ್ಷಣ ನೀತಿ ರೂಪಿಸಲು ಸಮಿತಿ ರಚಿಸ ಬೇಕು. ಸರ್ಕಾರಿ ಹುದ್ದೆ, ಸೌಲಭ್ಯ, ರಾಜಕೀಯ ಸ್ಥಾನಮಾನ ಪಡೆದ ಕುಟುಂಬಗಳ ಮಕ್ಕಳನ್ನು ಸರ್ಕಾರಿ ಶಾಲೆಗೆ ದಾಖಲಿಸುವುದನ್ನು ಕಡ್ಡಾಯಗೊಳಿಸಬೇಕು ಎಂದು ಒತ್ತಾಯಿಸಿದರು.

ಶಿಕ್ಷಣ ಖಾಸಗೀಕರಣವನ್ನು ಕೈಬಿಡಬೇಕು. 2018ರ ಜನವರಿ 1 ರಂದು ದಲಿತರ ಭೀಮಾ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಕಲ್ಲು ತೂರಿ ಕೋಮು ಗಲಭೆಗೆ ಕುಮ್ಮಕ್ಕು ನೀಡಿದ ಕಿಡಿಗೇಡಿಗಳನ್ನು ಬಂಧಿಸಬೇಕು. ಘಟನೆಯಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ₹10 ಲಕ್ಷ ಪರಿಹಾರ ಕೊಡಬೇಕು. ಕುಟುಂಬದ ಒಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು.

ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜತೆಗೆ ಪ್ರಾಥಮಿಕ ಹಂತದಿಂದಲೇ ಇಂಗ್ಲಿಷ್ ಕಲಿಕೆಯನ್ನು ಕಡ್ಡಾಯಗೊಳಿಸಬೇಕು ಎಂದು ಒತ್ತಾಯಿಸಿದರು.

ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ರಮೇಶ ಡಾಕುಳಗಿ, ಜಿಲ್ಲಾ ಪ್ರಧಾನ ಸಂಚಾಲಕ ರಾಜಕುಮಾರ ಬನ್ನೇರ, ಸಂಘಟನಾ ಸಂಚಾಲಕರಾದ ಬುದ್ಧಪ್ರಕಾಶ ಹರ್ಗೆ, ಝರೆಪ್ಪ ರಾಂಪುರೆ, ಬಸವರಾಜ ಸಾಗರ, ಸುಭಾಷ ಜ್ಯೋತಿ, ಸಂಜುಕುಮಾರ ಮೇಟಿ, ವಿಠ್ಠಲ ಲಾಡಕರ, ಖಜಾಂಚಿ ಮಾರುತಿ ಶಿಂದೆ, ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಸಂಚಾಲಕ ಅಶೋಕಕುಮಾರ ಹೊಸಮನಿ, ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿ ರಂಜಿತಾ ಜೈನೂರ, ಭಾಲ್ಕಿ ತಾಲ್ಲೂಕು ಸಂಚಾಲಕ ರಾಜಕುಮಾರ ಕಾಳೆಕರ, ರಮೇಶ ಸಾಗರ, ಬಾಬು ಮಾಲೆ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.