ಎಸಿಬಿಗೆ ನೋಟಿಸ್‌ ಜಾರಿಗೊಳಿಸಲು ಆದೇಶ

7

ಎಸಿಬಿಗೆ ನೋಟಿಸ್‌ ಜಾರಿಗೊಳಿಸಲು ಆದೇಶ

Published:
Updated:

ಬೆಂಗಳೂರು: ಬಗರ್ ಹುಕುಂ ಜಮೀನು ಅಕ್ರಮ ಮಂಜೂರು ಆರೋಪ ಪ್ರಕರಣದಲ್ಲಿ ಎಫ್‌ಐಆರ್‌ ರದ್ದುಕೋರಿ ಬಿಜೆಪಿ ಮುಖಂಡ ಆರ್. ಅಶೋಕ್ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

‘ನನ್ನ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಬೇಕು’ ಎಂದು ಕೋರಿ ಅಶೋಕ್‌ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ರಾಜ್ಯ ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಎಸಿಬಿ, ದೂರುದಾರ ಎ.ಆನಂದ ಮತ್ತು ಕರ್ನಾಟಕ ಲೋಕಾಯುಕ್ತ ರಿಜಿಸ್ಟ್ರಾರ್‌ ಅವರಿಗೆ ನೋಟಿಸ್ ಜಾರಿಗೆ ಆದೇಶಿಸಿತು.

ವಿಚಾರಣೆ ವೇಳೆ ಅಶೋಕ್ ಪರ ವಕೀಲರು ವಾದ ಮಂಡಿಸಿ, ‘ಅರ್ಜಿದಾರರ ವಿರುದ್ಧ ರಾಜಕೀಯ ಪ್ರೇರಿತ ಹಾಗೂ ದುರುದ್ದೇಶದಿಂದ ದೂರು ದಾಖಲಿಸಲಾಗಿದೆ. ದೂರುದಾರರು ಕಾಂಗ್ರೆಸ್‌ಗೆ ಸೇರಿದವರಾಗಿದ್ದಾರೆ. ಇದೊಂದು ಹಳೆಯ ಪ್ರಕರಣವಾಗಿದ್ದು, ಲೋಕಾಯುಕ್ತದಲ್ಲಿ ಇನ್ನೂ ವಿಚಾರಣೆಗೆ ಬಾಕಿ ಇದೆ. ಆದ್ದರಿಂದ ದೂರಿಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡಬೇಕು’ ಎಂದರು.


ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಮೊದಲು ಪ್ರತಿವಾದಿಗಳು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲಿ. ಆನಂತರ ವಿಸ್ತೃತ ವಿಚಾರಣೆ ನಡೆಸಬಹುದು’ ಎಂದು ತಿಳಿಸಿ ವಿಚಾರಣೆ ಮುಂದೂಡಿದರು.

ಪ್ರಕರಣವೇನು?: ‘ಬೆಂಗಳೂರು ದಕ್ಷಿಣ ತಾಲ್ಲೂಕಿನಲ್ಲಿ ಅಕ್ರಮ ಭೂ ಮಂಜೂರಾತಿ ಮಾಡಲಾಗಿದೆ’ ಎಂದು ಎ.ಆನಂದ ಎಂಬುವರು ಆರ್. ಅಶೋಕ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿದ್ದಾರೆ. ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ.

‘1998ರಿಂದ 2006ರ ಅವಧಿಯಲ್ಲಿ ಬೆಂಗಳೂರು–ದಕ್ಷಿಣ ತಾಲ್ಲೂಕಿನ ಭೂ–ಸಕ್ರಮೀಕರಣ ಸಮಿತಿ ಅಧ್ಯಕ್ಷರು, ಉತ್ತರಹಳ್ಳಿ ಕ್ಷೇತ್ರದ ಅಂದಿನ ಶಾಸಕ ಆರ್. ಅಶೋಕ್, ಇತರ ಸರ್ಕಾರಿ ನೌಕರರು ಮತ್ತು ಅಕ್ರಮ ಫಲಾನುಭವಿಗಳು’ ಎಂಬುದು ದೂರುದಾರರ ಆರೋಪ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry