ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಚುನಾವಣಾ ಹೊಂದಾಣಿಕೆ: ಯಡಿಯೂರಪ್ಪ ಆರೋಪ

Last Updated 8 ಜನವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಎಸ್‌ಡಿಪಿಐ (ಸೋಶಿಯಲ್ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ) ಜತೆ ಚುನಾವಣಾ ಹೊಂದಾಣಿಕೆ ಮಾಡಿಕೊಳ್ಳಲು ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರು ಮುಂದಾಗಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಆರೋಪಿಸಿದರು.

ಮಂಗಳೂರಿನಲ್ಲಿ ನಡೆದ ದೀಪಕ್ ರಾವ್ ಹತ್ಯೆ ಖಂಡಿಸಿ ಸೋಮವಾರ ಇಲ್ಲಿ ನಡೆದ ಪ್ರತಿಭಟನಾ ಧರಣಿ ಉದ್ದೇಶಿಸಿ ಮಾತನಾಡಿದ ಅವರು, ಚುನಾವಣಾ ಮೈತ್ರಿ ಮಾಡಿಕೊಳ್ಳುವ ಕಾರಣಕ್ಕಾಗಿಯೇ ಎಸ್‌ಡಿಪಿಐ, ಪಿಎಫ್‌ಐ (ಪಾಪ್ಯುಲರ್ ಫ್ರಂಟ್ ಆಫ್‌ ಇಂಡಿಯಾ) ಗಳನ್ನು ನಿಷೇಧಿಸಲು ಸರ್ಕಾರ ಮುಂದಾಗುತ್ತಿಲ್ಲ ಎಂದು ಹರಿಹಾಯ್ದರು.

ದೀಪಕ್ ರಾವ್ ಹಾಗೂ ಬಶೀರ್ ಕೊಲೆಗಳನ್ನು ಎಲ್ಲರೂ ಖಂಡಿಸಬೇಕು. ಇಬ್ಬರೂ ಮನುಷ್ಯರೇ. ಸರ್ಕಾರದ ನಡವಳಿಕೆಯಿಂದಾಗಿ ಹಿಂದೂ–ಮುಸ್ಲಿಂ ಸಾಮರಸ್ಯ ಹಾಳಾಗುತ್ತಿದೆ. ಈ ದರಿದ್ರ ಸರ್ಕಾರ ಹೋಗುವುದನ್ನೇ ಜನರು ಕಾಯುತ್ತಿದ್ದಾರೆ ಎಂದು ಹೇಳಿದರು.‌

ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಧ್ಯೆ ಸಂಘರ್ಷ ನಡೆಯುತ್ತಿದೆ. ಯಾವುದೇ ಸಾವಿನ ತನಿಖೆಯಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ನೆರವು ನೀಡುತ್ತಿಲ್ಲ. ಕೊಲೆಗಳನ್ನು ತಡೆಯುವಲ್ಲಿ ವಿಫಲರಾಗಿರುವ ಗೃಹ ಸಚಿವ ರಾಮಲಿಂಗಾರೆಡ್ಡಿ ಬೇಜವಾಬ್ದಾರಿ ಹೇಳಿಕೆ ನೀಡುವುದನ್ನು ಬಿಟ್ಟರೆ ಬೇರೆ ಏನೂ ಮಾಡುತ್ತಿಲ್ಲ ಎಂದು ಟೀಕಿಸಿದರು.

ಬಿಜೆಪಿ ಶಾಸಕ ಆರ್. ಅಶೋಕ್‌ ಮಾತನಾಡಿ, ಗ್ರಾಮ ಪಂಚಾಯಿತಿಯಲ್ಲಿ ಎಸ್‌ಡಿಪಿಐ ಜತೆ ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿದೆ ಎಂದು ರಾಮಲಿಂಗಾರೆಡ್ಡಿ ಆಪಾದಿಸಿದ್ದಾರೆ. ಆದರೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಮೈತ್ರಿ ಆಡಳಿತ ನಡೆಸುತ್ತಿದೆ. ಎಸ್‌ಡಿಪಿಐ ಪ್ರತಿನಿಧಿಸುವ ಮುಜಾಹಿದ್ದೀನ್ ಪಾಶಾಗೆ ಸತತ ಮೂರು ವರ್ಷಗಳಿಂದ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡಲಾಗಿದೆ. ಅಧಿಕಾರ ಹಂಚಿಕೆ ಮಾಡಿಕೊಂಡು ಆಡಳಿತ ನಡೆಸುತ್ತಿರುವವರಿಗೆ ಬಿಜೆಪಿ ವಿರುದ್ಧ ಟೀಕೆ ಮಾಡಲು ನಾಚಿಕೆಯಾಗುವುದಿಲ್ಲವೇ ಎಂದು ಕಿಡಿಕಾರಿದರು.

***

ಪಶ್ಚಿಮ ವಲಯ ಐಜಿಪಿ ಹೇಮಂತ್ ನಿಂಬಾಳ್ಕರ ಕಾಂಗ್ರೆಸ್‌ ಏಜೆಂಟ್‌ರಂತೆ ಕೆಲಸ ಮಾಡುತ್ತಿದ್ದಾರೆ. ಸಾಕ್ಷಿದಾರರನ್ನು ಕರೆಸಿ ಬೆದರಿಸುತ್ತಿದ್ದಾರೆ
–ಶೋಭಾ ಕರಂದ್ಲಾಜೆ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

***

ರಾಜ್ಯದಲ್ಲಿ ನಡೆಯುತ್ತಿರುವ ಹತ್ಯೆಗಳ ಹಿಂದೆ ಆರ್‌ಎಸ್‌ಎಸ್ ಕೈವಾಡ ಇದೆ ಎಂದು ಆರೋಪಿಸುತ್ತಿರುವವರು ಸಾಕ್ಷಿ ಇದ್ದರೆ ಸಾಬೀತುಪಡಿಸಲಿ
–ಸಿ.ಟಿ. ರವಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

***

ಕೊಲೆ ಪ್ರಕರಣದ ತನಿಖೆಯನ್ನು ಎನ್ಐಎಗೆ ಒಪ್ಪಿಸಿ ಎಂದು ಕೇಳುವುದಿಲ್ಲ. ಜನತಾ ನ್ಯಾಯಾಲಯದ ಮುಂದೆ ಹೋಗಿ ನ್ಯಾಯ ಕೇಳುತ್ತೇವೆ
–ಅರವಿಂದ ಲಿಂಬಾವಳಿ,  ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT