ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರ್ಜಲ ವೃದ್ಧಿಗೆ ವಿಶೇಷ ಸಂಘಟನೆ ರಚನೆಗೆ ಸಲಹೆ

Last Updated 11 ಜನವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ಅಂತರ್ಜಲ ವೃದ್ಧಿಗೆ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಂತರ್ಜಲ ಸಂರಕ್ಷಣೆಯ ಬಗ್ಗೆ ಆಸಕ್ತಿ ಇರುವವರು ಮತ್ತು ಅಧಿಕಾರಿಗಳನ್ನು ಒಳಗೊಂಡ ವಿಶೇಷ ಸಂಘಟನೆ ರಚಿಸಬೇಕೆಂದು ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರೇತರ ಸದಸ್ಯ ಡಾ. ಕೆ.ಎಂ. ಜಯರಾಮಯ್ಯ ಆಗ್ರಹಿಸಿದ್ದಾರೆ.

ಸಣ್ಣ ನೀರಾವರಿ ಸಚಿವ ಟಿ.ಬಿ. ಜಯಚಂದ್ರ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಎಚ್.ಕೆ. ಪಾಟೀಲ್ ಮತ್ತು ರಾಜ್ಯದ ಎಲ್ಲಾ ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ ಅವರು ಪತ್ರ ಬರೆದಿದ್ದಾರೆ.

‘ಈಚಿನ ವರ್ಷಗಳಲ್ಲಿ ಸರಿಯಾಗಿ ಮಳೆ ಬಾರದೆ ಕೆರೆ– ಕಟ್ಟೆ, ಕಲ್ಯಾಣಿ, ಬಾವಿಗಳಲ್ಲಿ ಹೂಳು, ಕಸ ತುಂಬುತ್ತಿದೆ. ಹೂಳು ಮತ್ತು ಕಸ ತೆಗೆದು ಇವುಗಳನ್ನು ಸ್ವಚ್ಛಗೊಳಿಸುವುದರಿಂದ ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಿ ಅಂತರ್ಜಲ ವೃದ್ಧಿಸುತ್ತದೆ. ಮಳೆ ನೀರಿನ ಇಂಗು ಗುಂಡಿಗಳನ್ನು ನಿರ್ಮಿಸಿ ಕೊಳವೆಬಾವಿಗಳನ್ನು ಮರುಪೂರಣಗೊಳಿಸುವುದು ಅತ್ಯವಶ್ಯ. ಜತೆಗೆ ನೀರಿನ ಸಂರಕ್ಷಣೆ ಮತ್ತು ಮಿತ ಬಳಕೆ ಬಗ್ಗೆಯೂ ಜನರಲ್ಲಿ ಅರಿವು ಮೂಡಿಸಬೇಕಿದೆ. ಈ ಕಾರ್ಯ ಯಶಸ್ವಿಯಾಗಬೇಕಾದರೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ವಿಶೇಷ ಸಂಘಟನೆಗಳನ್ನು ರಚಿಸಬೇಕು’ ಎಂದು ಪತ್ರದಲ್ಲಿ ಹೇಳಿದ್ದಾರೆ.

‘ಕಳೆದ ವರ್ಷ ಮಹಾರಾಷ್ಟ್ರದ ಅನೇಕ ಹಳ್ಳಿಗಳಲ್ಲಿ ಜನರು ಕುಡಿಯುವ ನೀರಿಗಾಗಿ ಪರಿತಪಿಸಿದ್ದರು. ಬಾಲಿವುಡ್ ನಟರಾದ ಅಮೀರ್‌ಖಾನ್, ನಾನಾ ಪಾಟೇಕರ್ ಸೇರಿದಂತೆ ಹಲವರು ಈ ಹಳ್ಳಿಗಳಿಗೆ ಟ್ಯಾಂಕರ್‌ಗಳಲ್ಲಿ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಮಾಡಿದ್ದರು. ಜತೆಗೆ ಜಲ ಸಂರಕ್ಷಣೆ, ಸಸಿ ನೆಡುವ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಇಂತಹ ಕೆಲಸಗಳು ನಮ್ಮಲ್ಲೂ ಹೆಚ್ಚಾಗಬೇಕು’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT