ಕಾವೇರಿ: ಕೇಂದ್ರದ ವಿರುದ್ಧ ಪಳನಿ ಗರಂ

7

ಕಾವೇರಿ: ಕೇಂದ್ರದ ವಿರುದ್ಧ ಪಳನಿ ಗರಂ

Published:
Updated:
ಕಾವೇರಿ: ಕೇಂದ್ರದ ವಿರುದ್ಧ ಪಳನಿ ಗರಂ

ಚೆನ್ನೈ : ಕರ್ನಾಟಕದಿಂದ ಕಾವೇರಿ ನದಿ ನೀರು ಬಿಡುಗಡೆ ಮಾಡಿಸುವಂತೆ ಕೋರಿ ರಾಜ್ಯ ಮಾಡಿರುವ ಮನವಿ ಬಗ್ಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಬುಧವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾವೇರಿ ಅಚ್ಚುಕಟ್ಟು ಪ್ರದೇಶದಲ್ಲಿ ರೈತರು ಬೆಳೆದಿರುವ ಬೆಳೆಯನ್ನು ಉಳಿಸಿಕೊಳ್ಳುವುದಕ್ಕಾಗಿ ಲಭ್ಯ ಇರುವ ನೀರನ್ನು ಒಂದು ಅಥವಾ ಎರಡು ದಿನಗಳಲ್ಲಿ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

‘ಕಾವೇರಿ ವಿಚಾರದಲ್ಲಿ ತನ್ನ ತೀರ್ಪನ್ನು ಶೀಘ್ರವಾಗಿ ನೀಡುವುದಾಗಿ ಸುಪ್ರೀಂ ಕೋರ್ಟ್‌ ಹೇಳಿದೆ. ಆದರೆ, ಸದ್ಯ ರೈತರಿಗೆ ಬೇಕಾದಷ್ಟು ನೀರು ನಮ್ಮ ಬಳಿ ಇಲ್ಲ’ ಎಂದು ಪಳನಿಸ್ವಾಮಿ ಹೇಳಿದ್ದಾರೆ.

ಎಐಎಡಿಎಂಕೆ ಸಂಸ್ಥಾಪಕ ಮತ್ತು ಮಾಜಿ ಮುಖ್ಯಮಂತ್ರಿ ಎಂ.ಜಿ. ರಾಮಚಂದ್ರನ್‌ ಅವರ 101 ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಾಕಷ್ಟು ಮಳೆಯಾಗದೇ ಇರುವುದರಿಂದ ರೈತರಿಗೆ ಅಗತ್ಯವಿರುವಷ್ಟು ನೀಡು ಕೊಡಲಾಗುತ್ತಿಲ್ಲ’ ಎಂದು ಹೇಳಿದ್ದಾರೆ.

‘ನೀರು ಇಲ್ಲದಿರುವುದರಿಂದ ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಮನವಿ ಮಾಡಿದ್ದೆವು. ಆದರೆ, ಅವರು ಕ್ರಮ ಕೈಗೊಳ್ಳಲಿಲ್ಲ’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದ್ದಾರೆ.

‘ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಪತ್ರ ಬರೆಯಲಾಗಿತ್ತು. ಅದರ ಜೊತೆಗೆ ಸುಪ್ರೀಂ ಕೋರ್ಟ್‌ನಲ್ಲಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಲಾಗಿತ್ತು’ ಎಂದು ಅವರು ವಿವರಿಸಿದ್ದಾರೆ.

ಆದರೆ, ಸುಪ್ರೀಂ ಕೋರ್ಟ್‌ ಈ ಪ್ರಕರಣದ ತೀರ್ಪನ್ನು ಶೀಘ್ರದಲ್ಲಿ ಪ್ರಕಟಿಸಲಿರುವುದರಿಂದ ಮಧ್ಯಂತರ ಅರ್ಜಿಯನ್ನು ಸ್ವೀಕರಿಸಲಿಲ್ಲ ಎಂದು ಅವರು ತಿಳಿಸಿದ್ದಾರೆ.

‘ಬೆಳೆದು ನಿಂತ ಬೆಳೆಯನ್ನು ರಕ್ಷಿಸುವುದಕ್ಕಾಗಿ ನೀರು ಬಿಡುಗಡೆ ಮಾಡುವಂತೆ ಕರ್ನಾಟಕ ಮುಖ್ಯಮಂತ್ರಿ ಅವರಿಗೆ ಮತ್ತೊಮ್ಮೆ ಪತ್ರ ಬರೆಯಲಾಗಿತ್ತು. ಆದರೆ, ಏನು ಉತ್ತರ ಬಂದಿತ್ತು ಎಂಬುದು ನಿಮಗೆಲ್ಲರಿಗೂ ಗೊತ್ತಿದೆ’ ಎಂದು ಪಳನಿಸ್ವಾಮಿ ಹೇಳಿದ್ದಾರೆ.

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು.

‘ಈಗಿನ ಪರಿಸ್ಥಿತಿಯಲ್ಲಿ ಲಭ್ಯವಿರುವ ನೀರನ್ನು ರೈತರ ನೀಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ಪಳನಿಸ್ವಾಮಿ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry