ಶುಕ್ರವಾರ, ಆಗಸ್ಟ್ 14, 2020
23 °C

ಮಹದಾಯಿ ವಿವಾದ: 10ರಂದು ಹೋರಾಟಗಾರರ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ‘ಮಹದಾಯಿ ವಿಚಾರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಟಕ ಖಂಡಿಸಿ ಇದೇ 10ರಂದು ಬೆಂಗಳೂರಿನಲ್ಲಿ ಕನ್ನಡ ಪರ ಒಕ್ಕೂಟಗಳ ಮುಖಂಡರು ಹಾಗೂ ರೈತರ ಸಭೆ ಕರೆಯಲಾಗಿದೆ. ಅಗತ್ಯಬಿದ್ದಲ್ಲಿ ಕರ್ನಾಟಕ ಬಂದ್‌ಗೂ ಕರೆ ನೀಡಲಾಗುವುದು’ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜು ತಿಳಿಸಿದರು.

ಮಹದಾಯಿ ಮೇಕೆದಾಟು ಯೋಜನೆಯ ವಿಚಾರದಲ್ಲಿ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ನಿರ್ಲಕ್ಷ್ಯ ಖಂಡಿಸಿ ಅವರು ಇಲ್ಲಿನ ಐಜೂರು ವೃತ್ತದಲ್ಲಿ ಶನಿವಾರ ತಮ್ಮ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದರು.

ಮಹದಾಯಿ ವಿಚಾರದಲ್ಲಿ ಗೋವಾ ಮುಖ್ಯಮಂತ್ರಿ ಪರ್ರೀಕರ್‌ ಅವರಿಂದ ಪತ್ರ ಬರೆಯಿಸಿಕೊಳ್ಳುವ ಮೂಲಕ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಯಾವ ನಾಟಕ ಕಂಪನಿಗಳಿಗೂ ಕಡಿಮೆ ಇಲ್ಲದಂತೆ ನಾಟಕ ಆಡಿದ್ದಾರೆ. ಮತ್ತೊಂದೆಡೆ ನಮ್ಮ ರಾಜ್ಯದಿಂದ ಆಯ್ಕೆಯಾಗಿರುವ ಎಲ್ಲ ಸಂಸದರೂ ನಾಲಿಗೆಗೆ ಲಕ್ವ ಹೊಡೆಸಿಕೊಂಡವರಂತೆ ಮೌನ ವಹಿಸಿದ್ದಾರೆ. ಅವರಿಗೇನಾದರೂ ಇಲ್ಲಿನ ಜನರ ಬಗ್ಗೆ ಕಿಂಚಿತ್ತು ಕಾಳಜಿ ಇದ್ದರೆ ಇನ್ನಾದರೂ ಮೌನ ಮುರಿದು ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಲಿ ಎಂದು ಆಗ್ರಹಿಸಿದರು.

ಮಹದಾಯಿ ವಿಚಾರಕ್ಕೆ ಸಂಬಂಧಿಸಿ ಗೋವಾ ಬಂದ್‌ಗೆ ಕರೆ ನೀಡಿರುವುದು ವಿಷಾದನೀಯ. ಸಣ್ಣ ರಾಜ್ಯಗಳು ಒಕ್ಕೂಟ ವ್ಯವಸ್ಥೆಗೆ ಹೊಂದಿಕೊಳ್ಳುವುದನ್ನು ರೂಢಿಸಿಕೊಳ್ಳಬೇಕು. ಇಲ್ಲವಾದಲ್ಲಿ ಅಲ್ಲಿನ ಸರ್ಕಾರವನ್ನು ವಜಾ ಮಾಡಬೇಕು ಎಂದು ಒತ್ತಾಯಿಸಿದರು.

ಮೇಕೆದಾಟು ಯೋಜನೆಗೆ ಸದ್ಯ ಯಾವುದೇ ಕಾನೂನು ತೊಡಕು ಇಲ್ಲ. ಹೀಗಾಗಿ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಬೇಕು ಎಂದು ರಾಜ್ಯ ಸರ್ಕಾರವನ್ನು ಕೋರಿದರು. ಕರುನಾಡ ಸೇನೆಯ ಜಗದೀಶ್‌ ಸೇರಿದಂತೆ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಪಾಲ್ಗೊಂಡರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.