ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರಿಷ್ಕೃತ ಜ್ಯೇಷ್ಠತಾ ಪಟ್ಟಿ: ಸರ್ಕಾರಕ್ಕೆ ನೋಟಿಸ್‌

ಬಡ್ತಿ ಮೀಸಲು ಕಾಯ್ದೆ ರದ್ದತಿ ಆದೇಶ
Last Updated 22 ಜನವರಿ 2018, 19:30 IST
ಅಕ್ಷರ ಗಾತ್ರ

ನವದೆಹಲಿ: ಬಡ್ತಿ ಮೀಸಲಾತಿ ಕಾಯ್ದೆ ರದ್ದುಪಡಿಸಿದ್ದ ಆದೇಶಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿದ ಕುರಿತು ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್‌ ಸೋಮವಾರ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಸರ್ಕಾರಿ ನೌಕರರಾದ ಆರ್‌.ಟಿ. ಚಂದ್ರಮೌಳಿ ಮತ್ತಿತರರು ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ನ್ಯಾಯಮೂರ್ತಿ ಮದನ್‌ ಬಿ.ಲೋಕೂರ್‌ ನೇತೃತ್ವದ ಪೀಠವು, ಈ ಕುರಿತು ‘ಯಥಾಸ್ಥಿತಿ ಕಾಪಾಡಬೇಕು’ ಎಂದು ಅರ್ಜಿದಾರರ ಪರ ವಕೀಲರಾದ ಕಪಿಲ್‌ ಸಿಬಲ್‌ ಹಾಗೂ ವಿ.ಲಕ್ಷ್ಮೀನಾರಾಯಣ ಅವರು ಮಾಡಿಕೊಂಡ ಮನವಿಯನ್ನು ತಿರಸ್ಕರಿಸಿತು.

ಸರ್ಕಾರಿ ನೌಕರರಾದ ಬಿ.ಕೆ. ಪವಿತ್ರಾ ಮತ್ತಿತರರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್‌, ಬಡ್ತಿ ಮೀಸಲಾತಿ ವಿಧಾನ ಅನುಸರಿಸುವ ರಾಜ್ಯ ಸರ್ಕಾರದ 2002ರ ಕಾಯ್ದೆಯನ್ನು ರದ್ದುಪಡಿಸಿ ಕಳೆದ ಫೆಬ್ರುವರಿ 9ರಂದು ಆದೇಶಿಸಿತ್ತು. ಅಲ್ಲದೆ, ಪರಿಷ್ಕೃತ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸುವಂತೆಯೂ ಸೂಚಿಸಿತ್ತು. ಆ ಆದೇಶದ ಪ್ರಕಾರ ರಾಜ್ಯ ಸರ್ಕಾರ ಕಳೆದ ಮೇ 8ರಂದು ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿತ್ತು.

‘ಪರಿಷ್ಕೃತ ಪಟ್ಟಿ ಸಿದ್ಧಪಡಿಸಿದ್ದರಿಂದ ನಮಗೆ ಅನ್ಯಾಯವಾಗಲಿದೆ’ ಎಂದು ತಿಳಿಸಿ ಅರ್ಜಿದಾರರು ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ್ದ ರಾಜ್ಯ ಹೈಕೋರ್ಟ್‌ನ ವಿಭಾಗೀಯ ಪೀಠವು, ಈ ವಿಷಯದಲ್ಲಿ ಮಧ್ಯಸ್ಥಿಕೆ ವಹಿಸಲು ಆಗುವುದಿಲ್ಲ ಎಂದು ತಿಳಿಸಿ ಕಳೆದ ಅಕ್ಟೋಬರ್‌ನಲ್ಲಿ ಅರ್ಜಿ ತಿರಸ್ಕರಿಸಿತ್ತು.

ಇಂದಿರಾ ಸಹಾನಿ (1992ರಲ್ಲಿ) ಹಾಗೂ ಎಂ.ನಾಗರಾಜ್‌ ಮತ್ತಿತರರು (2002ರಲ್ಲಿ) ಸಲ್ಲಿಸಿದ್ದ ಮೇಲ್ಮನವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ 2006ರಲ್ಲಿ ನೀಡಿರುವ ಆದೇಶವನ್ನು ಆಧರಿಸಿಯೇ 2017ರ ಫೆಬ್ರುವರಿ 9ರ ಆದೇಶ ನೀಡಲಾಗಿದೆ. ಇದೀಗ ಆ ಆದೇಶದ ಮರು ಪರಿಶೀಲನೆ ಜವಾಬ್ದಾರಿಯನ್ನು ಸಂವಿಧಾನ ಪೀಠಕ್ಕೆ ವಹಿಸಲಾಗಿದೆ. 40 ವರ್ಷ ಸೇವೆ ಸಲ್ಲಿಸಿರುವ ನೌಕರರಿಗೆ ಹಿಂಬಡ್ತಿ ದೊರೆಯುವ ಸಾಧ್ಯತೆ ಇದೆ ಎಂದು ಕಪಿಲ್‌ ಸಿಬಲ್‌ ಪೀಠಕ್ಕೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT