ಬುಧವಾರ, ಆಗಸ್ಟ್ 5, 2020
20 °C

‘ಬಿಜೆಪಿ ಅಧಿಕಾರಕ್ಕೆ ಬಂದರೆ ಮತ್ತೆ ಜೈಲಿಗೆ’: ವೀರಪ್ಪ ಮೊಯಿಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ‘ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಆ ಪಕ್ಷದ ಮುಖಂಡರು ಮತ್ತೆ ಜೈಲಿಗೆ ಹೋಗುವುದು ಖಚಿತ’ ಎಂದು ಕೆಪಿಸಿಸಿ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯಿಲಿ ವ್ಯಂಗ್ಯವಾಡಿದರು.

ಭಾನುವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಾಲ್ಕೈದು ಮುಖಂಡರು ಸ್ವಯಂಕೃತ ತಪ್ಪಿನಿಂದ ಜೈಲಿಗೆ ಹೋಗಿ ಬಂದಿದ್ದಾರೆ. ಹುಲಿಗೆ ಒಂದು ಸಾರಿ ರಕ್ತದ ರುಚಿ ಹತ್ತಿದರೆ ಅದು ಮತ್ತೆ ರಕ್ತವನ್ನೇ ಬಯಸುತ್ತದೆ. ಹಾಗೆಯೇ ಬಿಜೆಪಿ ಮುಖಂಡರೂ ಕೂಡ ಅಧಿಕಾರಕ್ಕೆ ಬಂದರೆ ಮತ್ತೆ ತಪ್ಪು ಮಾಡಿ ಜೈಲಿಗೆ ಹೋಗುತ್ತಾರೆ’ ಎಂದು ಲೇವಡಿ ಮಾಡಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ ಅವರು ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದಾರೆ. ರಾಜ್ಯ ಬಜೆಟ್ ಬಳಿಕ ಕಾಂಗ್ರೆಸ್‌ನ ಎಲ್ಲ ನಾಯಕರು ಮತ್ತು ಮುಖಂಡರು ಬಸ್‌ನಲ್ಲಿ ರಾಜ್ಯ ಪ್ರವಾಸ ಕೈಗೊಳ್ಳುವರು. ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ’ ಎಂದು ವಿಶ್ವಾಸ ವ್ಯಕಪಡಿಸಿದರು.

‘ಕರಾವಳಿ ಭಾಗದಲ್ಲಿ ಬಿಜೆಪಿ ಕೋಮು ಗಲಭೆ ಸೃಷ್ಟಿಸುತ್ತಿದ್ದು, ಇದರಿಂದ ಆ ಪಕ್ಷ ನಷ್ಟ ಅನುಭವಿಸಲಿದೆ. ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸತ್ಯ ಮತ್ತು ರಾಜಧರ್ಮದ ಆಧಾರದ ಮೇಲೆ ಚುನಾವಣೆ ಎದುರಿಸುವಂತೆ ಸೂಚಿಸಿದ್ದಾರೆ. ಹೀಗಾಗಿ ನಾವು ಸತ್ಯವನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲು ಸಜ್ಜಾಗುತ್ತಿದ್ದೇವೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.