ಕನಿಷ್ಠ ವೇತನ ಜಾರಿಗೆ ಆಗ್ರಹ

7
ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ

ಕನಿಷ್ಠ ವೇತನ ಜಾರಿಗೆ ಆಗ್ರಹ

Published:
Updated:
ಕನಿಷ್ಠ ವೇತನ ಜಾರಿಗೆ ಆಗ್ರಹ

ಮಡಿಕೇರಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಶಾ, ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಜನರಲ್‌ ತಿಮ್ಮಯ್ಯ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಕಾರ್ಯಕರ್ತೆಯರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಆಶಾ, ಅಂಗನವಾಡಿ ಹಾಗೂ ಬಿಸಿಯೂಟ ಕಾರ್ಯಕರ್ತೆಯರನ್ನೂ ಕಾರ್ಮಿಕರೆಂದು ಪರಿಗಣಿಸಿ, ₹ 18 ಸಾವಿರ ಕನಿಷ್ಠ ವೇತನ ನೀಡಬೇಕು’ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಗೌರವಧನ ಹಾಗೂ ಪ್ರೋತ್ಸಾಹಧನದ ಹೆಸರಿನಲ್ಲಿ ನಮ್ಮನ್ನು ಶೋಷಣೆ ಮಾಡಲಾಗುತ್ತಿದೆ. ಆಶಾ ಕಾರ್ಯಕರ್ತೆಯರಿಗೆ ಕೆಲಸ ಆಧರಿಸಿ ಹಣ ಪಾವತಿಸಲಾಗುತ್ತಿದೆ. ಅದೇ ಬಿಸಿಯೂಟದ ಕಾರ್ಯಕರ್ತೆಯರಿಗೆ 10 ತಿಂಗಳು ಮಾತ್ರ ಗೌರವಧನ ನೀಡಲಾಗುತ್ತಿದೆ ಎಂದು ಆಪಾದಿಸಿದರು.

45ನೇ ಭಾರತದ ಕಾರ್ಮಿಕ ಸಮ್ಮೇಳನದಲ್ಲಿ ಮೂರು ವರ್ಗವನ್ನು ದೇಶದ ಕಾರ್ಮಿಕ ಪರಿಭಾಷೆಯಲ್ಲಿ ‘ವರ್ಕರ‍್ಸ್’ ಅಥವಾ ಕಾರ್ಮಿಕರು ಎಂದೇ ಕರೆಯಬೇಕು ಎಂದು ನಿರ್ಣಯ ಕೈಗೊಳ್ಳಲಾಗಿದೆ. ಅವರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು. ಸಾಮಾಜಿಕ ಭದ್ರತೆ ಒದಗಿಸಬೇಕು ಎಂದು ಮನವಿ ಸಲ್ಲಿಸಲಾಗಿತ್ತು. ಆದರೆ, ಯುಪಿಎ ಸರ್ಕಾರದಂತೆಯೇ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಎನ್‌ಡಿಎ ಸರ್ಕಾರವು ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆಪಾದಿಸಿದರು.

‘ಐಸಿಡಿಎಸ್‌, ಎನ್‌ಎಚ್‌ಎಂ ಹಾಗೂ ಎಂಡಿಎಂ ಯೋಜನೆಗಳನ್ನೇ ಕೇಂದ್ರ ಸರ್ಕಾರವು ಬಂದ್‌ ಮಾಡಲು ಹೊರಟಿದೆ. ಎನ್‌ಡಿಎ ಅಧಿಕಾರಕ್ಕೆ ಬಂದ ಬಳಿಕ ಪ್ರತಿವರ್ಷ ನೀಡುತ್ತಿದ್ದ ಅನುದಾನ ಕಡಿತ ಮಾಡಲಾಗುತ್ತಿದೆ. ನಿಧಾನವಾಗಿ ಕಾರ್ಪೊರೇಟ್‌ ಕಂಪೆನಿಗಳಿಗೆ ವಹಿಸುವ ಹುನ್ನಾರವೂ ನಡೆಯುತ್ತಿದೆ. ಆಧಾರ ಹಾಗೂ ಬ್ಯಾಂಕ್‌ ಖಾತೆಯ ಜೋಡಣೆಯ ನೆಪದಲ್ಲಿ ಫಲಾನುಭವಿಗಳ ಮೇಲೂ ಸರ್ಕಾರ ಅಕ್ರಮ ನೀತಿ ಅನುಸರಿಸುತ್ತಿದೆ’ ಎಂದು ಆಪಾದಿಸಿದರು.

ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘ, ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘ ಹಾಗೂ ಅಕ್ಷರ ದಾಸೋಹ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾಗೆ ಮನವಿ ಸಲ್ಲಿಸಲಾಯಿತು.

ಎಐಯುಟಿಯುಸಿ ಜಿಲ್ಲಾ ಸಂಚಾಲಕ ಮುದ್ದುಕೃಷ್ಣ, ಟಿ.ಪಿ. ರಮೇಶ್‌, ಪೂರ್ಣಿಮಾ, ಸುಮನ್‌, ರೇವತಿ, ಲಿಲಾವತಿ, ಶಾಂತಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry