ಸೋಮವಾರ, ಆಗಸ್ಟ್ 3, 2020
25 °C

ದೀಪಕ್‌ ರಾವ್‌ ಕೊಲೆ ಖಂಡಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದೀಪಕ್‌ ರಾವ್‌ ಕೊಲೆ ಖಂಡಿಸಿ ಪ್ರತಿಭಟನೆ

ಧಾರವಾಡ/ಹುಬ್ಬಳ್ಳಿ: ಸುರತ್ಕಲ್‌ ಬಳಿಯ ಕೃಷ್ಣಾಪುರದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತ ದೀಪಕ್ ರಾವ್ ಕೊಲೆ ಖಂಡಿಸಿ ಅವಳಿ ನಗರದಲ್ಲಿ ಬಿಜೆಪಿ ಹಾಗೂ ಬಜರಂಗದಳ ಕಾರ್ಯಕರ್ತರು ಗುರುವಾರ ಪ್ರತಿಭಟನೆ ನಡೆಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ.

ಇದುವರೆಗೂ ರಾಜ್ಯದಲ್ಲಿ 24 ಹಿಂದೂ ಕಾರ್ಯಕರ್ತರ ಕೊಲೆಯಾಗಿದೆ. ಈ ಕುರಿತು ರಾಜ್ಯ ಸರ್ಕಾರ ತನಿಖೆ ಮಾಡುವ ನೆಪದಲ್ಲಿ ಕೊಲೆ ಪ್ರಕರಣಗಳನ್ನು ಮುಚ್ಚಿ ಹಾಕಿ, ಪಿಎಫ್‌ಐ ಮುಸ್ಲಿಂ ಸಂಘಟನೆಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ನಂತರ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಕಾರ್ಯಕರ್ತರ ಕೊಲೆ ಪ್ರಕರಣಗಳು ಹೆಚ್ಚಾಗಿವೆ. ಆದರೆ, ಸರ್ಕಾರ ಮಾತ್ರ ಯಾವುದೇ ಕ್ರಮ ಕೈಗೊಳ್ಳದೇ ಮೌನವಾಗಿರುವುದರಿಂದ, ಸಾರ್ವಜನಿಕರಲ್ಲಿ ಅನೇಕ ಸಂಶಯಗಳು ಮನೆ ಮಾಡಿವೆ. ಅಲ್ಲದೇ, ಇತ್ತೀಚೆಗೆ ಮಂಗಳೂರಿನಲ್ಲಿ ಶರತ್ ಮಡಿವಾಳ ಎಂಬ ಆರ್‌ಎಸ್‌ಎಸ್‌ ಕಾರ್ಯಕರ್ತನನ್ನು ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪಿಎಫ್ಐ ಹಾಗೂ ಕೆಎಫ್‌ಡಿ ಸಂಘಟಣೆಗಳನ್ನು ನಿಷೇಧಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಹಿತಕರ ಘಟನೆಗಳು ನಡೆಯುತ್ತಿದ್ದರೂ ಸಚಿವರಾದ ರಮಾನಾಥ ರೈ ಹಾಗೂ ಯು.ಟಿ.ಖಾದರ್ ಅಲ್ಲಿ ಶಾಂತಿ ನೆಲೆಸುವಂತೆ ಮಾಡಲು ಯಾವುದೇ ಪ್ರಯತ್ನ ಮಾಡಿಲ್ಲ. ಬದಲಿಗೆ ಕೋಮುವಾದಿಗಳಿಗೆ ಪ್ರೊತ್ಸಾಹಿಸುವ ಕೆಲಸ ಮಾಡಿರುವುದು ಎಷ್ಟರ ಮಟ್ಟಿಗೆ ಸರಿ. ಕೂಡಲೇ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ ಎಂದರು.

ಧಾರವಾಡದಲ್ಲಿ ಮಾತನಾಡಿದ ಸೀಮಾ ಮಸೂತಿ, ‘ರಾಜ್ಯದಲ್ಲಿ ಈವರೆಗೆ 24ಕ್ಕೂ ಹೆಚ್ಚು ಹಿಂದೂ ಕಾರ್ಯಕರ್ತರ ಹತ್ಯೆಯಾಗಿವೆ. ಆದರೆ, ಅವರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರ  ಹಿಂದೇಟು ಹಾಕುತ್ತಿದೆ. ಹೀಗಾಗಿ ಇಂದು ಹಿಂದು ಯುವಕ ದೀಪಕ್ ಅವರನ್ನು ಕಳೆದುಕೊಂಡಿದ್ದೇವೆ. ಪಿಎಫ್‌ಐ ನಿಷೇಧ ಮಾಡುವ ಬದಲಿಗೆ ಮುಸ್ಲಿಂ ಸಮುದಾಯದ ತುಷ್ಠಿಕರಣದಲ್ಲಿ ತೊಡಗಿದೆ’ ಎಂದು ಆರೋಪಿಸಿದರು.

‘ಕೊಲೆ ಪ್ರಕರಣವನ್ನು ಕೇಂದ್ರ ತನಿಖಾ ಸಂಸ್ಥೆಗೆ ವಹಿಸಬೇಕು ಹಾಗೂ ಕೊಲೆಯಾದ ದೀ‍ಪಕ್‌ ರಾವ್‌ ಕುಟುಂಬಕ್ಕೆ ₹ 20 ಲಕ್ಷ ಪರಿಹಾರ ನೀಡಬೇಕು’ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾನಂದ ಮುತ್ತಣ್ಣವರ ಒತ್ತಾಯಿಸಿದರು. ಧಾರವಾಡದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರಾದ ಅರವಿಂದ ಏಗನಗೌಡರ, ಶರಣು ಅಂಗಡಿ, ಈರಣ್ಣ ಹಪ್ಪಳಿ, ಶಿವಾನಂದ ಸತ್ತಿಗೇರಿ, ರಾಕೇಶ ನಾಜರೆ, ಶಕ್ತಿ ಹಿರೇಮಠ, ರವಿ ಯಲಿಗಾರ ಹಾಗೂ ಬಜರಂಗ ದಳ ಕಾರ್ಯಕರ್ತರು ಇದ್ದರು.

ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದತ್ತಮೂರ್ತಿ ಕುಲಕರ್ಣಿ, ಪಾಲಿಕೆ ಸದಸ್ಯ ಶಿವು ಮೆಣಸಿಕಾಯಿ, ಮುಖಂಡರಾದ ರಂಗಾ ಬದ್ದಿ, ಸತೀಶ ಶೇಜವಾಡಕರ, ಶಂಕರಣ್ಣ ಬಿಜವಾಡ, ಲಕ್ಷಣ ಬೀಳಗಿ, ಬಸವರಾಜ ಅಮ್ಮಿನಬಾವಿ, ಶಶಿಶೇಖರ ಡಂಗನವರ, ಮಲ್ಲಿಕಾರ್ಜುನ ಮರಿಗೌಡರ, ರಾಜು ಜರತಾರಘರ್‌ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.