ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್

7

ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್

Published:
Updated:
ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್

ಚಿಕ್ಕಬಳ್ಳಾಪುರ: ‘ಸರ್ಕಾರಿ ಮತ್ತು ಅನು ದಾನಿತ ಕಾಲೇಜುಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳ ವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಚಿತ ಲ್ಯಾಪ್‌ಟಾಪ್‌ ವಿತರಣೆ ಕಾರ್ಯಕ್ರಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ವಿತರಿಸಿ ಮಾತನಾಡಿದರು.

‘ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಮತ್ತು ಅನುದಾನಿತ ಎಂಜಿನಿಯರಿಂಗ್‌, ವೈದ್ಯಕೀಯ, ದಂತ ವೈದ್ಯಕೀಯ, ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್‌ ಹಾಗೂ ಡಿಪ್ಲೊಮಾದಲ್ಲಿ ಮೊದಲ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಮಾತ್ರ ಈ ಭಾಗ್ಯ ಸಿಗಲಿದೆ. ಸುಮಾರು 1.5 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ ₹ 272 ಕೋಟಿ ಟೆಂಡರ್ ಪೂರ್ಣಗೊಂಡಿದೆ’ ಎಂದು ಹೇಳಿದರು.

‘ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಲು ಬಜೆಟ್‌ನಲ್ಲಿ ಅನುದಾನ ಮೀಸಲಾಗಿ ಇಡಲಾಗುತ್ತಿತ್ತು. ಆದರೆ ಸಚಿವರು, ಶಾಸಕರು ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಲ್ಯಾಪ್‌ಟ್ಯಾಪ್‌ ವಿತರಿಸಿ ಎಂದು ಒತ್ತಾಯ ಹೇರಿದ್ದರು. ಪ್ರಸ್ತಾವಕ್ಕೆ ಜುಲೈನಲ್ಲಿ ಸಂಪುಟ ಸಭೆ ಅನುಮೋದನೆ ದೊರೆತಿದೆ’ ಎಂದರು.

ಶಾಸಕ ಡಾ.ಕೆ. ಸುಧಾಕರ್‌ ಮಾತನಾಡಿ, ‘ರಾಜ್ಯ ಸರ್ಕಾರ ಕಳೆದ ನಾಲ್ಕು ವರ್ಷ ಎಂಟು ತಿಂಗಳ ಅವಧಿಯಲ್ಲಿ ವಿದ್ಯಾರ್ಥಿಗಳಿಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ವಿದ್ಯಾಶ್ರೀ, ಮಧ್ಯಾಹ್ನದ ಬಿಸಿಯೂಟ, ಕ್ಷೀರ ಭಾಗ್ಯ, ವಿದ್ಯಾರ್ಥಿ ವೇತನ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಕೊಟ್ಟಿದ್ದೇವೆ. ವಿದೇಶದಲ್ಲಿ ಬಡವರ ಮಕ್ಕಳು ಉನ್ನತ ಶಿಕ್ಷಣ ಪಡೆಯಲು ಸಹಕಾರ ನೀಡಲಾಗುತ್ತಿದೆ’ ಎಂದು ತಿಳಿಸಿದರು.

‘ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಕಳೆದ ಸಾಲಿನಲ್ಲಿ ಉಚಿತ ಬಸ್‌ಪಾಸ್‌ ವಿತರಣೆ ಮಾಡಲಾಗಿದೆ. ಮುಂದಿನ ವರ್ಷದಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಬಸ್‌ಪಾಸ್‌ ವಿತರಣೆ ಮಾಡಲಾಗುವುದು. ಬಡ ಕುಟುಂಬದ ವಿದ್ಯಾರ್ಥಿಗಳು ಕೀಳರಿಮೆ ಬಿಟ್ಟು ಸ್ಪರ್ಧಾ ಸ್ಫೂರ್ತಿಯಿಂದ ಕಲಿಯಬೇಕು. ಪೋಷಕರ ಜವಾಬ್ದಾರಿ ಅರಿತು ಉನ್ನತ ಶಿಕ್ಷಣ ಪಡೆಯಬೇಕು’ ಎಂದರು.

‘ಪರೀಕ್ಷೆ ಸಮಯದಲ್ಲಿ ಲ್ಯಾಪ್‌ಟಾಪ್‌ ಹೆಚ್ಚು ಅನುಕೂಲಕರವಾಗಲಿದೆ. ಮುಂಬರುವ ದಿನಗಳಲ್ಲಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ಸ್ಥಳೀಯ ಶಾಸಕರ ಸಮ್ಮುಖದಲ್ಲಿ ಲ್ಯಾಪ್‌ಟಾಪ್ ವಿತರಿಸಲಾಗುತ್ತದೆ’ ಎಂದರು.

ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಪಿ.ಎನ್‌.ಕೇಶವರೆಡ್ಡಿ, ಉಪಾಧ್ಯಕ್ಷೆ ನಿರ್ಮಲಾ ಮುನಿರಾಜು, ಜಿಲ್ಲಾಧಿಕಾರಿ ದೀಪ್ತಿ ಕಾನಡೆ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎನ್.ಅನುರಾಧಾ, ಜಿಲ್ಲಾ ಪಂಚಾಯಿತಿ ಸಿಇಒ ಗುರುದತ್‌ ಹೆಗಡೆ, ಎಸ್‌ಪಿ ಕಾರ್ತಿಕ್‌ ರೆಡ್ಡಿ ಉಪಸ್ಥಿತರಿದ್ದರು.

* * 

ವಿದ್ಯಾರ್ಥಿಗಳು ಉಚಿತ ಲ್ಯಾಪ್‌ಟಾಪ್‌ ಸದ್ಭಳಕೆ ಮಾಡಿಕೊಂಡು, ಪೋಷಕರಿಗೆ ಹಾಗೂ ಕಾಲೇಜಿಗೆ ಕೀರ್ತಿ ತರುವ ಸಾಧನೆ ಮಾಡಬೇಕು.

ರಾಮಲಿಂಗಾರೆಡ್ಡಿ ಜಿಲ್ಲಾ ಉಸ್ತುವಾರಿ ಸಚಿವ

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry