ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಗಾವಣೆ ಪ್ರಕ್ರಿಯೆಯಲ್ಲಿ ಲೋಪವಾಗದಿರಲಿ

Last Updated 10 ಜನವರಿ 2018, 6:32 IST
ಅಕ್ಷರ ಗಾತ್ರ

ಕೋಲಾರ: ‘ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯಲ್ಲಿ ಯಾವುದೇ ಲೋಪವಾಗದಂತೆ ಇಲಾಖೆ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸ್ವಾಮಿ ಸೂಚನೆ ನೀಡಿದರು.

ನಗರದಲ್ಲಿ ಸೋಮವಾರ ನಡೆದ ಕ್ಷೇತ್ರ ಶಿಕ್ಷಣಾಧಿಕಾರಿಗಳ (ಬಿಇಒ) ಸಭೆಯಲ್ಲಿ ಮಾತನಾಡಿದ ಅವರು, ‘ಪ್ರಾಥಮಿಕ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ 2017ರ ಡಿ.29ರಂದು ಹಾಗೂ ಪ್ರೌಢ ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧ ಜ.1ರಂದು ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿನ ಅಂಶಗಳನ್ನು ಗಮನಿಸಿ ಅದರಂತೆ ಕಾರ್ಯ ನಿರ್ವಹಿಸಬೇಕು’ ಎಂದು ಹೇಳಿದರು.

ಜಿಲ್ಲೆಯ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ಚುನಾವಣೆ ಮತ್ತು ಮತದಾನದ ಮಹತ್ವ ತಿಳಿಸಿಕೊಡಲು ಚುನಾವಣಾ ಆಯೋಗವು ವಿವಿಧ ಸ್ಪರ್ಧೆ ನಡೆಸುವಂತೆ ಸೂಚಿಸಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ತಿಳಿಸಿದರು.

ಪ್ರತಿ ಶಾಲೆಯಲ್ಲೂ ಚುನಾವಣಾ ಸಾಕ್ಷರತಾ ಕ್ಲಬ್ ರಚಿಸಿ, ಮತದಾನದ ಪಾವಿತ್ರ್ಯತೆ, ಹೆಣ್ಣು ಗಂಡು ಬೇಧವಿಲ್ಲದೆ ಕಡ್ಡಾಯ ಮತದಾನ, ದೇಶದ ಅಭಿವೃದ್ಧಿಗೆ ಮತದಾನದ ಮಹತ್ವ ಕುರಿತು ಜ.12ರೊಳಗೆ ಪ್ರಬಂಧ, ಪೋಸ್ಟರ್ ರೈಟಿಂಗ್ ಸ್ಪರ್ಧೆ ನಡೆಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸಿ ಬರೆದ ಪ್ರಬಂಧದ ದಾಖಲೆಯೊಂದಿಗೆ ಪ್ರತಿ ಶಾಲೆಯಿಂದ ತಲಾ ಮೂರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಜಿಲ್ಲಾ ಮಟ್ಟಕ್ಕೆ ಕಳುಹಿಸಬೇಕು. ಜ.17ರೊಳಗೆ ಜಿಲ್ಲಾ ಮಟ್ಟದ ಸ್ಪರ್ಧೆ ನಡೆಸಬೇಕು ಎಂದರು.

ಶಿಕ್ಷಣಾಧಿಕಾರಿಗಳಾದ ಸುಬ್ರಹ್ಮಣ್ಯ, ಎ.ಎನ್.ನಾಗೇಂದ್ರಪ್ರಸಾದ್, ಬಿಇಒಗಳಾದ ಜಿ.ರಘುನಾಥರೆಡ್ಡಿ, ಮಾದವರೆಡ್ಡಿ, ಕೆಂಪರಾಮು, ಕೆಂಪಯ್ಯ, ಸುರೇಶ್, ವಿಷಯ ಪರಿವೀಕ್ಷಕರಾದ ಸಿ.ಆರ್.ಅಶೋಕ್, ನರಸಿಂಹರೆಡ್ಡಿ, ರಾಜಣ್ಣ, ವ್ಯವಸ್ಥಾಪಕ ನಾರಾಯಣಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT