ಉನ್ನತ ತನಿಖೆಗೆ ಒತ್ತಾಯಿಸಿ ಧರಣಿ

7

ಉನ್ನತ ತನಿಖೆಗೆ ಒತ್ತಾಯಿಸಿ ಧರಣಿ

Published:
Updated:

ಕೋಲಾರ: ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಲ್ಲಿ ಅಕ್ರಮ ನಡೆದಿದ್ದು, ಈ ಸಂಬಂಧ ಉನ್ನತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ನಗರದಲ್ಲಿ ಸೋಮವಾರ ಪ್ರಧಾನಮಂತ್ರಿ ಗ್ರಾಮೀಣ ರಸ್ತೆ ಯೋಜನೆ ಕಚೇರಿ ಎದುರು ಧರಣಿ ನಡೆಸಿದರು.

‘ಗ್ರಾಮೀಣ ಅಭಿವೃದ್ಧಿ ಯೋಜನೆಯಡಿ ರಸ್ತೆಗಳ ನಿರ್ಮಾಣಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಸಾಕಷ್ಟು ಅನುದಾನ ಬಿಡುಗಡೆಯಾಗಿದೆ. ಆದರೆ ಗುತ್ತಿಗೆದಾರರು ಕಳಪೆ ಕಾಮಗಾರಿ ಮಾಡಿ ಬಿಲ್‌ ಪಡೆದಿದ್ದಾರೆ. ಅಧಿಕಾರಿಗಳಿಗೆ ಈ ಅಕ್ರಮ ಗೊತ್ತಿದ್ದರೂ ಮೌನವಾಗಿದ್ದಾರೆ’ ಎಂದು ಆರೋಪಿಸಿದರು.

‘ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಸಾಕಷ್ಟು ರಸ್ತೆಗಳು ನಿರ್ಮಾಣವಾಗಿ ಮೂರ್ನಾಲ್ಕು ತಿಂಗಳಲ್ಲೇ ಹಾಳಾಗಿವೆ. ಕಾಮಗಾರಿಯ ಗುಣಮಟ್ಟ ಕಳಪೆಯಾಗಿರುವುದೇ ಇದಕ್ಕೆ ಕಾರಣ. ಈ ಅಕ್ರಮದಲ್ಲಿ ಅಧಿಕಾರಿಗಳು ಗುತ್ತಿಗೆದಾರರ ಜತೆ ಶಾಮೀಲಾಗಿದ್ದಾರೆ. ಅಧಿಕಾರಿಗಳು ಕಾಮಗಾರಿಯ ಗುಣಮಟ್ಟ ಪರಿಶೀಲಿಸದೆ ಬಿಲ್‌ ಮಂಜೂರು ಮಾಡಿದ್ದಾರೆ’ ಎಂದು ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

ರಸ್ತೆ ಕಾಮಗಾರಿಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ಜನಪ್ರತಿನಿಧಿಗಳು ಗಮನ ಹರಿಸುತ್ತಿಲ್ಲ. ಮತ್ತೊಂದೆಡೆ ಚುನಾವಣಾ ವೆಚ್ಚಕ್ಕೆ ಬೇಕಿರುವ ಹಣಕ್ಕಾಗಿ ಕೆಲ ಜನಪ್ರತಿನಿಧಿಗಳು ತಮ್ಮ ಬೆಂಬಲಿಗರು ಮತ್ತು ಹಿಂಬಾಲಕರಿಗೆ ಅಭಿವೃದ್ಧಿ ಕಾಮಗಾರಿಗಳ ಟೆಂಡರ್‌ ಕೊಡಿಸಿ ಕಮಿಷನ್‌ ಪಡೆಯುತ್ತಿದ್ದಾರೆ. ಜನಪ್ರತಿನಿಧಿಗಳ ಬೇಜವಾಬ್ದಾರಿಯಿಂದ ಸಾರ್ವಜನಿಕರ ತೆರಿಗೆ ಹಣ ಪೋಲಾಗುತ್ತಿದೆ ಎಂದು ಹೇಳಿದರು.

ಕಪ್ಪುಪಟ್ಟಿಗೆ ಸೇರಿಸಿ: ಗ್ರಾಮೀಣ ರಸ್ತೆಗಳ ಕಾಮಗಾರಿಯ ಗುಣಮಟ್ಟ ಪರಿಶೀಲಿಸಬೇಕು. ಕಾಮಗಾರಿಯಲ್ಲಿನ ಅಕ್ರಮದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥ ಗುತ್ತಿಗೆದಾರರು ಮತ್ತು ಅಧಿಕಾರಿಗಳ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು. ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಬೇಕು. ವಂಚಕ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಧರಣಿನಿರತರು ಒತ್ತಾಯಿಸಿದರು.

ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಹಸಿರು ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಹರಿಕುಮಾರ್, ಸಂಚಾಲಕ ಕೆ.ಶ್ರೀನಿವಾಸಗೌಡ, ಸದಸ್ಯರಾದ ನಾಗರಾಜಗೌಡ, ಫಾರೂಕ್‌ ಪಾಷಾ, ರಂಜಿತ್ ಕುಮಾರ್, ಉಮಾಗೌಡ, ವಿಜಯಪಾಲ್, ಮಂಜು, ವೆಂಕಟೇಶ್, ಭರತ್, ಕೃಷ್ಣೇಗೌಡ, ನಾರಾಯಣಸ್ವಾಮಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry