ಪಟ್ಟಿಯಲ್ಲಿ ಮತದಾರರ ಹೆಸರು ನಾಪತ್ತೆ: ನೋಟಿಸ್‌ ಜಾರಿಗೆ ಆದೇಶ

7

ಪಟ್ಟಿಯಲ್ಲಿ ಮತದಾರರ ಹೆಸರು ನಾಪತ್ತೆ: ನೋಟಿಸ್‌ ಜಾರಿಗೆ ಆದೇಶ

Published:
Updated:

ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದ ಸಾವಿರಾರು ನಿವಾಸಿಗಳ ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿಲ್ಲ’ ಎಂಬ ವಿಚಾರಕ್ಕೆ ಸಂಬಂಧಿಸಿ ರಾಜ್ಯ ಚುನಾವಣಾ ಆಯೋಗ ಹಾಗೂ ಮುಖ್ಯ ಚುನಾವಣಾಧಿಕಾರಿಗೆ ಹೈಕೋರ್ಟ್ ತುರ್ತು ನೋಟಿಸ್ ಜಾರಿಗೆ ಆದೇಶಿಸಿದೆ.

ಈ ಸಂಬಂಧ ‘ವೈಟ್‌ಫೀಲ್ಡ್ ರೈಸಿಂಗ್ ಟ್ರಸ್ಟ್’ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನಾಯಮೂರ್ತಿ ಎಚ್.ಜಿ. ರಮೇಶ್ ಮತ್ತು ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ರಾಜ್ಯ ಸರ್ಕಾರ, ಬಿಬಿಎಂಪಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು 22ಕ್ಕೆ ಮುಂದೂಡಿತು.

‘ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರಿಸುವ ಉದ್ದೇಶದಿಂದ ಮಹದೇವಪುರ ವಿಧಾನಸಭೆ ಕ್ಷೇತ್ರದ ಸಾವಿರಾರು ನಿವಾಸಿಗಳು ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಿದ್ದರು. ಮತ್ತೂ ಕೆಲವರು ನೇರವಾಗಿ ಅರ್ಜಿ ಸಲ್ಲಿಸಿದ್ದರು.  ನಂತರ ಬಿಬಿಎಂಪಿ ಮತದಾರರ ಪಟ್ಟಿ ಪ್ರಕಟಿಸಿತ್ತು. ಆದರೆ, ಆ ಪಟ್ಟಿಯಲ್ಲಿ ನಮ್ಮ ಹೆಸರು ಇರಲಿಲ್ಲ. ಈ ಸಂಬಂಧ ಪದೇ ಪದೇ ಮನವಿ ಸಲ್ಲಿಸಿದರೂ ಚುನಾವಣಾ ಆಯೋಗ ಸೂಕ್ತವಾಗಿ ಸ್ಪಂದಿಸಲಿಲ್ಲ’ ಎಂಬುದು ಅರ್ಜಿದಾರರು ಆಕ್ಷೇಪ.

‘ಇದೊಂದು ಇದು ನೈಜವಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ. ಅರ್ಜಿಯ ತ್ವರಿತ ವಿಚಾರಣೆ ನಡೆಸಿ ವಿಲೇವಾರಿ ಮಾಡುತ್ತೇವೆ’ ಎಂದು ನ್ಯಾಯಪೀಠ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry