ಬಂದ್‌ಗೆ ಉತ್ತಮ ಪ್ರತಿಕ್ರಿಯೆ

7

ಬಂದ್‌ಗೆ ಉತ್ತಮ ಪ್ರತಿಕ್ರಿಯೆ

Published:
Updated:

ಕುರುಗೋಡು: ಪರಿಶಿಷ್ಟಜಾತಿ ಮತ್ತು ಪಂಗಡದ ನೌಕರರ ಮುಂಬಡ್ತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿದ ಕಾಯ್ದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಬೇಕು ಮತ್ತು ಸಂವಿಧಾನದಲ್ಲಿರುವ ಮೀಸಲಾತಿಗೆ ತಿದ್ದುಪಡಿ ತರುವ ಬಗ್ಗೆ ಹೇಳಿಕೆ ನೀಡಿರುವ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ ವಿರುದ್ಧ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಹೋರಾಟ ಸಮಿತಿಯು ಸೋಮವಾರ ಕರೆ ನೀಡಿದ್ದ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಬಂದ್ ಹಿನ್ನೆಲೆಯಲ್ಲಿ ಸ್ಥಳೀಯ ವರ್ತಕರು ಸ್ವಯಂ ಪ್ರೇರಣೆಯಿಂದ ಅಂಗಡಿಗಳನ್ನು ಮುಚ್ಚಿ ಬೆಂಬಲ ವ್ಯಕ್ತಪಡಿಸಿದರು. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಬ್ಯಾಂಕ್‌ಗಳು ಮತ್ತು ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಲಿಲ್ಲ. ವಿವಿಧ ಸಂಘಟನೆಯ ಕಾರ್ಯಕರ್ತರು ಪಟ್ಟಣದಲ್ಲಿ ಮೆರವಣಿಗೆ ನಡೆಸಿ, ಮುಖ್ಯವೃತ್ತದಲ್ಲಿ ಸಮಾವೇಶಗೊಂಡರು.

ಈ ವೇಳೆ, ದಲಿತ ಹಕ್ಕುಗಳ ಹೋರಾಟ ಸಮಿತಿ ಸಂಚಾಲಕ ವಿ.ಎಸ್. ಶಿವಶಂಕರ್ ಮಾತನಾಡಿ, ‘ಸುಪ್ರೀಂ ಕೋರ್ಟ್ ಆದೇಶದಂತೆ ಹಿಂಬಡ್ತಿಗೆ ಅನುಮೋದನೆ ನೀಡಿದರೇ, ರಾಜ್ಯದ 50 ಸಾವಿರ ಎಸ್‌.ಸಿ ಮತ್ತು ಎಸ್‌.ಟಿ ನೌಕರರು ಮೀಸಲಾತಿ ಸೌಲಭ್ಯದಿಂದ ವಂಚಿತರಾಗಲಿದ್ದಾರೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ಕೆ. ಗಾದಿಲಿಂಗಪ್ಪ ಮಾತನಾಡಿ, ‘ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಅವರು ಸಂವಿಧಾನ ಬದಲಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ. ಒಂದು ವೇಳೆ ಸಂವಿಧಾನವನ್ನು ತಿದ್ದುಪಡಿ ಮಾಡಿದರೆ ಕೆಳ ಸಮುದಾಯಗಳು ಅಭಿವೃದ್ಧಿಗೆ ಮಾರಕವಾಗಲಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಖಂಡ ಜಂಬಯ್ಯ ನಾಯ್ಕ ಮಾತನಾಡಿದರು. ಸ್ಥಳಕ್ಕೆ ಬಂದು ಬಳ್ಳಾರಿ ಗ್ರೇಡ್‌–2 ತಹಶೀಲ್ದಾರ್ ಹೊನ್ನಮ್ಮ ಹಾಗೂ ವಿಶೇಷ ತಹಶೀಲ್ದಾರ್ ಬಸವರಾಜ ಅವರು  ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry