ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊಲೆ ಹಿಂದೆ ವ್ಯವಸ್ಥಿತ ಜಾಲ: ಬಿಜೆಪಿ ಆರೋಪ

Last Updated 6 ಜನವರಿ 2018, 9:04 IST
ಅಕ್ಷರ ಗಾತ್ರ

ದಾವಣಗೆರೆ: ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲಿನ ಹಲ್ಲೆ ಹಾಗೂ ಕೊಲೆ ಪ್ರಕರಣಗಳ ಹಿಂದೆ ವ್ಯವಸ್ಥಿತ ಜಾಲ ಸಕ್ರಿಯವಾಗಿದೆ. ಇದನ್ನು ಪತ್ತೆ ಮಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕೊಲೆ ಪ್ರಕರಣಗಳು ಸರಣಿ ರೀತಿಯಲ್ಲಿ ನಡೆಯುತ್ತಿವೆ. ರಾಜ್ಯ ಸರ್ಕಾರ ಪ್ರತಿಯೊಂದು ಹತ್ಯೆಯನ್ನು ಪ್ರತ್ಯೇಕವಾಗಿಸಿ ಪರಿಸ್ಥಿತಿಯ ಗಂಭೀರತೆಯನ್ನು ಕಡೆಗಣಿಸುತ್ತಿದೆ. ಸರ್ಕಾರದ ಉದಾಸೀನವೇ ಮತ್ತೊಂದು ಹತ್ಯೆ ನಡೆಯಲು ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಮಂಗಳೂರಿನ ಕಾಟಿಪಳ್ಳದಲ್ಲಿ ನಡೆದ ಕೊಲೆ ಪ್ರಕರಣದಲ್ಲಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಸಂಘಟನೆಗಳ ಸಂಚು ಇದೆ ಎನ್ನುವುದರಲ್ಲಿ ಯಾವ ಸಂಶಯವೂ ಉಳಿದಿಲ್ಲ ಎಂದು ದೂರಿದರು.

ಮುಖ್ಯಮಂತ್ರಿ ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿದ ನಂತರ ಅಥವಾ ಭೇಟಿಗಿಂತ ಮೊದಲು ಇಂತಹ ಕೃತ್ಯ ನಡೆಯುತ್ತಿರುವುದು ಕಾಕತಾಳಿಯವೊ, ಆಕಸ್ಮಿಕವೊ ಎನ್ನುವುದನ್ನು ರಾಜ್ಯ ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮೈಸೂರು ಮತ್ತು ಶಿವಮೊಗ್ಗದಲ್ಲಿ 2012–13ರಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಲಾಗಿತ್ತು. ಆದರೆ, ಕಾಂಗ್ರೆಸ್‌ ಸರ್ಕಾರ ಆರೋಪಿಗಳ
ಮೇಲಿನ ಎಲ್ಲಾ ಪ್ರಕರಣಗಳನ್ನು ಹಿಂದಕ್ಕೆ ಪಡೆದಿತ್ತು. ಈಗ ರಾಜ್ಯದಲ್ಲಿ ಮಾರಣಹೋಮ ನಡೆಯಲು ಇದೂ ಒಂದು ಕಾರಣವಾಗಿದೆ ಎಂದು ದೂರಿದರು.

ಮೃತ ದೀಪಕ್‌ರಾವ್ ಕುಟುಂಬಕ್ಕೆ ಹೆಚ್ಚಿನ ಪರಿಹಾರ ನೀಡಬೇಕು. ಹತ್ಯೆಯ ನೈತಿಕ ಹೊಣೆ ಹೊರಬೇಕಾದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಮತ್ತು ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯ ನೇತೃತ್ವವನ್ನು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಯಶವಂತರಾವ್‌ ಜಾಧವ್, ಯುವ ಮೋರ್ಚಾ ಅಧ್ಯಕ್ಷ ಪಿ.ಸಿ.ಶ್ರೀನಿವಾಸ್ ಭಟ್, ಮುಖಂಡರಾದ ಎಚ್‌.ಎನ್‌.ಶಿವಕುಮಾರ್, ಸಹನಾ ರವಿ, ಬಿ.ರಮೇಶ್‌ನಾಯ್ಕ, ಜಯಣ್ಣ, ರಾಜಶೇಖರ್, ನಾಗರತ್ನ ಆರ್.ನಾಯ್ಕ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT