ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಧಿಕಾರಕ್ಕೆ ಬಂದರೆ ಮುಖಂಡರು ಮತ್ತೆ ಜೈಲಿಗೆ

Last Updated 7 ಜನವರಿ 2018, 10:50 IST
ಅಕ್ಷರ ಗಾತ್ರ

ಕಲಬುರ್ಗಿ: ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಮುಖಂಡರು ಜೈಲಿಗೆ ಹೋಗುವುದು ಖಚಿತ ಎಂದು ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯಿಲಿ ವ್ಯಂಗ್ಯವಾಡಿದರು.

ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ 4–5 ಮುಖಂಡರು ಸ್ವಯಂಪ್ರೇರಿತ ತಪ್ಪಿನಿಂದ ಜೈಲಿಗೆ ಹೋಗಿ ಬಂದಿದ್ದಾರೆ. ಹುಲಿಗೆ ಒಂದು ಸಾರಿ ರಕ್ತದ ರುಚಿ ಹತ್ತಿದರೆ ಅದು ಮತ್ತೆ ರಕ್ತವನ್ನು ಬಯಸುತ್ತದೆ. ಹಾಗೆಯೇ ಬಿಜೆಪಿ ಮುಖಂಡರೂ ಕೂಡ ಅಧಿಕಾರಕ್ಕೆ ಬಂದರೆ ಮತ್ತೆ ತಪ್ಪು ಮಾಡಿ ಜೈಲಿಗೆ ಹೋಗುತ್ತಾರೆ ಎಂದು ಲೇವಡಿ ಮಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ ಅವರು ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ರಾಜ್ಯ ಬಜೆಟ್ ಬಳಿಕ ಕಾಂಗ್ರೆಸ್‌ನ ಎಲ್ಲ ನಾಯಕರು ಮತ್ತು ಮುಖಂಡರು ಬಸ್‌ನಲ್ಲಿ ರಾಜ್ಯ ಪ್ರವಾಸ ಕೈಗೊಳ್ಳುವರು. ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರದ ಬಿಜೆಪಿ ಸರ್ಕಾರ ಸುಳ್ಳು ಹೇಳುವ ಸರ್ಕಾರ. ಅವರಿಗೆ ಸತ್ಯ ಗೊತ್ತೇ ಇಲ್ಲ. ಯೋಜನಾ ಆಯೋಗವನ್ನು ರದ್ದುಪಡಿಸಿ ನೀತಿ ಆಯೋಗ ರಚಿಸಿದ್ದಾರೆ. ಆದರೆ ರಾಜ್ಯದ ಅಭಿವೃದ್ಧಿಗೆ ಹಣ ಬಿಡುಗಡೆ ಮಾಡುತ್ತಿಲ್ಲ. ಅಮೃತ ಮತ್ತು ಸ್ಮಾರ್ಟ್ ಸಿಟಿ ಯೋಜನೆಗಳು ಕಾಗದದಲ್ಲೇ ಉಳಿದಿವೆ ಎಂದು  ಟೀಕಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಭಾವನಾತ್ಮಕವಾಗಿ ಜನರನ್ನು ವಂಚಿಸಿ ಗುಜರಾತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಗುಜರಾತ್ ನಲ್ಲಿ ಗ್ರಾಮೀಣ ಪ್ರದೇಶದ ಶೇ 85ರಷ್ಟು ಮತಗಳು ನಮಗೆ ಸಿಕ್ಕಿವೆ. ಆದರೆ ನಗರ ಪ್ರದೇಶದಲ್ಲಿ ಜನರು ಬಿಜೆಪಿಗೆ ಮತ ಹಾಕಿದ್ದಾರೆ. ಇದಕ್ಕೆ ಮೋದಿ ಅವರ ಭಾವನಾತ್ಮಕ ಬೆದರಿಕೆಯೇ ಕಾರಣ ಎಂದು ಆರೋಪಿಸಿದರು.

ಗುಜರಾತ್‌ನಲ್ಲಿ ಬಿಜೆಪಿ ಗೆದ್ದು ಸೋತಿದೆ, ನಾವು ಸೋತು ಗೆದ್ದಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಹ್ಯಾಕಥಾನ್‌ಗೆ ಚುನಾವಣಾ ಆಯೋಗ ಅವಕಾಶ ಕಲ್ಪಿಸಬೇಕು ಎಂದರು.

ಕರಾವಳಿಯಲ್ಲಿ ಬಿಜೆಪಿ ಕೋಮು ಗಲಭೆಗೆ ಯತ್ನಿಸುತ್ತಿದ್ದು, ಇದರಿಂದ ಆ ಪಕ್ಷ ನಷ್ಟ ಅನುಭವಿಸಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT