ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸದಾಶಿವ ಆಯೋಗದ ವರದಿ ಶೀಘ್ರ ಜಾರಿಗೆ ಸಮಿತಿ ಆಗ್ರಹ

15 ದಿನಗಳಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡದಿದ್ದರೆ ಉಗ್ರ ಹೋರಾಟದ ಎಚ್ಚರಿಕೆ
Last Updated 16 ಜನವರಿ 2018, 19:30 IST
ಅಕ್ಷರ ಗಾತ್ರ

ಬೆಂಗಳೂರು: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೆ 15 ದಿನಗಳೊಳಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡದಿದ್ದರೆ ಹೋರಾಟ ಮಾಡುವುದಾಗಿ ‘ಸದಾಶಿವ ಆಯೋಗ ವರದಿ ಜಾರಿ ಹೋರಾಟ ಸಮಿತಿ’ ಎಚ್ಚರಿಸಿದೆ.

‘ಪರಿಶಿಷ್ಟ ಜಾತಿಯ ಬಲಗೈ ಬಣಕ್ಕೆ ಶೇ 5.5 ಮತ್ತು ಎಡಗೈ ಬಣಕ್ಕೆ ಶೇ 5.5ರಷ್ಟು ಮೀಸಲಾತಿ ಹಂಚಿಕೆ ಮಾಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಒಮ್ಮತಕ್ಕೆ ಬರಲಾಗಿದೆ ಎಂದು ಛಲವಾದಿ ಮಹಾಸಭಾ ಅಧ್ಯಕ್ಷ ಎಚ್.ಪಿ. ಕುಮಾರ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವರದಿ ಜಾರಿಗೆ ಎದುರಾಗುವ ಕಾನೂನು ತೊಡಕುಗಳನ್ನು ಆದಷ್ಟು ಬೇಗ ಪರಿಹರಿಸಿಕೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.

‘ಪರಿಶಿಷ್ಟ ಜಾತಿಗೆ ಸೇರಿದ 11 ಅಲೆಮಾರಿ ಜನಾಂಗಗಳಿಗೆ ಶೇ 1ರಷ್ಟು ಒಳಮೀಸಲಾತಿ ನೀಡಬೇಕು. ಪರಿಶಿಷ್ಟ ಜಾತಿ ಪಟ್ಟಿಯಲ್ಲಿರುವ ಸ್ಪೃಶ್ಯ ಜಾತಿಗಳಾದ ಭೋವಿ, ಲಂಬಾಣಿ, ಕೊರಮ, ಕೊರಚ ಒಳಗೊಂಡು 13 ಜಾತಿಗಳಿಗೆ ಶೇ 3ರಷ್ಟು ಮೀಸಲಾತಿ ನೀಡಲು ನಮ್ಮ ಸಹಮತವಿದೆ’ ಎಂದರು.

‘ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳು ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಟಿಎಸ್‌ಪಿ) ಅಡಿಯಲ್ಲಿ ಆ ರಾಜ್ಯಗಳ ಪರಿಶಿಷ್ಟ ಜಾತಿಗಳ ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ಗಳಲ್ಲಿ ಮನೆ, ಸ್ವಯಂ ಉದ್ಯೋಗಕ್ಕಾಗಿ ಸಾಲ, ಸಬ್ಸಿಡಿ ನೀಡುತ್ತಿವೆ. ಅಲ್ಲದೆ, ಪರಿಶಿಷ್ಟ ಜಾತಿಗಳ ಜಿಲ್ಲಾವಾರು ಜನಸಂಖ್ಯೆಗೆ ಅನುಗುಣವಾಗಿ ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮಾಡಲಾಗುತ್ತಿವೆ. ಅದೇ ಮಾದರಿಯಲ್ಲಿ ನಮ್ಮಲ್ಲೂ 101 ಪರಿಶಿಷ್ಟ ಜಾತಿಗಳಿಗೆ ಅನುದಾನ ಹಂಚಿಕೆ ಮಾಡಬೇಕು’ ಎಂದು ಆಗ್ರಹಿಸಿದರು.

‘ಸದಾಶಿವ ಆಯೋಗದ ವರದಿ ಜಾರಿಯಾದರೆ 101 ಪರಿಶಿಷ್ಟ ಜಾತಿಗಳಲ್ಲಿ ಸಾಮರಸ್ಯ ಕದಡಲಿದೆ. ಈ ಜಾತಿಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಸ್ಥಿತಿಗತಿ ಬಗ್ಗೆ ಸಮಗ್ರ ಅಧ್ಯಯನ ಮಾಡದೆ ವರದಿ ಸಿದ್ಧಪಡಿಸಲಾಗಿದೆ. ಹೀಗಾಗಿ ಇದನ್ನು ಒಪ್ಪಬಾರದು’ ಎಂದು ಭೋವಿ ಜನಾಂಗದ ಒಕ್ಕೂಟ ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರಿಗೆ ಮನವಿ ಮಾಡಿದೆ.

‘ಭೋವಿ ಜನಾಂಗವು ಆರ್ಥಿಕ, ರಾಜಕೀಯ, ಸಾಮಾಜಿಕ ಮತ್ತು ಶೈಕ್ಷಣಿಕ ವಾಗಿ ಬಹಳ ಹಿಂದುಳಿದಿದೆ. ಹೀಗಾಗಿ ಭೋವಿ ಜನಾಂಗಕ್ಕೆ ವಿಶೇಷ ಅನುದಾನ ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಬೇಕು’ ಎಂದು ಒಕ್ಕೂಟದ ನಂಜಪ್ಪ ಭೋವಿ ಮನವಿ ಮಾಡಿದ್ದಾರೆ. ಈ ಸಂಬಂಧ ಒಕ್ಕೂಟ ಮನವಿ ಸಲ್ಲಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT